ಹವಾಮಾನ ವೈಪರೀತ್ಯ ತಡೆಗೆ ಹಸಿರು ಕ್ರಾಂತಿ ಅಗತ್ಯ

KannadaprabhaNewsNetwork |  
Published : Jun 10, 2026, 01:30 AM IST
9ಎಚ್ಎಸ್ಎನ್8: | Kannada Prabha

ಸಾರಾಂಶ

ಮಾನವನ ಬದುಕಿಗೆ ಅತ್ಯಗತ್ಯವಾದ ನೀರು, ಗಾಳಿ ಮತ್ತು ಬೆಳಕು ಪ್ರಕೃತಿಯ ಕೊಡುಗೆಗಳಾಗಿದ್ದು, ಇವುಗಳನ್ನು ಸಂರಕ್ಷಿಸದಿದ್ದರೆ ಮುಂದಿನ ಪೀಳಿಗೆಗೆ ಸಂಕಷ್ಟ ಎದುರಾಗಲಿದೆ. ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ, ಅನಿಯಮಿತ ಮಳೆ ಹಾಗೂ ಪ್ರಕೃತಿ ವಿಕೋಪಗಳು ಹೆಚ್ಚುತ್ತಿರುವ ಇಂದಿನ ಪರಿಸ್ಥಿತಿಯಲ್ಲಿ ಪರಿಸರ ಸಂರಕ್ಷಣೆ ಅನಿವಾರ್ಯವಾಗಿದೆ. ಪ್ರತಿಯೊಬ್ಬರೂ ಒಂದೊಂದು ಗಿಡ ನೆಟ್ಟರೂ ಲಕ್ಷಾಂತರ ಮರಗಳು ಬೆಳೆದು ಪರಿಸರ ಸಮತೋಲನ ಕಾಪಾಡಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಹಳೆಯ ಮರಗಳನ್ನು ಕಡಿದು ಹಾಕಲಾಗುತ್ತಿದೆ. ಅವುಗಳ ಬದಲಿಗೆ ಹೊಸ ಗಿಡಗಳನ್ನು ನೆಟ್ಟು ಬೆಳೆಸುವ ಮನೋಭಾವ ಸಮಾಜದಲ್ಲಿ ಮೂಡಬೇಕಿದೆ ಎಂದರು.

ಕನ್ನಡಪ್ರಭ ವಾರ್ತೆ ಹಾಸನ

ಪರಿಸರ ಸಂರಕ್ಷಣೆ ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಆಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ದಿನದಿಂದ ದಿನಕ್ಕೆ ಮರಗಳ ನಾಶ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಪ್ರತಿಯೊಬ್ಬರೂ ಕನಿಷ್ಟ ಒಂದು ಗಿಡ ನೆಟ್ಟು ಅದನ್ನು ಪೋಷಿಸುವ ಸಂಕಲ್ಪ ಮಾಡಬೇಕು ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶೆ ಹೇಮಾವತಿ ಕರೆ ನೀಡಿದರು.ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಪರಿಸರ ಮಾಲಿನ್ಯ ನಿಯಂತ್ರಣ ಇಲಾಖೆ, ಹಸಿರು ಭೂಮಿ ಪ್ರತಿಷ್ಠಾನ ಇತರೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಂಗಳವಾರದಂದು ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರಕೃತಿಯ ಸಮತೋಲನ ಕಾಪಾಡುವಲ್ಲಿ ಮರಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಆದರೆ ನಗರೀಕರಣ, ರಸ್ತೆ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ನೆಪದಲ್ಲಿ ಹಲವು ದಶಕಗಳಷ್ಟು ಹಳೆಯ ಮರಗಳನ್ನು ಕಡಿದು ಹಾಕಲಾಗುತ್ತಿದೆ. ಅವುಗಳ ಬದಲಿಗೆ ಹೊಸ ಗಿಡಗಳನ್ನು ನೆಟ್ಟು ಬೆಳೆಸುವ ಮನೋಭಾವ ಸಮಾಜದಲ್ಲಿ ಮೂಡಬೇಕಿದೆ ಎಂದರು.

