ಗದಗ: ಪಂಚ ಗ್ಯಾರಂಟಿ ಯೋಜನೆಗಳ ಜಾರಿಯಿಂದ ರಾಜ್ಯದ ಒಂದು ಕೋಟಿಗೂ ಹೆಚ್ಚು ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಮೂಲಕ ಆರ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಕಾರಣೀಭೂತವಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು. ಅವರು ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾಡಳಿತದಿಂದ ಜರುಗಿದ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಅಂಗವಾಗಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಶಕ್ತಿ ಯೋಜನೆಯಿಂದ ಗದಗ ಜಿಲ್ಲೆಯ 5,60,87,783 ಮಹಿಳೆಯರು ಈ ಯೋಜನೆ ಬಳಸಿಕೊಂಡು ಪ್ರಯಾಣಿಸಿದ್ದಾರೆ ಎಂದರು.
ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ ಒದಗಿಸುವುದಾಗಿದೆ. ಈ ಯೋಜನೆಯಡಿ ಜಿಲ್ಲೆಯಲ್ಲಿ 2,77,478 ಗೃಹ ಬಳಕೆ ಸಂಪರ್ಕಗಳಿದ್ದು, ಜೂನ್ 2024 ತಿಂಗಳ 2,71,186 ನೋಂದಣಿಯಾಗಿದ್ದು ಉಚಿತ ವಿದ್ಯುತ ಸೌಲಭ್ಯ ಪಡೆದಿರುತ್ತಾರೆ.
ಗೃಹಲಕ್ಷ್ಮೀ ಯೋಜನೆಯು ದೇಶದಲ್ಲಿಯೇ ಅತಿ ದೊಡ್ಡ ಆರ್ಥಿಕ ಭದ್ರತಾ ಯೋಜನೆಯಾಗಿದ್ದು, ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಈ ಯೋಜನೆ ಸಹಕಾರಿಯಾಗಿದೆ. ಮನೆ ಯಜಮಾನಿಗೆ ಪ್ರತಿ ತಿಂಗಳು ₹2000 ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 2,40,396 ನೋಂದಣಿಯಾದ ಫಲಾನುಭವಿಗಳಲ್ಲಿ ಒಟ್ಟು 2,38,284 ಫಲಾನುಭವಿಗಳಿಗೆ ಡಿಬಿಟಿ (ನೇರ ನಗದು ವರ್ಗಾವಣೆ) ಮೂಲಕ ನೋಂದಾಯಿತ ಕುಟುಂಬದ ಯಜಮಾನಿಯರ ಖಾತೆಗೆ ಜಮೆ ಮಾಡಲಾಗಿದೆ. ಗೃಹಲಕ್ಷ್ಮೀ ಯೋಜನೆ ಜಾರಿಯಾದಾಗಿನಿಂದ ಪ್ರತಿ ತಿಂಗಳು ₹45 ಕೋಟಿ ಅನುದಾನ ನೀಡಲಾಗಿದೆ ಎಂದರು.ಯುವನಿಧಿ ಯೋಜನೆಯು ಪದವಿ ಹಾಗೂ ಡಿಪ್ಲೋಮಾ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಉದ್ಯೋಗ ಅರಿಸುವ ಯುವ ಜನರಿಗೆ ಗರಿಷ್ಠ ಎರಡು ವರ್ಷಗಳವರೆಗೆ ನಿರುದ್ಯೋಗ ಭತ್ಯೆ ಒದಗಿಸುವ ಯುವನಿಧಿ ಯೋಜನೆ ಡಿಸೆಂಬರ 2023 ರಿಂದ ಜಾರಿಯಾಗಿದೆ. ಪಂಚ ಗ್ಯಾರಂಟಿ ಯೋಜನೆಯ ಮೂಲಕ ಪ್ರತಿಯೊಂದು ಕುಟುಂಬದ ಹಣಕಾಸಿನ ಅಡಚಣೆ ನೀಗಿಸಿ ಗೌರವಯುತ ಬಾಳು ಒದಗಿಸಲು ಕ್ರಾಂತಿಕಾರಕ ಹೆಜ್ಜೆಯಿಟ್ಟು ನಮ್ಮ ರಾಜ್ಯ ಮುನ್ನುಗ್ಗುತ್ತಿದೆ ಎಂದರು.
ಈ ವೇಳೆ ವಿಪ ಸದಸ್ಯ ಎಸ್.ವಿ. ಸಂಕನೂರ, ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಪಂ ಸಿಇಒ ಭರತ್.ಎಸ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡರ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ.ಎಂ. ಸೇರಿದಂತೆ ಇತರರು ಇದ್ದರು.