ಹೊಸಪೇಟೆ: ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳನ್ನು ಮುಟ್ಟಿಸಲು ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಿವಮೂರ್ತಿ ಕೆ. ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಗ್ರಾಮೀಣ ಮಟ್ಟದಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಅಧಿಕಾರಿಗಳಲ್ಲಿ ಸೇವಾ ಮನೋಭಾವ ಇರಬೇಕು. ನಮ್ಮ ಸಮಾಜದಲ್ಲಿ ಇನ್ನು ಅನೇಕ ಜನರು ಪ್ರಮುಖ ಸೌಕರ್ಯಗಳಿಂದ ವಂಚಿತರಾಗಿದ್ದಾರೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರಕ್ಕೆ ಹಾಗೂ ಜಿಲ್ಲಾ, ತಾಲೂಕು ಸಮಿತಿಗಳಿಗೆ ಸೂಕ್ತ ಕಚೇರಿ ಹಾಗೂ ಪೀಠೋಪಕರಣಗಳ ಒದಗಿಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ. ಈ ಕುರಿತು ಕಾಲಕಾಲಕ್ಕೆ ಸಭೆ ನಡೆಸಿ ತಾಲೂಕು, ಜಿಲ್ಲಾ ಮಟ್ಟದಲ್ಲಿ ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.ಅಪರ ಜಿಲ್ಲಾಧಿಕಾರಿ ಅನುರಾಧ ಮಾತನಾಡಿ, ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಾರ್ಯ ಪ್ರವೃತ್ತರಾಗಲು ಈಗಾಗಲೇ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಕಾರ್ಯ ನಿರ್ವಹಿಸಲಾಗುತ್ತದೆ. ತಾಲೂಕು ಮಟ್ಟದಲ್ಲಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.
ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸದಸ್ಯರು ಸಲಹೆ ಸೂಚನೆಗಳನ್ನು ನೀಡಿದರು. ಗ್ಯಾರಂಟಿ ಯೋಜನೆಗಳ ಪ್ರಗತಿಯ ಬಗ್ಗೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಗೆ ಜುಲೈ-೨೦೨೩ ರಿಂದ ಮೇ-೨೦೨೪ ವರೆಗೆ ೧೭೧,೪೫,೮೯,೭೪೦ ರೂ ಅನುದಾನ ಬಿಡುಗಡೆಯಾಗಿದೆ. ಏಪ್ರಿಲ್ ೨೦೨೪ ಮತ್ತು ಮೇ ೨೦೨೪ರಲ್ಲಿ ೧೨,೭೧೮ ಪಡಿತರ ಚೀಟಿಗಳಲ್ಲಿ ೬೪೧೭ ಗಳನ್ನು ಸರಿಪಡಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ನಾಯಕ ಮಾಹಿತಿ ನೀಡಿದರು.
ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ ೨,೯೯,೧೨೬ ಕುಟುಂಬದ ಯಜಮಾನಿ ಮಹಿಳೆಯರ ಪೈಕಿ ೨,೮೪,೧೩೯ ಮಹಿಳೆಯರು ಹೆಸರನ್ನು ನೋಂದಾಯಿಸಿಕೊಂಡಿದ್ದು ಈ ಪೈಕಿ ೨,೮೧,೭೨೧ ಫಲಾನುಭವಿಗಳಿಗೆ ತಲಾ ₹೨೦೦೦ ಮೊತ್ತವನ್ನು ಪಾವತಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಶ್ವೇತಾ ಮಾಹಿತಿ ನೀಡಿದರು.ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಕೆ. ಬದಾವಲಿ, ಚಂದ್ರಪ್ಪ ಹುಲಿಕಟ್ಟಿ, ಕೆ.ಎಸ್. ಶಾಂತನಗೌಡ, ಸೊನ್ನದ ಗುರುಬಸವರಾಜ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಭಾಗ್ಯಲಕ್ಷ್ಮಿ ಭರಾಡ, ವೆಂಕಟರಮಣ ಡಿ., ಎಂ.ದಾದಾಪೀರ್, ಜೀಲನ್, ಬಸವರಾಜ್ ಗೌಡ್ರ, ಎಲ್.ಚಂದ್ರನಾಯ್ಕ್, ಗುರುವಿನ ರವೀಂದ್ರ, ದೇವರಾಜ್ ಪಿ.ಹೆಚ್., ಪರಶುರಾಮ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಲಕ್ಷ್ಮಿ, ಜೆಸ್ಕಾಂನ ಕಾರ್ಯಪಾಲಕ ಅಭಿಯಂತರ ತೇಜನಾಯ್ಕ್, ಕಲ್ಯಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿ ಆರ್.ಪಿ.ವಜಂತ್ರಿ, ಉಪಸ್ಥಿತರಿದ್ದರು.