ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಡಪದ ಅಪ್ಪಣ್ಣನವರು ಬಸವ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡ ಶ್ರೇಷ್ಠ ಶಿವಶರಣರಾಗಿದ್ದಾರೆ. ಬಸವಣ್ಣನವರ ಬಾಲ್ಯದ ಒಡನಾಡಿಯಾಗಿ ಅನುಭವ ಮಂಟಪದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಾಯಕ, ದಾಸೋಹ, ಸಮಾನತೆ ಹಾಗೂ ಮಾನವೀಯತೆಯ ಸಂದೇಶವನ್ನು ಜನರಲ್ಲಿ ಹರಡಿದವರು ಎಂದರು.
ಇಂದಿನ ಯುವಜನತೆ ಹಡಪದ ಅಪ್ಪಣ್ಣನವರ ಆದರ್ಶಗಳನ್ನು ಅರಿತುಕೊಂಡು ಪ್ರಾಮಾಣಿಕತೆ, ಪರಿಶ್ರಮ, ಮಾನವೀಯತೆ ಹಾಗೂ ಸಾಮಾಜಿಕ ಸೇವೆಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಸಮಾಜದ ಅಭಿವೃದ್ಧಿಗೆ ನೀಡಿರುವ ಕೊಡುಗೆ ಅಪಾರವಾಗಿದ್ದು, ದುಡಿಮೆಯನ್ನು ದೇವರ ಪೂಜೆಯೆಂದು ಭಾವಿಸಿ ಬದುಕುವ ಈ ಸಮಾಜ ಬಸವ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದೆ ಎಂದರು.ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಮಾತನಾಡಿ, ಸಮುದಾಯ ಅಭಿವೃದ್ದಿಯತ್ತ ಸಾಗಬೇಕಾದರೆ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಶಿಕ್ಷಣವೇ ಸಮಾಜದ ಪ್ರಗತಿಗೆ ಅಡಿಪಾಯವಾಗಿದ್ದು, ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳನ್ನು ಉನ್ನತ ಶಿಕ್ಷಣದತ್ತ ಪ್ರೋತ್ಸಾಹಿಸಬೇಕು. ಹಡಪದ ಅಪ್ಪಣ್ಣನವರ ಮಾರ್ಗದರ್ಶನದ ಮೌಲ್ಯಗಳೊಂದಿಗೆ ಶಿಕ್ಷಣವನ್ನು ಅಳವಡಿಸಿಕೊಂಡಾಗ ಸಮಾಜ ಇನ್ನಷ್ಟು ಪ್ರಗತಿಯತ್ತ ಸಾಗಲಿದೆ ಎಂದರು.
ಈ ಸಂದರ್ಭದಲ್ಲಿ ಸಮುದಾಯದಲ್ಲಿ ಉತ್ತಮ ಸಾಧನೆ ಮಾಡಿದ ಮಲ್ಲಿಕಾರ್ಜುನ ಹಡಪದ, ದ್ಯಾಮಗೊಂಡ ಹಡಪದ ಹಾಗೂ ಡಾ.ಯಲ್ಲಪ್ಪ ಹಡಪದ ಅವರಿಗೆ ಸನ್ಮಾನಿಸಿ, ನಿಜಸುಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಲ್ಲದೇ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವದಲ್ಲಿ ಚಿನ್ನದ ಪದಕ ಪಡೆದ ಬಿವಿವ ಸಂಘದ ಸಜ್ಜಲಶ್ರೀ ನರ್ಸಿಂಗ್ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿ ಮಹೇಶ್ವರಿ ಶಿರೋಳ ಅವರನ್ನು ಹಾಗೂ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ದ್ವಿತೀಯ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸಹ ಸತ್ಕರಿಸಲಾಯಿತು.
ಕಾರ್ಯಕ್ರಮದ ಪೂರ್ವದಲ್ಲಿ ಜಿಲ್ಲಾಡಳಿತ ಭವನದ ಮುಖ್ಯ ಆವರಣದಲ್ಲಿ ಶಾಸಕ ಉಮೇಶ ಮೇಟಿ ಅವರು ಹಡಪದ ಅಪ್ಪಣ್ಣವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆ ಜಿಲ್ಲಾಡಳಿತ ಭವನದಿಂದ ಪ್ರಾರಂಭವಾಗಿ ನಗರದ ನಾನಾ ಕಡೆ ಸಂಚರಿಸಿ ಕೊನೆಗೆ ಡಾ.ಬಿ.ಆರ್.ಅಂಬೇಡ್ಕರ ಭವನಕ್ಕೆ ಮುಕ್ತಾಯಗೊಂಡಿತು. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು ಭಾಗವಹಿಸಿದ್ದವು. ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಸೇರಿದಂತೆ ಸಮುದಾಯದವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.