ಕೊಪ್ಪಳ: ಕನ್ನಡ ಭಾಷೆಯಲ್ಲಿ ತಂತ್ರಜ್ಞಾನದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ 70ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ರಾಜ್ಯವು ಏಕೀಕರಣವಾಗಿ 69 ವರ್ಷಗಳು ಪೂರ್ಣಗೊಂಡಿವೆ. ಏಕೀಕರಣದಲ್ಲಿ ಜಿಲ್ಲೆ ಪಾತ್ರ ಪ್ರಮುಖ ಸ್ಥಾನ ವಹಿಸುತ್ತದೆ ಎಂದರು.ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಕೊಪ್ಪಳ ಜಿಲ್ಲೆಯ ಪಾತ್ರವೂ ಅಷ್ಟೇ ಪ್ರಮುಖವಾದುದಾಗಿದೆ. ಕೊಪ್ಪಳ ಜಿಲ್ಲೆಯ ಅಳವಂಡಿ ಶಿವಮೂರ್ತಿಸ್ವಾಮಿ, ಶಿರೂರು ವೀರಭದ್ರಪ್ಪ ತೆಗ್ಗಿನಮನಿ, ಶಂಕರಗೌಡ್ರು,ಪ್ರಭುರಾಜ ಪಾಟೀಲ್ ಸಂಗನಾಳ, ಪಂಚಾಕ್ಷರಿ ಹಿರೇಮಠ, ಸೋಮಪ್ಪ ಡಂಬಳ, ದೇವೇಂದ್ರಕುಮಾರ ಹಕಾರಿ, ಭೀಮನಗೌಡ ಪಾಟೀಲ್, ಹನುಮರಡ್ಡಿ ಕಲ್ಗುಡಿ, ಪಂಚಪ್ಪ ಶೆಟ್ಟರು, ಹಂಜಿ ಕೊಟ್ರಪ್ಪ ಮುಂತಾದವರು ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ್ದನ್ನು ನಾವು ಸ್ಮರಿಸಬೇಕು ಎಂದರು.
ಕನ್ನಡ ಭಾಷೆಯಲ್ಲಿ ತಂತ್ರಜ್ಞಾನದ ಅಭಿವೃದ್ಧಿಗೆ ನಮ್ಮ ಸರ್ಕಾರ ಹೆಚ್ಚಿನ ಒತ್ತು ನೀಡಿದೆ. ಕನ್ನಡ ಕನ್ನಡಿಗರೆಲ್ಲರು ಮಾತನಾಡಿದಾಗ ಮತ್ತು ಬಳಸಿದಾಗ ಮಾತ್ರ ಕನ್ನಡದ ಬೆಳವಣಿಗೆ ಸಾಧ್ಯವಿದೆ. ಕನ್ನಡದ ಲಿಪಿ ಮುಂದಿನ ಜನಾಂಗಕ್ಕೂ ಬರೆಯಲು ಕಲಿಸಿದಾಗ ಮಾತ್ರ ಈ ಭಾಷೆ ಉಳಿಸಿ, ಬೆಳೆಸಿಕೊಂಡು ಹೋಗಲು ಸಾಧ್ಯವಾಗುತ್ತದೆ.ಈ ಹಿನ್ನೆಲೆಯಲ್ಲಿ ನಮ್ಮ ರಾಜ್ಯ ಸರ್ಕಾರವು ಕನ್ನಡ ನಾಡು ನುಡಿ ಸೇವೆಗೆ ಸದಾಕಾಲ ಬದ್ಧವಾಗಿದೆ ಎಂದರು.ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸ್ಥಾಪನೆಯಿಂದ ನಮ್ಮ ಭಾಗದ ಸರ್ವೋತೋಮುಖ ಅಭಿವೃದ್ಧಿಗೆ ಅನುಕೂಲವಾಗಿದ್ದು, ಈ ಮಂಡಳಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ₹5 ಸಾವಿರ ಕೋಟಿ ಅನುದಾನ ನೀಡುವ ಮೂಲಕ ನಮ್ಮ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡುತ್ತಿದೆ. ಈ ಹಿನ್ನೆಲೆಯಲ್ಲಿ 2025-26ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಕೊಪ್ಪಳ ಜಿಲ್ಲೆಗೆ ಮೈಕ್ರೋ ವಲಯದಲ್ಲಿ ₹ 236.39 ಕೋಟಿ ಹಾಗೂ ಮ್ಯಾಕ್ರೋ ವಲಯದಲ್ಲಿ ₹99.68 ಕೋಟಿ ಹೀಗೆ ಒಟ್ಟು ₹ 336.08 ಕೋಟಿ ಅನುದಾನ ನಿಗದಿಪಡಿಸಲಾಗಿದೆ. ಜಿಲ್ಲೆಗೆ ನಿಗದಿಪಡಿಸಿದ ಅನುದಾನಕ್ಕೆ ಕ್ರಿಯಾ ಯೋಜನೆ ರೂಪಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.
