ಪ್ರತಿ ಕ್ವಿಂಟಲ್‌ಗೆ ₹8768ರಂತೆ ಹೆಸರು ಖರೀದಿ: ಡಿಸಿ ಶ್ರೀಧರ್‌

KannadaprabhaNewsNetwork |  
Published : Oct 01, 2025, 01:01 AM IST
29ಜಿಡಿಜಿ8 | Kannada Prabha

ಸಾರಾಂಶ

ಎಫ್ಎಕ್ಯು ಗುಣಮಟ್ಟದ ಹೆಸರು ಉತ್ಪನ್ನವನ್ನು ಪ್ರತಿ ಕ್ವಿಂಟಲ್‌ಗೆ ₹8768ರಂತೆ ನಿಗದಿಪಡಿಸಲಾಗಿದೆ.

ಗದಗ: 2025- 26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಎಫ್ಎಕ್ಯು ಗುಣಮಟ್ಟದ ಹೆಸರುಕಾಳು ಹುಟ್ಟುವಳಿಯನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ 2025- 26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಹೆಸರು ಹುಟ್ಟುವಳಿ ಖರೀದಿಸುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಪ್ರತಿ ರೈತರಿಂದ ಪ್ರತಿ ಎಕರೆಗೆ 3 ಕ್ವಿಂಟಲ್‌ನಂತೆ ಗರಿಷ್ಠ 15 ಕ್ವಿಂಟಲ್ ಎಫ್ಎಕ್ಯು ಗುಣಮಟ್ಟದ ಹೆಸರು ಖರೀದಿಸಲು ಹಾಗೂ ಹೆಸರು ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಹೆಸರುಕಾಳು ಉತ್ಪನ್ನವನ್ನು ಖರೀದಿಸಿದಂತೆ ಹಾಗೂ ಖರೀದಿ ಸಂಸ್ಥೆಗಳು ಯಾವುದೇ ರೀತಿಯ ದುರುಪಯೋಗವಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು.

ಸರ್ಕಾರದ ಮಾನದಂಡಗಳನ್ವಯ ಎಫ್ಎಕ್ಯು ಗುಣಮಟ್ಟವನ್ನು ದೃಢೀಕರಿಸಲು ಕ್ರಮ ವಹಿಸಬೇಕು. ಹೆಸರು ಕಾಳಿನ ಎಫ್ಎಕ್ಯು ಪ್ರಕ್ರಿಯೆಯಲ್ಲಿ ಗುಣಮಟ್ಟ ಪರಿಶೀಲನೆಗಾಗಿ ಲಭ್ಯವಿರುವ ಅಧಿಕಾರಿ, ಸಿಬ್ಬಂದಿಯನ್ನು ಬಳಸಿಕೊಳ್ಳುವುದು. ತರಬೇತಿ ಅವಶ್ಯವಿದ್ದಲ್ಲಿ ಅಂತಹ ಸಿಬ್ಬಂದಿಗೆ ಎಫ್ಎಕ್ಯು ಗ್ರೇಡಿಂಗ್ ತರಬೇತಿ ನೀಡಲು ಖರೀದಿ ಸಂಸ್ಥೆಗಳು ಕ್ರಮ ವಹಿಸಬೇಕೆಂದು ತಿಳಿಸಿದರು.

ಎಫ್ಎಕ್ಯು ಗುಣಮಟ್ಟದ ಹೆಸರು ಉತ್ಪನ್ನವನ್ನು ಪ್ರತಿ ಕ್ವಿಂಟಲ್‌ಗೆ ₹8768ರಂತೆ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಈ ಆದೇಶ ಹೊರಡಿಸಿದ ದಿನಾಂಕದಿಂದ ರೈತರ ನೋಂದಣಿ ಕಾಲಾವಧಿಯನ್ನು 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರಗೆ ನಿಗದಿಪಡಿಸಲಾಗಿದೆ. ನೋಂದಣಿ ಕಾರ್ಯದ ಜತೆಗೆ ಖರೀದಿ ಪ್ರಕ್ರಿಯೆಯನ್ನು ಸಹ ಪ್ರಾರಂಭಿಸಿ ರಾಜ್ಯದಲ್ಲಿ ಮಾರ್ಕಫೆಡ್ ಸಂಸ್ಥೆಯ ಮೂಲಕ ಖರೀದಿಸಲು ಆದೇಶಿಸಲಾಗಿದೆ ಎಂದರು.

ಸಭೆಯಲ್ಲಿ ಕೃಷಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

PREV

Recommended Stories

ಇಂದಿನಿಂದ ಮಹಿಳಾ ಏಕದಿನ ವಿಶ್ವಕಪ್‌ : 8 ತಂಡ, 31 ಪಂದ್ಯ
ಅಕ್ರಮ ತಡೆಗೆ ‘ಡಿಜಿಟಲ್‌’ ಭೂಸ್ವಾಧೀನ: ಬೈರೇಗೌಡ