ಕನ್ನಡಪ್ರಭ ವಾರ್ತೆ ಅರಸೀಕೆರೆ
ನಗರದ ತಾಲೂಕು ಕಚೇರಿಯ ಕಂದಾಯ ಭವನದಲ್ಲಿ ತಾಲೂಕು ಆಡಳಿತ, ಒಕ್ಕಲಿಗರ ಸಂಘ ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶ್ವಮಾನವ ಕುವೆಂಪು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕುವೆಂಪು ಅವರ ವ್ಯಕ್ತಿತ್ವ ಕರ್ನಾಟಕಕ್ಕೆ ಮಾತ್ರ ಸೀಮಿತವಾಗದೇ “ವಿಶ್ವಮಾನವ” ಎಂಬ ಬಿರುದಿಗೆ ಸಂಪೂರ್ಣವಾಗಿ ಅರ್ಹವಾಗಿದೆ ಎಂದರು.ಪಾಶ್ಚಾತ್ಯ ರಾಷ್ಟ್ರಗಳಲ್ಲಿಯೂ ಕುವೆಂಪು ಅವರ ಸಾಹಿತ್ಯ ಮತ್ತು ತತ್ವಚಿಂತನೆಗಳು ಪ್ರಭಾವ ಬೀರಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿನಲ್ಲಿ ಕುವೆಂಪು ಅವರ ಜೀವನ ಮತ್ತು ವಿಚಾರಧಾರೆಯನ್ನು ಅಧ್ಯಯನ ಮಾಡುವ ಮೂಲಕ ಮಹಾನ್ ದಾರ್ಶನಿಕರ ಚಿಂತನೆ ಮುಂದಿನ ಪೀಳಿಗೆಗೆ ತಲುಪಬೇಕು ಎಂದು ಹೇಳಿದರು. ಕುವೆಂಪು ಕನಸಿನಂತೆ “ವಿಶ್ವವೇ ಒಂದು ಶಾಂತಿಯ ತೋಟ”ವಾಗಬೇಕಾದರೆ ಯುದ್ಧ, ದ್ವೇಷ ಮತ್ತು ಅಸಹಿಷ್ಣುತೆ ಅಳಿಯಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳು ವಾಸ್ತವಾಂಶಕ್ಕಿಂತ ಉದ್ರೇಕಕಾರಿ ಸುದ್ದಿಗಳಿಗೆ ಒತ್ತು ನೀಡುತ್ತಿರುವುದು ಆತಂಕಕಾರಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.ಒಕ್ಕಲಿಗರ ಸಂಘದ ಅಧ್ಯಕ್ಷ ಅನಂತ್ ಕುಮಾರ್ ಮಾತನಾಡಿ, ಕುವೆಂಪು ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಅವರ ಚಿಂತನೆಗಳನ್ನು ಜನತೆಗೆ ತಲುಪಿಸುವ ಕೆಲಸ ಶ್ಲಾಘನೀಯವಾಗಿದೆ ಎಂದರು.ಕಾರ್ಯಕ್ರಮದಲ್ಲಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು. ತಹಸೀಲ್ದಾರ್ ಎಂ.ಜಿ. ಸಂತೋಷ್ ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗಂಗಣ್ಣ, ನಗರಸಭೆ ಪೌರಾಯುಕ್ತ ಕೃಷ್ಣಮೂರ್ತಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಬಾಬು, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಯಣ್ಣ, ಡಾ. ಶಿಬಿರ ಹೆಗಡೆ, ದೈಹಿಕ ಶಿಕ್ಷಣ ಪರಿವೀಕ್ಷಕ ವಸಂತ್ ಕುಮಾರ್, ಅರಣ್ಯ ಇಲಾಖೆ ವಲಯಾಧಿಕಾರಿ ಹೇಮಂತ್, ಶಿರಸ್ತೇದಾರ್ ಶಿವಶಂಕರ್, ಶಿಕ್ಷಕಿ ಕುಸುಮ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.