ಆಕರ್ಷಕ ಪಥಸಂಚಲನ:ಪಥ ಸಂಚಲನದಲ್ಲಿ ಪೊಲೀಸ್ ಇಲಾಖೆ,ಸಶಸ್ತ್ರ ಮೀಸಲು ಪಡೆ, ಗೃಹ ರಕ್ಷಕದಳ, ಭಾರತ ಸೇವಾದಳ, ಎನ್.ಸಿ.ಸಿ, ಭಾರತ್ ಸ್ಕೌಟ್ಸ್ & ಗೈಡ್ಸ್ ಸೇರಿ ಒಟ್ಟು 13 ತಂಡಗಳು ಭಾಗವಹಿಸಿ ಆಕರ್ಷಕ ಪಥಸಂಚಲನ ನಡೆಸಿ ಸಚಿವರಿಗೆ ಗೌರವ ವಂದನೆ ಸಲ್ಲಿಸಿದವು.
ಸಾಂಸ್ಕೃತಿಕ ಕಾರ್ಯಕ್ರಮ:ರಾಜ್ಯೋತ್ಸವದ ನಿಮಿತ್ತ ಭಾಗ್ಯನಗರದ ಜ್ಞಾನಬಂಧು ಪಿಯು ಕಾಲೇಜು ಹಾಗೂ ಕೊಪ್ಪಳದ ಕಾಳಿದಾಸ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಪಥಸಂಚಲನದಲ್ಲಿ ವಿಜೇತರಾದ ತಂಡಗಳಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಪಾಲ್ಗೊಂಡ ಮಕ್ಕಳಿಗೆ ಬಹುಮಾನ ನೀಡಲಾಯಿತು.
ಕ್ರೀಡಾ ಸಾಧಕರಿಗೆ ಸನ್ಮಾನ:ಇತ್ತೀಚೆಗೆ ಹಾಸನದಲ್ಲಿ ಜರುಗಿದ 13 ವರ್ಷದೊಳಗಿನ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಚೆಸಫಿಡೆ ರೇಟಿಂಗನಲ್ಲಿ 1524 ಶ್ರೇಣಿ ಪಡೆದ ಕೊಪ್ಪಳದ ಯಶ್ವಿ ರಾಕೇಶ ರಾವಲ್ (12) ಹಾಗೂ ಕಲಬುರಗಿಯಲ್ಲಿ ಜರುಗಿದ 17 ವರ್ಷದೊಳಗಿನ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಚೆಸ್ ಫಿಡೇ ರೇಟಿಂಗನಲ್ಲಿ ಕ್ಲಾಸಿಕ್ 1471 ಮತ್ತು ರಾಫಿಡ್ ರೇಟಿಂಗ್ 1460 ಶ್ರೇಣಿ ಪಡೆದ ಕುಷ್ಟಗಿ ತಾಲೂಕಿನ ಜಹಗೀರ ಗುಡದೂರು ಗ್ರಾಮದ ಅಮರನಾಥ ಬಸನಗೌಡ ರಾಮಶೆಟ್ಟಿ (8) ಈ ಚಿಕ್ಕ ವಯಸ್ಸಿನ ಕ್ರೀಡಾ ಸಾಧಕರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಸನ್ಮಾನಿಸಿ ಗೌರವಿಸಿದರು.
ಸಮಾರಂಭದ ಅಧ್ಯಕ್ಷತೆ ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ವಹಿಸಿದ್ದರು. ಸಂಸದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ್ ಗುಪ್ತಾ ಮತ್ತು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಎಸ್ಪಿ ಡಾ. ರಾಮ್ ಎಲ್.ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಕೊಪ್ಪಳ ತಹಸೀಲ್ದಾರ ವಿಠ್ಠಲ ಚೌಗಲಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬಗೌಡರ್ ಮತ್ತು ಇತರೆ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಎನ್.ಸಿ.ಸಿ, ಭಾರತ ಸ್ಕೌಟ್ಸ್ & ಗೈಡ್ಸ್, ಭಾರತ ಸೇವಾದಳ, ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು ಹಲವಾರು ಜನರಿದ್ದರು.ಮೆರವಣಿಗೆ:
70ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ ನಿಮಿತ್ತ ಬೆಳಗ್ಗೆ ನಗರದ ತಹಸೀಲ್ದಾರ ಕಚೇರಿಯಿಂದ ಜಿಲ್ಲಾ ಕ್ರೀಡಾಂಗಣದವರೆಗೆ ಹಮ್ಮಿಕೊಂಡ ನಾಡ ದೇವತೆ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆಗೆ ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಹಾಗೂ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಚಾಲನೆ ನೀಡಿದರು.ಜಿಪಂ ಸಿಇಒ, ಎಸ್ಪಿ,ಎಡಿಸಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಮತ್ತಿತರರಿದ್ದರು.