ಕುರುಗೋಡು: ಗೌರವಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ತಾಲೂಕು ಅತಿಥಿ ಶಿಕ್ಷಕರ ಸಂಘದ ನೇತೃತ್ವದಲ್ಲಿ ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಅತಿಥಿ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲೇಶ್ ಮಾತನಾಡಿ, ಕುರುಗೋಡು ಬಿಇಒ ಕಚೇರಿ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ೩೮೦ಕ್ಕೂ ಹೆಚ್ಚು ಅತಿಥಿ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ಆರು ತಿಂಗಳಿ೦ದ ಗೌರವಧನ ಬಿಡುಗಡೆಯಾಗಿಲ್ಲ. ಪರಿಣಾಮ ಇದನ್ನೇ ನಂಬಿಕೊ೦ಡಿರುವ ಅತಿಥಿ ಶಿಕ್ಷಕರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಕೂಡಲೇ ಗೌರವಧನ ಬಿಡುಗಡೆಗೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ತಾಲೂಕು ಘಟಕದ ಅಧ್ಯಕ್ಷ ಶಿವನೇಗೌಡರ ರಾಮಪ್ಪ ಮಾತನಾಡಿ, ಏಳು ತಿಂಗಳಾದರೂ ಗೌರವಧನ ಬಿಡುಗಡೆಯಾಗದಿರುವುದರಿಂದ ಜೀವನ ನಿರ್ವಹಣೆಗೆ ತುಂಬಾ ಕಷ್ಟವಾಗಿದೆ. ಅತಿಥಿ ಶಿಕ್ಷಕರಿಗೆ ಗೌರವಧನ ಬಿಡುಗಡೆ ಮಾಡುವ ಕುರಿತು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅನಿವಾರ್ಯವಾಗಿ ಸೇವೆಗೆ ಗೈರುಹಾಜರಾಗಿ ಪ್ರತಿಭಟನೆ ನಡೆಸಬೇಕಾಯಿತು. ಕೂಡಲೇ ಸಮಸ್ಯೆ ಬಗೆಹರಿಸಿ ಗೌರವಧನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.ಮನವಿ ಸ್ವೀಕರಿಸಿದ ಬಿಇಒ ಸಿದ್ಧಲಿಂಗಮೂರ್ತಿ, ತಾಂತ್ರಿಕ ದೋಷದಿಂದ ಗೌರವಧನ ಬಿಡುಗಡೆಯಲ್ಲಿ ವಿಳಂಬವಾಗಿದೆ. ಒಂದು ವಾರದೊಳಗೆ ಗೌರವಧನ ಬಿಡುಗಡೆಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಕುರುಗೋಡು ತಾಲೂಕು ಬಿಇಒ ಕಚೇರಿ ವರೆಗೆ ಅತಿಥಿ ಶಿಕ್ಷಕರು ಗೌರವಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮೆರವಣಿಗೆ ಪ್ರತಿಭಟನಾ ನಡೆಸಿದರು.