ಗದಗ: ಸರ್ಕಾರದಿಂದ ಜಾರಿಯಾಗಿರುವ ಪಂಚ ಗ್ಯಾರಂಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶ ಹೊಂದಿದ್ದು, ಈ ಯೋಜನೆಗಳ ಅನುಷ್ಠಾನವು ಬಡ ಜನರ ಸೇವೆಗೆ ಒದಗಿಸಿದ ಬಹುದೊಡ್ಡ ಅವಕಾಶವಾಗಿದೆ ಎಂದು ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೊಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ತಿಳಿಸಿದರು.ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಡವರಿಗೆ ಗ್ಯಾರಂಟಿ ಯೋಜನೆಯ ಸೌಲಭ್ಯ ತಲುಪಿಸುವಲ್ಲಿ ವಿಳಂಬವಾಗಬಾರದು. ಸೌಲಭ್ಯಗಳನ್ನು ನಿಗದಿತ ಅವಧಿಯಲ್ಲಿಯೇ ತಲುಪಿಸುವಂತಾಗಬೇಕು. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶೇ. ನೂರರಷ್ಟು ಪ್ರಗತಿ ಸಾಧಿಸಬೇಕು. ಗ್ಯಾರಂಟಿ ಯೋಜನೆಯ ಅನುಷ್ಠಾನದಲ್ಲಿ ಪ್ರಾಮಾಣಿಕತನವಿರಬೇಕು. ಬಡಜನರಿಗೆ ಸೇವೆ ಸಲ್ಲಿಸುವುದು ಪವಿತ್ರ ಕೆಲಸವಾಗಬೇಕು ಎಂದರು.ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಹಾಗೂ ಆರ್ಥಿಕ ಸಬಲೀಕರಣಗೊಳಿಸಲು ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿದ್ದು ಈ ಸೌಲಭ್ಯದಿಂದ ಯಾವ ಅರ್ಹ ಫಲಾನುಭವಿಯೂ ವಂಚಿತರಾಗದಂತೆ ನೋಡಿಕೊಳ್ಳಬೇಕು. ಯೋಜನೆಯ ಹಣ ದುರುಪಯೋಗವಾಗದಂತೆ ಕ್ರಮ ವಹಿಸಬೇಕು. ಮರಣ ಹೊಂದಿದವರ ಖಾತೆಗೆ ಗೃಹಲಕ್ಷ್ಮೀ ಹಣ ಜಮಾ ಆಗುತ್ತಿದ್ದರೆ ಅಂತಹ ಪ್ರಕರಣಗಳಾಗದಂತೆ ತಡೆಯಲು ಕ್ರಮ ವಹಿಸಬೇಕು ಎಂದರು.
ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಕೃಷ್ಣಗೌಡ ಎಚ್. ಪಾಟೀಲ ಮಾತನಾಡಿ, ಅರ್ಹ ನಿರುದ್ಯೋಗಿ ಯುವಕ- ಯುವತಿಯರಿಗೆ ಯುವನಿಧಿ ಯೋಜನೆಯ ಮಾಹಿತಿ ತಲುಪಿಸಲು ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾಗೂ ತಾಲೂಕಿನ ಎಲ್ಲ ಪದವಿ ಮತ್ತು ಡಿಪ್ಲೊಮಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಮಾಹಿತಿ ಬ್ಯಾನರ್‌ಗಳನ್ನು ಅಳವಡಿಸುವ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಯುವನಿಧಿ ಯೋಜನೆಯ ಸೌಲಭ್ಯದಿಂದ ಯಾವೊಬ್ಬ ಅರ್ಹ ಫಲಾನುಭವಿ ವಂಚಿತರಾಗಬಾರದು ಎಂದರು.
ಪಂಚ ಗ್ಯಾರಂಟಿ ಯೋಜನೆಯ ಸಂಬಂಧಿತ ಅಧಿಕಾರಿಗಳು ಸಭೆಗೆ ಮಾಹಿತಿ ಒದಗಿಸಿದರು. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ನೀಲಮ್ಮ ಬೋಳನವರ, ಸದಸ್ಯರಾದ ಶಂಭು ಕಾಳೆ, ಮೀನಾಕ್ಷಿ ಬೆನಕಣ್ಣವರ, ದಯಾನಂದ ಪವಾರ, ಸಂಗು ಕರಕಲಮಟ್ಟಿ, ನಿಂಗಪ್ಪ ದೇಸಾಯಿ, ಸಂಗಮೇಶ ಹಾದಿಮನಿ, ರಮೇಶ ಹೊನ್ನಿನಾಯ್ಕರ, ದೇವರಡ್ಡಿ ತಿರ್ಲಾಪುರ, ಮಲ್ಲಪ್ಪ ದಂಡಿನ, ಗಣೇಶ ಸಿಂಗ್ ಮಿಟಾಡೆ, ಮಲ್ಲಪ್ಪ ಬಾರಕೇರ, ಭಾಷಾ ಮಲ್ಲಸಮುದ್ರ, ಸಾವಿತ್ರಿ ಹೂಗಾರ, ತಾಪಂ ಇಒ ಡಾ. ಎಚ್.ಎಸ್. ಜಿನಗಾ, ಲೀಡ್ ಬ್ಯಾಂಕ್ ಮ್ಯಾನೇಜರ್ ಸಂತೋಷ್ ಎಂ.ವಿ. ಸೇರಿದಂತೆ ಅಧಿಕಾರಿಗಳು ಇದ್ದರು.