ಗದಗ: ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದೇ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಉದ್ದೇಶವಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ತಿಳಿಸಿದರು.ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ಜಿಲ್ಲೆಯ ಬಸ್ ನಿಲ್ದಾಣಗಳಲ್ಲಿ ಮಹಿಳೆಯರಿಗೆ ಆಸನದ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಬಸ್ ನಿಲ್ದಾಣಗಳ ಸ್ವಚ್ಛತೆ ಮುಖ್ಯವಾಗಿದ್ದು, ಬಸ್ ನಿಲ್ದಾಣದ ಆವರಣ ಸ್ವಚ್ಛವಾಗಿರುವಂತೆ ಹಾಗೂ ಅಲ್ಲಿ ಮೂಲ ಸೌಲಭ್ಯಗಳು ಇರುವಂತೆ ನೋಡಿಕೊಳ್ಳಬೇಕು. ಅಲ್ಲಿನ ಶೌಚಾಲಯಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು ಎಂದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಅಶೋಕ ಮಂದಾಲಿ ಮಾತನಾಡಿ, ಬಡಜನರ ಹಸಿವು ನೀಗಿಸುವಲ್ಲಿ ಅನ್ನಭಾಗ್ಯ ಯೋಜನೆಯ ಪಾತ್ರ ಮಹತ್ವದ್ದಾಗಿದೆ. ಅನ್ನಭಾಗ್ಯ ಯೋಜನೆಯ ಅಕ್ಕಿಯು ಕಳ್ಳಸಂತೆಯಲ್ಲಿ ಮಾರಾಟವಾಗದಂತೆ ನೋಡಿಕೊಳ್ಳಬೇಕು. ಯೋಜನೆಯ ಸೌಲಭ್ಯ ದುರುಪಯೋಗವಾಗದಂತೆ ಶಿಸ್ತಿನ ಕ್ರಮ ವಹಿಸಬೇಕು ಎಂದು ಸೂಚಿಸಿದರು.ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಪಿ.ಬಿ. ಅಳಗವಾಡಿ ಮಾತನಾಡಿ, ಪಡಿತರ ಅಂಗಡಿಯಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿ ಸಮರ್ಪಕ ರೀತಿಯಲ್ಲಿ ಅರ್ಹ ಫಲಾನುಭವಿಗಳಿಗೆ ವಿತರಣೆಯಾಗುತ್ತಿರುವ ಕುರಿತು ಸಂಬಂಧಿತ ಇಲಾಖೆಯ ಅಧಿಕಾರಿಗಳು ತಪಾಸಣೆ ನಡೆಸಬೇಕು ಎಂದರು.ಈ ವೇಳೆ ಪಂಚ ಗ್ಯಾರಂಟಿ ಯೋಜನೆಯ ಸಂಬಂಧಿತ ಅಧಿಕಾರಿಗಳು, ಗೃಹಲಕ್ಷ್ಮೀ ಯೋಜನೆಯಡಿ 2025ರ ಡಿಸೆಂಬರ್‌ವರೆಗೆ 249353 ನೋಂದಣಿಯಾದ ಅರ್ಜಿಗಳ ಪೈಕಿ 249353 ಅರ್ಜಿಗಳಿಗೆ ಮಂಜೂರಾತಿ ದೊರೆತಿದೆ. ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ವಾಕರಸಾ ಸಂಸ್ಥೆಯಿಂದ 2023ರ ಜೂ. 11ರಿಂದ 2026ರ ಜ. 4ರ ವರೆಗೆ 13.75 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ₹460.32 ಕೋಟಿ ಆದಾಯವಾಗಿದೆ.ಅನ್ನಭಾಗ್ಯ ಯೋಜನೆಯಡಿ 2025ರ ಫೆಬ್ರವರಿಯಿಂದ 2025ರ ಡಿಸೆಂಬರ್‌ವರೆಗೆ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಆಹಾರ ಧಾನ್ಯಗಳ ಹಂಚಿಕೆಯಡಿ ಜಿಲ್ಲೆಯಲ್ಲಿ 4,33,927 ಕ್ವಿಂಟಲ್ ಅಕ್ಕಿ ಹಂಚಿಕೆಯಾಗಿದೆ. ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಜನವರಿ 2024ರಿಂದ 2025ರ ಸೆಪ್ಟೆಂಬರ್‌ವರೆಗೆ 6356 ಅರ್ಜಿ ಸ್ವೀಕೃತವಾಗಿವೆ. ಆ ಪೈಕಿ 4048 ಅರ್ಹ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆಯಾಗಿದೆ. ಬಾಕಿ ಉಳಿದಿರುವ 2308 ಅಭ್ಯರ್ಥಿಗಳು ಯುವನಿಧಿ ಯೋಜನೆಯ ಷರತ್ತುಗಳಿಗೆ ಹಂತ ಹಂತವಾಗಿ ಅರ್ಹರಾಗುತ್ತಾರೆ. ಗೃಹಜ್ಯೋತಿ ಯೋಜನೆಯಡಿ ಒಟ್ಟು 278395 ಸ್ಥಾವರಗಳ ಪೈಕಿ 274242 ಸ್ಥಾವರಗಳು ನೋಂದಣಿಯಾಗಿವೆ ಎಂದು ಮಾಹಿತಿ ಒದಗಿಸಿದರು.ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಿಪಂ ಯೋಜನಾ ನಿರ್ದೇಶಕ ಎಂ.ಎಸ್. ಚಳಗೇರಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಫಕ್ರುಸಾಬ ಚಿಕ್ಕಮಣ್ಣೂರ, ಸದಸ್ಯರಾದ ಶರಣಪ್ಪ ಬೆಟಗೇರಿ, ಶರೀಫ್ ಬಿಳಿಯಲಿ, ನಾಗರಾಜ ಮಡಿವಾಳರ, ವಿವೇಕ ಯಾವಗಲ್, ದೇವಪ್ಪ ಮೋರನಾಳ, ಪುಲಕೇಶಗೌಡ ಪಾಟೀಲ, ಈಶಣ್ಣ ಹುಣಸೀಕಟ್ಟಿ, ಗೀತಾ ಬೀರಣ್ಣವರ, ವೀರಯ್ಯ ಮಠಪತಿ, ಆರ್.ಆರ್. ಗಡ್ಡದ್ದೇವರಮಠ ಸೇರಿದಂತೆ ಅಧಿಕಾರಿಗಳು ಇದ್ದರು.