
ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಕಾರ್ಯಾಗಾರ
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ನಾಡಿನ ಆರ್ಥಿಕತೆ ಗತಿಯನ್ನೇ ಬದಲಿಸಿದ ಶಕ್ತಿಯಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಚ್.ಎಂ.ರೇವಣ್ಣ ತಿಳಿಸಿದರು.
ನಗರದ ಕುವೆಂಪು ಕಲಾಮಂದಿರದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಕಾರ್ಯಾಗಾರದಲ್ಲಿ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದ ಬಜೆಟ್ ಗಾತ್ರವನ್ನು ₹2.5 ಲಕ್ಷ ಕೋಟಿ ಗಳಿಂದ ₹4.09 ಲಕ್ಷ ಕೋಟಿಗೆ ಏರಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ ಎಂದು ತಿಳಿಸಿದರು.ವಿಶ್ವಸಂಸ್ಥೆ ಉನ್ನತ ಅಧಿಕಾರಿಗಳೇ ಕರ್ನಾಟಕಕ್ಕೆ ಭೇಟಿ ನೀಡಿ ಅಭಿವೃದ್ಧಿ ಮಾದರಿಯನ್ನು ವಿಶೇಷವಾಗಿ ಮಹಿಳಾ ಸಬಲೀ ಕರಣ ಮತ್ತು ಉದ್ಯೋಗ ಸೃಷ್ಟಿ ವಿಷಯಕ್ಕೆ ಮುಕ್ತವಾಗಿ ಶ್ಲಾಘಿಸಿದ್ದಾರೆ. ಶಕ್ತಿ ಮತ್ತು ಗೃಹಲಕ್ಷ್ಮಿ ಯೋಜನೆಗಳ ಮೂಲಕ ಮಹಿಳೆಯರು ಆರ್ಥಿಕವಾಗಿ ಸ್ವತಂತ್ರರಾಗುತ್ತಿದ್ದಾರೆ. ಉಚಿತ ಬಸ್ ಪ್ರಯಾಣ ಅವರ ಕೆಲಸದ ಅವಕಾಶಗಳನ್ನು ಹೆಚ್ಚಿಸಿದೆ ಎಂಬುದು ಹೆಮ್ಮೆಯ ವಿಷಯ ಎಂದು ಅಭಿಪ್ರಾಯಪಟ್ಟರು.
ಜಾಗೃತ ಕರ್ನಾಟಕ ಸಂಚಾಲಕ ಡಾ.ಎಚ್.ವಿ.ವಾಸು, ಅಭಿವೃದ್ಧಿ ಚಾಲಕ ಶಕ್ತಿಯಾಗಿ ಗ್ಯಾರಂಟಿಗಳು ಕುರಿತು ಉಪನ್ಯಾಸ ನೀಡಿ, ರಾಜ್ಯ ಸರ್ಕಾರ ಕಳೆದ 2-3 ವರ್ಷಗಳಲ್ಲಿ ಈ ಯೋಜನೆಗಳಿಗೆ ಒಟ್ಟು ₹1.16 ಲಕ್ಷ ಕೋಟಿ ವ್ಯಯಿಸಿದೆ. ಈ ಮೂಲಕ ಜನಸಾಮಾನ್ಯರ ಆರ್ಥಿಕ ಸ್ಥಿತಿ ಬಲಪಡಿಸಲಾಗಿದೆ ಎಂದರು.
ವಿಶೇಷ ವಾಗಿ ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆ ಮಹಿಳಾ ಸಬಲೀಕರಣಕ್ಕೆ ಪೂರಕ. ಫಲಾನುಭವಿಗಳು ಈ ಯೋಜನೆಗಳ ಬಗ್ಗೆ ಹೆಮ್ಮೆಯಿಂದ ಮಾತನಾಡಬೇಕು ಎಂದು ಕರೆ ನೀಡಿದರು.
’ಶಕ್ತಿ’ ಯೋಜನೆಯಡಿ ಜಿಲ್ಲೆಯ 6 ಡಿಪೋಗಳ ಮೂಲಕ ಒಟ್ಟು ₹5.95 ಕೋಟಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಈ ಯೋಜನೆ ನಿರ್ವಹಣೆಗಾಗಿ ಸರ್ಕಾರ ಕೆ.ಎಸ್.ಆರ್.ಟಿ.ಸಿಗೆ ₹231ಕೋಟಿ ಅನುದಾನ ನೀಡಿದೆ. ಇದಲ್ಲದೆ, ಪ್ರಯಾಣಿಕರ ಅನುಕೂಲಕ್ಕಾಗಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ 8 ರಿಂದ 11 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಲಾಗಿದೆ ಎಂದರು.
ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಶಾಸಕರಾದ ಜಿ.ಎಚ್.ಶ್ರೀನಿವಾಸ್, ನಯನಾ ಮೋಟಮ್ಮ, ಪರಿಸರ ಮೌಲ್ಯ ಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್.ಮಹೇಶ್, ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ,ಎಚ್.ಹರೀಶ್, ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಮೊದಲಾದವರಿದ್ದರು. ಸಮಾವೇಶಕ್ಕೆ ಮುನ್ನ ನಗರದ ಆಜಾದ್‌ಪಾರ್ಕ್ ವೃತ್ತದಿಂದ ಕುವೆಂಪು ಕಲಾಮಂದಿರದವರೆಗೆ ಗ್ಯಾರಂಟಿ ಯೋಜನೆಗಳ ಕುರಿತ ಆಕರ್ಷಕ ಮೆರವಣಿಗೆ ನಡೆಯಿತು.