ಕನ್ನಡಪ್ರಭ ವಾರ್ತೆ ಕನಕಪುರ
ದೇಗುಲ ಮಠದ ಸಮುದಾಯ ಭವನದಲ್ಲಿ ನಡೆದ ಗುರುವಂದನ ಮತ್ತು ಹಿರಿಯ ವಿದ್ಯಾರ್ಥಿಗಳ ಸಮಾವೇಶದಲ್ಲಿ ಶ್ರೀ ದಮುಮ್ಮಡಿ ನಿರ್ವಾಣ ಮಹಾಸ್ವಾಮಿ ಗಳಿಗೆ ಮಠದ ಹಿರಿಯ ವಿದ್ಯಾರ್ಥಿಗಳು ಗುರುವಂದನೆ ಸಲ್ಲಿಸಿದರು.ನಗರದ ದೇಗುಲ ಮಠದ ಸಮುದಾಯ ಭವನದಲ್ಲಿ ದೇಗುಲ ಮಠದ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಗುರುವಂದನೆ ಮತ್ತು ಹಿರಿಯ ವಿದ್ಯಾರ್ಥಿಗಳ ಸಮಾವೇಶದ ಕಾರ್ಯಕ್ರಮದಲ್ಲಿ ಶ್ರೀ ಶ್ರೀ ಡಾ. ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿಗೆ ಗುರುವಂದನೆ ಗೌರವ ಸಲ್ಲಿಸಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು ಗುರುವಂದನೆ ಸ್ವೀಕರಿಸಿ ಮಾತನಾಡಿ, ನಮ್ಮ ದೇಗುಲ ಮಠದ ಸಂಸ್ಥೆಯಲ್ಲಿ ಶಿಕ್ಷಣ ಪಡೆದ ಹಿರಿಯ ವಿದ್ಯಾರ್ಥಿಗಳು ಒಂದು ಸಮಾವೇಶವನ್ನು ಆಯೋಜಿಸಿ ಒಂದೆಡೆ ಸೇರಿರುವುದು ನನಗೆ ತುಂಬಾ ಖುಷಿ ಕೊಟ್ಟಿದೆ. ನಮ್ಮ ಸಂಸ್ಥೆಯಲ್ಲಿ ಓದಿದ ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬದುಕು ರೂಪಿಸಿಕೊಂಡಿದ್ದಾರೆ. ಅವರೆಲ್ಲರಿಗೂ ದೇವರು ಒಳಿತು ಮಾಡಲಿ ಎಂದು ಶುಭ ಹಾರೈಸಿದರು.ಶ್ರೀ ಮಠದ ಹಿರಿಯ ಶ್ರೀ ಚನ್ನಬಸವ ಮಹಾಸ್ವಾಮೀಜಿ ಆಶೀರ್ವಚನ ನೀಡಿ ಮಾತನಾಡಿ, ಹಿರಿಯ ವಿದ್ಯಾರ್ಥಿಗಳು ಮಠದ ದೊಡ್ಡ ಶಕ್ತಿಯಾಗಿದ್ದು, ಮಠದ ಹಿರಿಯ ವಿದ್ಯಾರ್ಥಿಗಳ ಸಮಾವೇಶವನ್ನು ಮಹಾಲಿಂಗಸ್ವಾಮೀಜಿಯ ಕಾಲದಿಂದಲೂ ನಡೆಸಿಕೊಂಡು ಬರುತ್ತಿರುವುದು ಹೆಮ್ಮೆಯ ವಿಷಯವಾಗಿದೆ, ಕಾರ್ಯಕ್ರಮಕ್ಕೆ ಆಗಮಿಸಿರುವ ಮಠದ ಎಲ್ಲಾ ವಿದ್ಯಾರ್ಥಿಗಳಿಗೆ, ಹಿತೈಷಿಗಳಿಗೆ,ಭಕ್ತಾಧಿಗಳಿಗೆ ಹರಗುರು ಚರಮೂರ್ತಿಗಳು ಆಶೀರ್ವದಿಸಲಿ, ಹಿರಿಯ ಶ್ರೀಗಳಾದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿಗೆ ಗುರುವಂದನೆ ಸಲ್ಲಿಸುತ್ತಿರುವುದು ನಮ್ಮ ಸೌಭಾಗ್ಯ ಎಂದರು.
ಸುತ್ತೂರು ಮಠದ ಶ್ರೀ ದೇಶಿಕೇಂದ್ರ ಮಹಾಸ್ವಾಮೀಜಿ ಮಾತನಾಡಿ, ದೇಗುಲಮಠದ ಉತ್ತರಾಧಿಕಾರಿಯಾಗಿದ್ದ ಇಮ್ಮಡಿ ಮಹಾಲಿಂಗ ಸ್ವಾಮೀಜಿಯವರಿಗೆ ಗ್ರಾಮೀಣ ಭಾಗದಲ್ಲಿ ಶಾಲೆಗಳನ್ನು ತೆರೆಯಬೇಕೆಂಬ ಕನಸಿತ್ತು, ಆಗ ಸಿದ್ದಗಂಗಾ ಮಠದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿಯ ಶಿಷ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿಯವರು ದೇಗುಲ ಮಠದ ಮುಂದಿನ ಉತ್ತರಾಧಿಕಾರಿಯಾಗಿ ಆಯ್ಕೆಯಾಗಿದ್ದರು. ಆನಂತರ ಇಮ್ಮಡಿ ನಿರ್ವಾಣ ಮಹಾಸ್ವಾಮೀಜಿಯವರ ಜೊತೆಗೂಡಿ ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿ ಗ್ರಾಮೀಣ ಭಾಗದಲ್ಲಿ ಶಾಲೆಗಳನ್ನು ತೆರೆದು ಮಠವನ್ನು ಸಾಕಷ್ಟು ಅಭಿವೃದ್ಧಿಗೊಳಿಸಿದರು.ಹಿರಿಯ ವಿದ್ಯಾರ್ಥಿಗಳು ಸದಾ ಕಾಲ ಮಠದ ಸಂಪರ್ಕದಲ್ಲಿದ್ದು ಮಠದ ಶ್ರೇಯೋಭಿವೃದ್ಧಿಗೆ ಸಹಕರಿಸಬೇಕು ಎಂದರು.ಮಠದ ಹಿರಿಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಕುಮಾರಸ್ವಾಮಿ ಮಾತನಾಡಿದರು.
ಮಠದ ಹಿರಿಯ ವಿದ್ಯಾರ್ಥಿಗಳು, ಹಿತೈಷಿಗಳು ಹಾಗೂ ಭಕ್ತರು ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿಯವರ ಆಶೀರ್ವಾದ ಪಡೆದುಕೊಂಡರು, ಬೆಳ್ಳಿ ರಕ್ತನಿಧಿ ಕೇಂದ್ರದ ಸಹಕಾರದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು, ಹತ್ತನೇ ತರಗತಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿಧ್ಯಾರ್ಥಿಗಳನ್ನು ಸನ್ಮಾನಿಸಿ, ಗೌರವಿಸಲಾಯಿತು.