ಸೊರಬ: ರಾಜ್ಯ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಬಡವರ ಪರವಾಗಿ ಆಡಳಿತ ನಡೆಸಲಾಗುತ್ತಿದೆ. ಈ ಮೂಲಕ ಗ್ಯಾರಂಟಿ ಯೋಜನೆಗಳು ಬಡವರ ಕೈ ಹಿಡಿದಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.ತಾಲೂಕಿನ ಚನ್ನಪಟ್ಟಣ ಗ್ರಾಮದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದ ಯೋಜನೆಯಡಿ ಗ್ರಾಮದ ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ ೧೫ ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳು ಬಡ ಜನತೆಗೆ ತಲುಪಿವೆ. ಈ ಯೋಜನೆಯಿಂದ ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದ ಅವರು, ಸರ್ಕಾರ ಮತ್ತು ತಾವು ಗ್ರಾಮೀಣ ಭಾಗದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು. ಗ್ರಾಮದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ರಸ್ತೆ ನಿರ್ಮಾಣವಾಗುತ್ತಿದೆ. ಗ್ರಾಮೀಣ ಭಾಗಕ್ಕೆ ಅವಶ್ಯಕತೆ ಇರುವ ಮೂಲ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ. ಶಿಕ್ಷಣ ಕ್ಷೇತ್ರದಲ್ಲೂ ಅಮೂಲಾಗ್ರ ಬದಲಾವಣೆ ತರಲಾಗುತ್ತಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪೌಷ್ಟಿಕ ಆಹಾರವನ್ನು ಸಹ ಒದಗಿಸಲಾಗುತ್ತಿದೆ ಎಂದರು. ಗ್ರಾಪಂ ಅಧ್ಯಕ್ಷ ಧನಂಜಯ್ ನಾಯ್ಕ ಅಧ್ಯಕ್ಷತೆ ವಹಿಸಿದ್ದರು.