ಕೊಪ್ಪಳ: ಬಡವರ ಬದುಕಿಗೆ ಬೆಳಕಾಗಿರುವ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿಯಾಗಿವೆ. ಜನಪರ ಆಡಳಿತಕ್ಕೆ ಎಲ್ಲೆಡೆ ಅಭೂತಪೂರ್ವ ಮೆಚ್ಚುಗೆ ವ್ಯಕ್ತವಾಗಿದ್ದು, ರಾಜ್ಯದ ಜಿಡಿಪಿಗೂ ಗ್ಯಾರಂಟಿ ಯೋಜನೆ ಭರಪೂರ ಕೊಡುಗೆ ನೀಡಿವೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು.
ಕರ್ನಾಟಕ ಸರ್ಕಾರ ತನ್ನ ಆಡಳಿತದ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಈ ಅವಧಿಯನ್ನು ಸಾರ್ಥಕ ಪಯಣ ಹಾಗೂ ಜನಪರ ಆಡಳಿತ ಎಂದು ಬಣ್ಣಿಸಬಹುದು. ಬಡತನ ನಿರ್ಮೂಲನೆ, ಸಾಮಾಜಿಕ ನ್ಯಾಯ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ರಾಜ್ಯ ಆರ್ಥಿಕವಾಗಿ ಬಲಪಡಿಸುವ ನಿಟ್ಟಿನಲ್ಲಿ ಹಲವು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಚುನಾವಣೆಗೂ ಮುನ್ನ ಘೋಷಿಸಿದ್ದ ಐದು ಪ್ರಮುಖ ಗ್ಯಾರಂಟಿ ಯೋಜನೆ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ವಾರ್ಷಿಕ ಸುಮಾರು ₹50 ಸಾವಿರ ಕೋಟಿಗೂ ಅಧಿಕ ವೆಚ್ಚದಲ್ಲಿ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸ್ಥಿತಿ ಸುಧಾರಿಸಿದೆ. ಪಂಚ ಗ್ಯಾರಂಟಿ ಯೋಜನೆಗಳಿಗೆ ಈವರೆಗೆ ಒಟ್ಟು ₹1.34 ಲಕ್ಷ ಕೋಟಿ ವೆಚ್ಚ ಮಾಡಲಾಗಿದೆ. ದೇಶದ ವಿವಿಧ ರಾಜ್ಯಗಳು ಕರ್ನಾಟಕದ ಗ್ಯಾರಂಟಿ ಮಾದರಿ ಅನುಸರಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.ಕೊಪ್ಪಳ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯಡಿ 3,12,152 ಫಲಾನುಭವಿಗಳು ನೋಂದಣಿಯಾಗಿದ್ದಾರೆ.ಇದರಲ್ಲಿ ಪರಿಶಿಷ್ಟ ಜಾತಿಯ 61,178, ಪರಿಶಿಷ್ಟ ಪಂಗಡದ 37,488 ಹಾಗೂ ಇತರೆ ವರ್ಗದ 2,13,486 ಫಲಾನುಭವಿಗಳಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ₹1,853 ಕೋಟಿ ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆಯಾಗಿದ್ದು, ಮಹಿಳಾ ಸಬಲೀಕರಣಕ್ಕೆ ಯೋಜನೆ ನೆರವಾಗಿದೆ ಎಂದು ತಿಳಿಸಿದರು.
ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ ಪ್ರತಿ ತಿಂಗಳು 12,01,254 ಮಂದಿ ಸದುಪಯೋಗ ಪಡೆಯುತ್ತಿದ್ದಾರೆ. ಜುಲೈ 2023ರಿಂದ ಡಿಸೆಂಬರ್ 2025ರವರೆಗೆ ಡಿಬಿಟಿ ಮೂಲಕ ₹313.92 ಕೋಟಿ ವಿತರಿಸಲಾಗಿದೆ. ಕಳೆದ ಆರ್ಥಿಕ ವರ್ಷದಲ್ಲಿ ಜಿಲ್ಲೆಗೆ ₹189.86 ಕೋಟಿ ವಿನಿಯೋಗಿಸಲಾಗಿದೆ.
ಜಿಲ್ಲೆಯಲ್ಲಿ ಬಹುಗ್ರಾಮ ಕುಡಿಯುವ ನೀರಿನ 11 ಯೋಜನೆಗಳು ಪೂರ್ಣಗೊಂಡಿದ್ದು, 477 ಗ್ರಾಮಗಳು ಇದರ ವ್ಯಾಪ್ತಿಗೆ ಬಂದಿವೆ. ₹403 ಕೋಟಿ ಅಂದಾಜು ಮೊತ್ತದ ಮೂರು ಹೊಸ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಕಾಮಗಾರಿ ಪ್ರಗತಿಯಲ್ಲಿವೆ. ಕೆರೆಹಳ್ಳಿ ಸೇರಿದಂತೆ 103 ಗ್ರಾಮಗಳಿಗೆ ₹260 ಕೋಟಿ ಹಾಗೂ ಚಿಕ್ಕಬೆಣಕಲ್ ಸೇರಿದಂತೆ 61 ಗ್ರಾಮಗಳಿಗೆ ₹110 ಕೋಟಿ ವೆಚ್ಚದ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.
ಜಿಲ್ಲೆಯಲ್ಲಿ 9,730 ಕ್ವಿಂಟಲ್ ಬಿತ್ತನೆ ಬೀಜ ದಾಸ್ತಾನು ಮಾಡಲಾಗಿದ್ದು, 7,212 ಕ್ವಿಂಟಲ್ ಬೀಜ ರೈತರಿಗೆ ವಿತರಿಸಲಾಗಿದೆ. ಜಿಲ್ಲೆಯಲ್ಲಿ ಬೀಜ ಹಾಗೂ ರಸಗೊಬ್ಬರ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ವಹಿಸಿದ್ದರು. ಸಂಸದ ಕೆ.ರಾಜಶೇಖರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ಗಡಾದ, ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ, ಡಿಎಫ್‌ಒ ನಿರ್ಮಲಾ, ಜಿಪಂ ಸಿಇಒ ವರ್ಣಿತ್ ನೇಗಿ, ಎಸ್ಪಿ ಡಾ.ರಾಮ್ ಎಲ್.ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.