ಕನ್ನಡಪ್ರಭ ವಾರ್ತೆ ಶಹಾಪುರ
ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಬೇಕು ಹಾಗೂ ಬಡ ಜನರ ಮನೆ ಬಾಗಿಲಿಗೆ ಮುಟ್ಟಿಸುವ ಕೆಲಸ ತಾಲೂಕು ಮಟ್ಟದ ಅಧಿಕಾರಿಗಳು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಗೌಡಪ್ಪಗೌಡ ಆಲ್ದಾಳ ತಿಳಿಸಿದ್ದಾರೆ.ನಗರದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ನಡೆದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಮಟ್ಟದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಇವುಗಳನ್ನು ಅನುಷ್ಠಾನ ಮಾಡಲು ಅಧಿಕಾರಿಗಳಲ್ಲಿ ಸೇವಾ ಮನೋಭಾವ ಇರಬೇಕು. ಸಮಾಜದಲ್ಲಿ ಅನೇಕರು ಅಗತ್ಯ ಮೂಲ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳಿಗೆ ಸೂಚಿಸಿದರು.ಶಹಾಪುರ ಸಹಾಯಕ ಕಾರ್ಯಪಾಲಕ ಅಭಿಯಂತರರು ಮಾತನಾಡಿ, ಗೃಹಜ್ಯೋತಿ ಯೋಜನೆಯಡಿ ಗ್ರಾಮೀಣ ಹಾಗೂ ನಗರ ಪ್ರದೇಶದ ಪ್ರತಿ ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಬಹಳಷ್ಟು ಗ್ರಾಹಕರು 200 ಯೂನಿಟ್ ಒಳಗೆ ವಿದ್ಯುತ್ ಬಳಕೆ ಮಾಡುತ್ತಿದ್ದಾರೆ. ಗ್ರಾಮೀಣ ಭಾಗದ ಗ್ರಾಹಕರು ತಮ್ಮ ಮನೆಯಲ್ಲಿ ಮೀಟರ್ ಅಳವಡಿಸಿಕೊಂಡಿಲ್ಲ. ತಾಲೂಕಿನಲ್ಲಿ 17ಸಾವಿರ ಫಲಾನುಭವಿಗಳಷ್ಟೇ ಮೀಟರ್ ಅಳವಡಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ಗೃಹಜ್ಯೋತಿ ಯೋಜನೆಯಡಿ ನೀಡಿದ 200 ಯೂನಿಟ್ ಮಿತಿಯೊಳಗೆ ವಿದ್ಯುತ್ ಬಳಕೆ ಮಾಡುವ ಗ್ರಾಹಕರ ಸಂಖ್ಯೆ ಹೆಚ್ಚಿರುವುದರಿಂದ, ಪ್ರತಿ ಮನೆಗೂ ಮೀಟರ್ ಅಳವಡಿಕೆ ಮಾಡಿಕೊಳ್ಳುವಂತೆ ಗ್ರಾಹಕರಿಗೆ ಮನವರಿಕೆ ಮಾಡುವ ಮೂಲಕ ವಿದ್ಯುತ್ ಸೋರಿಕೆಯನ್ನು ತಡೆಯಬಹುದು. ಅಲ್ಲದೇ ಓವರ್ ಲೋಡ್‌ನಿಂದ ವಿದ್ಯುತ್ ಟ್ರಾನ್ಸ್ ಫಾರ್ಮಗಳು ಕೆಡುವುದನ್ನು ನಿಯಂತ್ರಿಸಬಹುದು ಎಂದು ಗೌಡಪ್ಪಗೌಡ ಆಲ್ದಾಳ ವಿದ್ಯುತ್ ಇಲಾಖೆಯ ಅಧಿಕಾರಿಗೆ ಸೂಚಿಸಿದರು.ಪಡಿತರ ಚೀಟಿ ನೋಂದಣಿಯು ನಿಯಮಾನುಸಾರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ನೋಂದಣಿಯಾಗಬೇಕು. ಯಾರೊಬ್ಬರೂ ಸರಕಾರದ ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಬಾರದು. ಸರಕಾರದ ಜನಪರ ಯೋಜನೆಯ ಲಾಭವನ್ನು ಜನಸಾಮಾನ್ಯರಿಗೆ ನೀಡಬೇಕಾಗಿರುವುದು ನಮ್ಮೆಲ್ಲರ ಜವಬ್ದಾರಿಯಾಗಿದೆ ಎಂದರು.
