ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನವನಗರದ ಕಲಾಭವನದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಹಯೋಗದಲ್ಲಿ ಹಮ್ಮಿಕೊಂಡ ಗ್ಯಾರಂಟಿ ಕಾರ್ಯಾಗಾರ-ಗ್ಯಾರಂಟಿ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಒಟ್ಟು ₹1.19 ಲಕ್ಷ ಕೋಟಿಯನ್ನು ಡಿಬಿಟಿ ಮೂಲಕ ನೇರವಾಗಿ ಮನೆಯ ಬಾಗಿಲಿಗೆ ತಲುಪಿಸುವ ಕಾರ್ಯ ಸರಕಾರ ಮಾಡುತ್ತಿದೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಯಿಂದ ಬೊಕ್ಕಸ ಬರಿದಾಗದೇ ಅರ್ಥಶಾಸ್ತ್ರಜ್ಞರ ವರದಿಯ ಪ್ರಕಾರ ಆರ್ಥಿಕ ಸಭಲತೆಗೆ ನಾಂದಿಯಾಗಿದೆ. ಅರ್ಹ ಪ್ರತಿ ಮನೆಗಳಿಗೆ ಹಣ ಜಮೆ ಆಗುತ್ತಿದೆ. ಇದು ಹೇಗೆ ಬಂತು, ಯಾರಿಂದ ಬಂದಿದೆ ಎಂಬುದನ್ನು ತಿಳಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿ ಕಾರ್ಯಾಗಾರ ಹಾಗೂ ಗ್ಯಾರಂಟಿ ಉತ್ಸವ ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಕಟ್ಟಕಡೆಯ ಫಲಾನುಭವಿಗಳಿಗೆ ಮುಟ್ಟಿಸುವ ನಿಟ್ಟಿನಲ್ಲಿ ತಾಲೂಕು ಹಾಗೂ ಗ್ರಾಪಂ ಮಟ್ಟದಲ್ಲಿ ಮನೆಗೆ 5 ಗ್ಯಾರಂಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಮಾತನಾಡಿ, ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರಿಗೆ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ. ಈ ಯೋಜನೆಗಳಿಂದ ಹೆಣ್ಣುಮಕ್ಕಳು ಸ್ವಾಭಿಮಾನದಿಂದ ಬದುಕು ಸಾಗಿಸಲು ಸಾಧ್ಯವಾಗಿದ್ದು, ಅವರ ಜೀವನದ ಗುಣಮಟ್ಟ ಸುಧಾರಿಸಿದೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾದ್ಯಕ್ಷೆ ಪುಷ್ಪಾ ಅಮರನಾಥ ಮಾತನಾಡಿ, ಗ್ಯಾರಂಟಿ ಯೋಜನೆಗಳಿಂದ ನೆಮ್ಮದಿಯ ಬದುಕು ಸಾಗಿಸುತ್ತಿದ್ದಾರೆ. ಮಹಿಳೆ ಪ್ರಗತಿ ಹೊಂದಿದರೆ ದೇಶ ಅಭಿವೃದ್ದಿ ಹೊಂದಿದಂತೆ. ಅದಕ್ಕಾಗಿಯೇ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲಾಗಿದೆ. ಈ ಮೀಸಲಾತಿಯಿಂದ ಮಹಿಳೆಯರಿಗೆ ರಾಜಕೀಯ ಪ್ರವೇಶ ದೊರೆತಿದ್ದು, ಸಮಾಜ ಸೇವೆ ಮಾಡುತ್ತಿದ್ದಾರೆ ಎಂದರು. ಉಪನ್ಯಾಸಕರಾಗಿ ಆಗಮಿಸಿದ್ದ ಸೀತಾಲಕ್ಷ್ಮೀ ಗ್ಯಾರಂಟಿ ಯೋಜನೆಗಳಿಂದ ಆಗುವ ಲಾಭ, ಆರ್ಥಿಕತೆಯ ಬಗ್ಗೆ ವಿವರವಾಗಿ ತಿಳಿಸಿಕೊಟ್ಟರು.
ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಲ್ಲಿ ಅನೇಕರು ಮೃತಪಟ್ಟಿದ್ದಾರೆ. ಆದರೂ ಅವರ ಖಾತೆಗೆ ಯೋಜನೆಯ ಹಣ ಹೋಗಿದೆ. ಹಣ ಹೋಗದಂತೆ ತಡೆಯುವ ಜೊತೆಗೆ ಜಮೆ ಆಗಿರುವ ಹಣವನ್ನು ಹಿಂಪಡೆಯುವ ಕೆಲಸ ಮಾಡಬೇಕಿದೆ. ರಾಜ್ಯದಲ್ಲಿ 1 ಲಕ್ಷ 44 ಸಾವಿರದ 56 ಫಲಾನುಭವಿಗಳು ಮೃತಪಟ್ಟಿದ್ದಾರೆ.