ಮಹಿಳಾ ಸ್ವಾವಲಂಬನೆಗೆ ಗ್ಯಾರಂಟಿ ಯೋಜನೆ ಪೂರಕ: ಸಚಿವ ಡಾ. ಎಚ್.ಕೆ. ಪಾಟೀಲ

KannadaprabhaNewsNetwork |  
Published : Mar 09, 2026, 02:15 AM IST
ಕಾರ್ಯಕ್ರಮದಲ್ಲಿ ಸಚಿವ ಡಾ. ಎಚ್‌.ಕೆ. ಪಾಟೀಲ ಮಾತನಾಡಿದರು. | Kannada Prabha

ಸಾರಾಂಶ

12ನೇ ಶತಮಾನದಲ್ಲೇ ಮಹಿಳೆಯರಿಗೆ ಸಮಾನತೆ ಹಾಗೂ ಸ್ವಾತಂತ್ರ್ಯ ದೊರಕಬೇಕು ಎಂದು ಬಸವಣ್ಣನವರು ಹೋರಾಟ ನಡೆಸಿದರು.

ಗದಗ: ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಬಡತನವನ್ನು ಬೇರುಸಮೇತ ಕಿತ್ತೊಗೆಯುವ ಕಾರ್ಯ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಮಾನವ ಹಕ್ಕುಗಳಾಗಿ ಪರಿಗಣಿಸಲ್ಪಡುವ ಕಾನೂನು ರೂಪುಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ತಿಳಿಸಿದರು.ನಗರದ ಕಾಟನ್ ಸೇಲ್ ಸೊಸೈಟಿಯಲ್ಲಿ ಭಾನುವಾರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ವತಿಯಿಂದ ಜರುಗಿದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

12ನೇ ಶತಮಾನದಲ್ಲೇ ಮಹಿಳೆಯರಿಗೆ ಸಮಾನತೆ ಹಾಗೂ ಸ್ವಾತಂತ್ರ್ಯ ದೊರಕಬೇಕು ಎಂದು ಬಸವಣ್ಣನವರು ಹೋರಾಟ ನಡೆಸಿದರು. ಶ್ರೇಣಿಕೃತ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ದೊರಕದ ಹಿನ್ನೆಲೆ ಅದನ್ನು ಸರಿಪಡಿಸಲು ತಮ್ಮ ಜೀವನವನ್ನೇ ಬಸವಣ್ಣನವರು ಮುಡಿಪಾಗಿಟ್ಟರು ಎಂದರು.

ರಾಜಕೀಯವಾಗಿ ಪಂಚಾಯತ್ ವ್ಯವಸ್ಥೆಯಲ್ಲಿ ಶೇ. 50ರಷ್ಟು ಮೀಸಲಾತಿ ನೀಡುವುದರ ಮೂಲಕ ಮಹಿಳೆಯರು ಆಡಳಿತ ಹಾಗೂ ಅಧಿಕಾರವನ್ನು ಸಮರ್ಥವಾಗಿ ನಿರ್ವಹಿಸಬಲ್ಲರು ಎಂಬುದನ್ನು ಸಾಬೀತು ಮಾಡಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಬಹುಕಾಲ ಸಮರ್ಥವಾಗಿ ಆಡಳಿತ ನಡೆಸಿದ್ದಾರೆ. ಇಂದು ಪ್ರತಿ ಗ್ರಾಮದಲ್ಲೂ ಇಂದಿರಾ ಗಾಂಧಿಯಂತಹ ಶಕ್ತಿಯುತ ಮಹಿಳೆಯರು ಇದ್ದಾರೆ ಎಂದರು.ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಮಾತನಾಡಿ, ಮಹಿಳೆಯರನ್ನು ಮಾತೃಭೂಮಿ ಎಂದು ಸಂಬೋಧಿಸುವ ಮೂಲಕ ಗೌರವಿಸುವ ಸಂಸ್ಕೃತಿ ನಮ್ಮದಾಗಿದೆ. ವಿಶ್ವಾದ್ಯಂತ ಮಹಿಳೆಯರಿಗೆ ಮಹತ್ವದ ಸ್ಥಾನಮಾನ ನೀಡಲಾಗುತ್ತಿದೆ. ಮಹಿಳೆ ಸಮಾಜದಲ್ಲಿ ಹಲವಾರು ರೂಪಗಳಲ್ಲಿ ಕಾರ್ಯ ನಿರ್ವಹಿಸುವ ಸಾಮರ್ಥ್ಯ ಹೊಂದಿದ್ದಾಳೆ ಎಂದರು.ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು 17 ವರ್ಷಗಳ ಕಾಲ ದೇಶವನ್ನು ಸಮರ್ಥವಾಗಿ ಮುನ್ನಡೆಸಿದ್ದಾರೆ. ಮಹಿಳೆಯರಲ್ಲಿ ಅಗಾಧ ಶಕ್ತಿ ಅಡಗಿದ್ದು, ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕಿದೆ. ಮಹಿಳೆಯರ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು.

