ಆರ್ಥಿಕ ಆಸರೆಗೆ ‘ಗೃಹಲಕ್ಷ್ಮಿ ಸಂಘ’, ಸುರಕ್ಷತೆಗೆ ‘ಅಕ್ಕ ಪಡೆ’

KannadaprabhaNewsNetwork |  
Published : Nov 25, 2025, 01:15 AM IST
೨೫ಕೆಎಲ್‌ಆರ್-೧೪ಕೋಲಾರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಐಸಿಡಿಎಸ್ ಯೋಜನೆಯ ಅಂಗನವಾಡಿ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿದರು. | Kannada Prabha

ಸಾರಾಂಶ

ಗೃಹಲಕ್ಷ್ಮಿ ಸೊಸೈಟಿ ಮೂಲಕ ೩ ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಫಲಾನುಭವಿಗಳಿಗೆ ಸಾಲ ನೀಡಲಾಗುವುದು. ಸೊಸೈಟಿ ಯಶಸ್ಸಿಗೆ ಎಲ್ಲರ ಸಹಕಾರ, ಜವಾಬ್ದಾರಿ ಇರಬೇಕು. ನಾವು ಯಾರಿಂದಲೂ ಹಣ ಪಡೆಯುವುದಿಲ್ಲ, ಫಲಾನುಭವಿಗಳಿಂದ ಫೋನ್ ಪೇ ಮೂಲಕ ಹಣ ಸಂಗ್ರಹಿಸಲಾಗುವುದು. ಗೃಹಲಕ್ಷ್ಮಿ ಸೊಸೈಟಿಯ ಯಶಸ್ಸಿಗೂ ಹೆಚ್ಚಿನ ನಿಗಾವಹಿಸಬೇಕು

ಕನ್ನಡಪ್ರಭ ವಾರ್ತೆ ಕೋಲಾರ

ರಾಜ್ಯದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಲಾಭ ತಂದುಕೊಡುವ ಸಲುವಾಗಿ ನ.೨೮ರಂದು ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ಆರಂಭಿಸಲಾಗುತ್ತಿದೆ. ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಸೊಸೈಟಿ ವಿಸ್ತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಐಸಿಡಿಎಸ್ ಯೋಜನೆಯ ಅಂಗನವಾಡಿ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟಿಸಿ ಮಾತನಾಡಿದರು.ಸ್ತ್ರೀ ಸಬಲೀಕರಣ ಯೋಜನೆ

ಸ್ತ್ರೀಯರು ಹಾಗೂ ಮಕ್ಕಳ ಹಿತದೃಷ್ಟಿಯಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ೫೦ ವರ್ಷಗಳ ಹಿಂದೆ ಐಸಿಡಿಎಸ್ ಯೋಜನೆ ಜಾರಿಗೆ ತಂದು ಅಂಗನವಾಡಿ ಆರಂಭಿಸಿದರು. ಯೋಜನೆಯ ಸುವರ್ಣ ಮಹೋತ್ಸವ ಸಂಭ್ರಮಿಸುವ ಜೊತೆಗೆ, ಮುಂದಿನ ೫೦ ವರ್ಷಕ್ಕೆ ಸ್ತ್ರೀ ಸಬಲೀಕರಣಕ್ಕೆ ಅಣಿಗೊಳಿಸುವುದಕ್ಕೆ ಹೆಜ್ಜೆ ಇಡುವ ಘಳಿಗೆ ಇದಾಗಿದೆ ಎಂದರು.ಸಂಘದ ಮೂಲಕ ₹೩ ಲಕ್ಷ ಸಾಲ

ಗೃಹಲಕ್ಷ್ಮಿ ಸೊಸೈಟಿ ಮೂಲಕ ೩ ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಫಲಾನುಭವಿಗಳಿಗೆ ಸಾಲ ನೀಡಲಾಗುವುದು. ಸೊಸೈಟಿ ಯಶಸ್ಸಿಗೆ ಎಲ್ಲರ ಸಹಕಾರ, ಜವಾಬ್ದಾರಿ ಇರಬೇಕು. ನಾವು ಯಾರಿಂದಲೂ ಹಣ ಪಡೆಯುವುದಿಲ್ಲ, ಫಲಾನುಭವಿಗಳಿಂದ ಫೋನ್ ಪೇ ಮೂಲಕ ಹಣ ಸಂಗ್ರಹಿಸಲಾಗುವುದು. ಗೃಹಲಕ್ಷ್ಮಿ ಯಶಸ್ಸಿಗೆ ಯಾವ ರೀತಿ ಎಲ್ಲರೂ ಶ್ರಮ ವಹಿಸಿದ್ದೀರೋ ಹಾಗೆಯೇ ಗೃಹಲಕ್ಷ್ಮಿ ಸೊಸೈಟಿಯ ಯಶಸ್ಸಿಗೂ ಹೆಚ್ಚಿನ ನಿಗಾವಹಿಸಬೇಕು ಎಂದು ಸಚಿವೆ ತಿಳಿಸಿದರು.ಮಹಿಳೆಯರ ಸುರಕ್ಷತೆಗೆ ಅಕ್ಕಪಡೆ