ಮಾನವನ ಬದುಕಿಗೆ ಅತ್ಯಗತ್ಯವಾದ ನೀರು, ಗಾಳಿ ಮತ್ತು ಬೆಳಕು ಪ್ರಕೃತಿಯ ಕೊಡುಗೆಗಳಾಗಿದ್ದು, ಇವುಗಳನ್ನು ಸಂರಕ್ಷಿಸದಿದ್ದರೆ ಮುಂದಿನ ಪೀಳಿಗೆಗೆ ಸಂಕಷ್ಟ ಎದುರಾಗಲಿದೆ. ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ, ಅನಿಯಮಿತ ಮಳೆ ಹಾಗೂ ಪ್ರಕೃತಿ ವಿಕೋಪಗಳು ಹೆಚ್ಚುತ್ತಿರುವ ಇಂದಿನ ಪರಿಸ್ಥಿತಿಯಲ್ಲಿ ಪರಿಸರ ಸಂರಕ್ಷಣೆ ಅನಿವಾರ್ಯವಾಗಿದೆ. ಪ್ರತಿಯೊಬ್ಬರೂ ಒಂದೊಂದು ಗಿಡ ನೆಟ್ಟರೂ ಲಕ್ಷಾಂತರ ಮರಗಳು ಬೆಳೆದು ಪರಿಸರ ಸಮತೋಲನ ಕಾಪಾಡಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಇತ್ತೀಚಿನ ದಿನಗಳಲ್ಲಿ ಯುವಜನತೆ ಅಗತ್ಯಕ್ಕಿಂತ ಹೆಚ್ಚು ಸಮಯವನ್ನು ಮೊಬೈಲ್ ಬಳಕೆಯಲ್ಲಿ ಕಳೆಯುತ್ತಿದೆ. ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸುವುದು ಒಳ್ಳೆಯದಾದರೂ ಅದರ ದುರುಪಯೋಗದಿಂದ ದೂರವಿರಬೇಕು. ಮೊಬೈಲ್‌ನಲ್ಲಿ ಉತ್ತಮ ವಿಚಾರಗಳನ್ನು ಅಳವಡಿಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ವಿಶೇಷವಾಗಿ ಯುವಕರು ಪರಿಸರ ಸಂರಕ್ಷಣೆಯಲ್ಲಿ ಸಕ್ರಿಯ ಪಾತ್ರವಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಮಾಜವನ್ನು ಉತ್ತಮ ದಿಕ್ಕಿನಲ್ಲಿ ಬೆಳೆಸಲು ಪರಿಸರ ಸಂರಕ್ಷಣೆ ಅತ್ಯಗತ್ಯವಾಗಿದ್ದು, ಪ್ರತಿಯೊಬ್ಬರ ಸಣ್ಣ ಪ್ರಯತ್ನವೂ ದೊಡ್ಡ ಬದಲಾವಣೆಗೆ ಕಾರಣವಾಗಬಹುದು. "ಕಾಡು ಬೆಳೆಸಿ, ನಾಡು ಉಳಿಸಿ " ಎಂಬ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಮುಂದಿನ ಪೀಳಿಗೆಗೆ ಆರೋಗ್ಯಕರ ಪರಿಸರವನ್ನು ನೀಡಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕಾರ್ಲೇ ಮೊಗಣ್ಣಗೌಡ ಮಾತನಾಡಿ, ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು, ವಿವಿಧ ನ್ಯಾಯಾಧೀಶರು, ನ್ಯಾಯಾಂಗ ಸಿಬ್ಬಂದಿ, ವಕೀಲರು ಹಾಗೂ ಪದಾಧಿಕಾರಿಗಳ ಸಹಭಾಗಿತ್ವದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಪ್ರತಿ ವರ್ಷ ನ್ಯಾಯಾಲಯದ ಆವರಣದಲ್ಲಿ ಪರಿಸರ ಸಂರಕ್ಷಣೆಗೆ ಒತ್ತು ನೀಡಿ ಗಿಡಗಳನ್ನು ನೆಡುವ ಕಾರ್ಯ ನಿರಂತರವಾಗಿ ನಡೆಯುತ್ತಿದ್ದು, ಅವುಗಳನ್ನು ಪೋಷಿಸುವ ಜವಾಬ್ದಾರಿಯನ್ನೂ ಸಿಬ್ಬಂದಿ ವಹಿಸಿಕೊಂಡಿದ್ದಾರೆ. ಹೆಚ್ಚು ಮರಗಳು ಬೆಳೆದರೆ ಪರಿಸರ ಹಸಿರಾಗುವುದರ ಜೊತೆಗೆ ಮಳೆಯ ಪ್ರಮಾಣ ಹೆಚ್ಚಲು ಸಹಕಾರಿಯಾಗುತ್ತದೆ. ಶುದ್ಧ ಗಾಳಿ, ಉತ್ತಮ ವಾತಾವರಣ ಹಾಗೂ ಸುಸ್ಥಿರ ಪರಿಸರ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಇಂತಹ ಅಭಿಯಾನಗಳಲ್ಲಿ ಭಾಗವಹಿಸಬೇಕು ಎಂದು ಅವರು ಕರೆ ನೀಡಿದರು.ಕಾರ್ಯಕ್ರಮದಲ್ಲಿ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ದಾಕ್ಷಾಯಿಣಿ, ಹಸಿರುಭೂಮಿ ಪ್ರತಿಷ್ಠಾನದ ಗೌರವ ಸಂಸ್ಥಾಪಕ ಅಧ್ಯಕ್ಷರಾದ ಆರ್.ಪಿ. ವೆಂಕಟೇಶ್ ಮೂರ್ತಿ, ಉಪಾಧ್ಯಕ್ಷ ಪುರುಷೋತ್ತಮ್ ಮತ್ತು ಕಾರ್ಯದರ್ಶಿ ಎಂ.ಬಿ. ಗಿರಿಜಾಂಬಿಕಾ, ಉಪಾಧ್ಯಕ್ಷ ತಿಮ್ಮೇಗೌಡ, ಖಜಾಂಚಿ ಸುಗುಣಾ ಹಾಗೂ ನ್ಯಾಯಾಂಗದ ಎಲ್ಲಾ ನ್ಯಾಯಾಧೀಧರು, ವಕೀಲರು, ಸಿಬ್ಬಂದಿ ಹಾಗೂ ವಿವಿಧ ಗಣ್ಯರು ಭಾಗವಹಿಸಿ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಂಡರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರತಿ ಮಗುವಿಗೂ ಪಲ್ಸ್ ಪೋಲಿಯೋ ಹಾಕಲು ಕ್ರಮ ವಹಿಸಿ
ತಮಿಳುನಾಡಿನ ಯುನೈಟೆಡ್ ಸ್ಟ್ರೈಕರ್ಸ್ ತಂಡ ಪ್ರಥಮ