2023ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ರಚನೆಗೆ ಮಹಿಳೆಯರು ಪ್ರಮುಖ ಕಾರಣರಾಗಿದ್ದಾರೆ. ಇದಕ್ಕಾಗಿ ಮಹಿಳೆಯರ ಕಲ್ಯಾಣಕ್ಕೆ ಅನೇಕ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಅವು ನಿರಂತರವಾಗಿ ಮುಂದುವರಿಯುತ್ತವೆ. ರಾಜ್ಯದಲ್ಲಿ ಸುಮಾರು 1.20 ಕೋಟಿ ಕುಟುಂಬಗಳ ಆರ್ಥಿಕ ಅಭಿವೃದ್ಧಿಗೆ ಈ ಯೋಜನೆಗಳು ಸಹಾಯಕವಾಗಿವೆ ಎಂದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಮಾತನಾಡಿ, ಮಹಿಳೆ ಮಗಳಾಗಿ, ಸಹೋದರಿಯಾಗಿ, ಹೆಂಡತಿಯಾಗಿ, ತಾಯಿಯಾಗಿ, ಸೊಸೆಯಾಗಿ, ಅತ್ತೆಯಾಗಿ ಹಾಗೂ ಅಜ್ಜಿಯಾಗಿ ಹಲವು ಹೊಣೆಗಾರಿಕೆಗಳನ್ನು ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯ ಹೊಂದಿದ್ದಾಳೆ ಎಂದರು.ಈ ವೇಳೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡು ಯೋಜನೆಗಳಿಂದ ಜೀವನದಲ್ಲಿ ಆಗಿರುವ ಬದಲಾವಣೆಗಳನ್ನು ವಿವರಿಸಿದರು.ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಸಿದ್ದು ಪಾಟೀಲ, ಎಸ್.ಎನ್. ಬಳ್ಳಾರಿ, ಪ್ರಕಾಶ ಆಕಳವಾಡಿ, ಅಶೋಕ್ ಮಂದಾಲಿ, ನೀಲಮ್ಮ ಬೋಳನವರ, ಶಕುಂತಲಾ ಅಕ್ಕಿ, ಸೋಮನಕಟ್ಟಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್‌, ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಸಹಾಯಕ ಆಯುಕ್ತ ಗಂಗಪ್ಪ, ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಎಂ.ವಿ. ಚಳಗೇರಿ, ಪದ್ಮಾವತಿ ಜಿ. ಸೇರಿದಂತೆ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾರಂಟಿ ಯೋಜನೆಗಳಿಂದ ಬಡತನ ನಿರ್ಮೂಲನೆ: ರಾಜೇಂದ್ರ ರಾಣೆ
ಸಿದ್ಧಾಂತದ ಅಡಿಯಲ್ಲಿ ಪಕ್ಷ ಕಟ್ಟುವುದು ಬಹಳ ಮುಖ್ಯ