ಮಹಿಳೆಯರಿಗೆ ಹೆಚ್ಚು ಸುರಕ್ಷತೆ ನೀಡುವ ಸಲುವಾಗಿ ಅಕ್ಕ ಪಡೆಯನ್ನು ರಾಜ್ಯಾದ್ಯಂತ ಇದೇ ೨೮ ರಂದು ಆರಂಭಿಸಲಾಗುತ್ತಿದೆ. ಇದಕ್ಕೆ ಇಲಾಖೆಯ ಅಧಿಕಾರಿಗಳು ಪೊಲೀಸ್ ಇಲಾಖೆಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅಕ್ಕ ಪಡೆ ಮನೆ ಮಾತಾಗುವಂತೆ ನೋಡಿಕೊಳ್ಳಬೇಕು ಎಂದು ಕರೆ ನೀಡಿದರು.ಕಳೆದ ಬಾರಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ತಮ್ಮ ಗೌರವ ಧನವನ್ನು ೨ ಸಾವಿರ ರೂ. ಹೆಚ್ಚಿಸುವಂತೆ ಒತ್ತಾಯಿಸಿದ್ದರು. ಆದರೆ ೧ ಸಾವಿರ ಮಾತ್ರ ಹೆಚ್ಚಿಸಲಾಗಿತ್ತು. ಈಸಲದ ಬಜೆಟ್‌ನಲ್ಲಿ ಮತ್ತೊಂದು ಸಾವಿರ ಹೆಚ್ಚಿಸಲಾಗುವುದು. ಇದು ನಮ್ಮ ಸರ್ಕಾರದ ಮತ್ತೊಂದು ಗ್ಯಾರಂಟಿ ಎಂದು ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

ಎಂಎಲ್ಸಿ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ೫೦ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ರಾಜ್ಯದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಆಯೋಜಿಸಲಾಗುತ್ತಿದೆ ಎಂದರು.ಶಾಸಕ ಡಾ.ಜಿ.ಕೊತ್ತೂರು ಜಿ.ಮಂಜುನಾಥ್ ಮಾತನಾಡಿ, ಜಿಲ್ಲೆಯ ಎಲ್ಲಾ ಅಂಗನವಾಡಿ ಕಟ್ಟಡಗಳಿಗೆ ಇ-ಖಾತಾ ಮಾಡಿಸಲಾಗಿದೆ. ಇಂತಹ ಇಲಾಖೆಗೆ ಬಲ ತುಂಬುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಸಚಿವರು ಜಿಲ್ಲೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಸಿಬ್ಬಂದಿಗೆ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಸಹಾಯಕಿ ಪ್ರಶಸ್ತಿ ಪ್ರದಾನ ಮಾಡಿದರು.

ಕಾರ್ಯಕ್ರಮದಲ್ಲಿ ಸಂಸದ ಮಲ್ಲೇಶ್ ಬಾಬು, ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ವೈ.ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಜಿಪಂ ಸಿಇಓ ಡಾ.ಪ್ರವೀಣ್ ಪಿ.ಬಾಗೇವಾಡಿ, ಅಪರ ಪೊಲೀಸ್ ವರಿಷ್ಟಾಧಿಕಾರಿ ರವಿಶಂಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಎಂ.ನಾರಾಯಣಸ್ವಾಮಿ, ನಗರಸಭೆ ಮಾಜಿ ಅಧ್ಯಕ್ಷೆ ಲಕ್ಷ್ಮೀದೇವಮ್ಮ ರಮೇಶ್ ಇದ್ದರು.

PREV

Recommended Stories

ಧರ್ಮಸ್ಥಳ ಗ್ರಾಮದಲ್ಲಿ ಶವ ಬಗ್ಗೆ ಬುರುಡೆ ಬಿಟ್ಟ ಚಿನ್ನಯ್ಯಗೆ ಬೇಲ್
ಕೈ ರೆಬೆಲ್ಸ್‌ ಜತೆ ಸೇರಿ ನಾವು ಸರ್ಕಾರ ಮಾಡಲ್ಲ : ಅಶೋಕ್‌