ತಾಲೂಕಿನಲ್ಲಿ 58 217 ರೇಷನ್ ಕಾರ್ಡ್ ಗಳಿದ್ದು, 2,30,427 ಜನ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಜತೆಗೆ ಮಾಸಿಕ ಪ್ರತಿ ಫಲಾನುಭವಿಗೆ ₹170 ಹಣ ನೇರ ನಗದು ವರ್ಗಾವಣೆ ಯೋಜನೆ ಮೂಲಕ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತಿದೆ ಎಂದು ಆಹಾರ ಇಲಾಖೆ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿತ ಫಲಾನುಭವಿಗಳಲ್ಲಿ ಕೆಲವರಿಗೆ ವಿವಿಧ ಕಾರಣಗಳಿಂದ ಮಾಸಿಕ ಹಣ ವರ್ಗಾವಣೆಯಾಗಿಲ್ಲ. ಅಂತಹ ಫಲಾನುಭವಿಗಳ ಪಟ್ಟಿ ನೀಡಿ, ಸಮಸ್ಯೆಗಳ ಇತ್ಯರ್ಥಕ್ಕೆ ಸೂಕ್ತ ಕ್ರಮ ವಹಿಸಿ ಎಂದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ಬಿಪಿಎಲ್ ಹಾಗೂ ಎಪಿಎಲ್ ಕುಟುಂಬಗಳ ಯಜಮಾನಿಯ ಖಾತೆಗೆ ಮಾಸಿಕ ₹2000 ಮೊತ್ತ ವರ್ಗಾವಣೆ ಮಾಡಲಾಗುವುದು. ಈ ಯೋಜನೆಯ ಸೌಲಭ್ಯ ಪಡೆಯಲು ಮಹಿಳೆಯರು ತಮ್ಮ ಕುಟುಂಬದ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ನೊಂದಿಗೆ ಗ್ರಾಮ ಒನ್ ಕೇಂದ್ರದಲ್ಲಿ ಅರ್ಜಿ ಸಲ್ಲಿಸಿ, ಯೋಜನೆಯ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಗ್ರಾಮ ಪಂಚಾಯ್ತಿಯಿಂದ ಗ್ರಾಮಗಳಲ್ಲಿ ಡಂಗೂರ ಸಾರಬೇಕು ಎಂದು ಸೂಚಿಸಿದರು.ಶಕ್ತಿ ಯೋಜನೆಯಡಿ ಶಹಾಪುರ ತಾಲೂಕಿನಲ್ಲಿ 67. 58ಲಕ್ಷ ಮಹಿಳೆಯರಿಗೆ ಸಾರಿಗೆ ಸೌಲಭ್ಯ ಕಲ್ಪಿಸಿದ್ದು, ಇದರಿಂದ ₹28.14 ಕೋಟಿ ಆದಾಯ ಬಂದಿದೆ. ಹೊಸದಾಗಿ 27 ವಾಹನಗಳನ್ನು ಸೇರ್ಪಡೆಗೊಳಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಈ ಸಭೆಯಲ್ಲಿ ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ ಬಿರಾದಾರ್, ಸಹಾಯಕ ನಿರ್ದೇಶಕ ಭೀಮಣ್ಣಗೌಡ ಬಿರಾದಾರ್, ಗ್ಯಾರಂಟಿ ಯೋಜನೆಗಳ ತಾಲೂಕು ಸಮಿತಿ ಸದಸ್ಯರಾದ ಶರಣಗೌಡ ಅಣಬಿ, ರಮೇಶ ಗುರಿಕಾರ, ಬಸಣ್ಣಗೌಡ, ಮಲ್ಲಣ್ಣಗೌಡ ತಿಪ್ಪನಳ್ಳಿ, ಹುಸೇನ್ ಭಾಷಾ, ತಾಯಮ್ಮ, ಸಿದ್ದಣ್ಣ ದೇಸಾಯಿ ಹಾಗೂ ಮೌನೇಶ ಶಟ್ಟಿಕೇರಾ ಇತರರಿದ್ದರು.