ಜಿಲ್ಲೆಯಲ್ಲಿ ಪರೀಕ್ಷೆಗೆ 537 ವಿದ್ಯಾರ್ಥಿಗಳು ಹಾಜರು । ಮುನ್ನೆಚ್ಚರಿಕೆ ವಹಿಸುವಂತೆ ನಿರ್ದೇಶನ
ನೀಟ್ ಮರು ಪರೀಕ್ಷೆಯು ಜೂ.21ರಂದು ಕಾರವಾರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಪದವಿ ಕಾಲೇಜಿನಲ್ಲಿ ನಡೆಯಲಿದ್ದು, ಪರೀಕ್ಷಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಪಾರದರ್ಶಕ ಮತ್ತು ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸುವಂತೆ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿ ನಡೆಯುವ ನೀಟ್ ಪರೀಕ್ಷೆಗೆ 537 ವಿದ್ಯಾರ್ಥಿಗಳು ಹಾಜರಾಗಲಿದ್ದು, ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯದಂತಹ ಮೂಲಸೌಕರ್ಯ ವ್ಯವಸ್ಥೆಗಳು ಇರುವುದನ್ನು ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮುಂಚಿತವಾಗಿ ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳಬೇಕು ಎಂದರು.
ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆ ಸಾಗಾಟದ ವಾಹನಗಳಿಗೆ ಹಾಗೂ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ ಅವರು, ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆಯಿಂದ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಶ್ರವಣ ಕುಮಾರ್, ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಸರ್ಕಾರಿ ಕಲಾ ಮತ್ತು ವಿಜ್ಞಾನ ಪದವಿ ಕಾಲೇಜಿನ ಪ್ರಾಂಶುಪಾಲೆ ಗೀತಾ ವಾಲೀಕರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸತೀಶ್ ನಾಯ್ಕ ಇದ್ದರು.