ಹುಬ್ಬಳ್ಳಿ:
ಹಳೇ ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ಕೇಸ್ ಹಿಂಪಡೆಯಲು ನಿರ್ಧರಿಸಿರುವ ಸರ್ಕಾರದ ಕ್ರಮ ಖಂಡಿಸಿ ಶ್ರೀರಾಮಸೇನೆ ಕಾರ್ಯಕರ್ತರು ಹಳೇಹುಬ್ಬಳ್ಳಿ ಠಾಣೆಯ ಎದುರು ಬೃಹತ್ ಪ್ರತಿಭಟನೆ ನಡೆಸಿದರು.ಇಲ್ಲಿನ ದಿಡ್ಡಿ ಹನುಮಾನ ದೇವಸ್ಥಾನದಿಂದ ಪೊಲೀಸ್ ಠಾಣೆ ವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಠಾಣೆಯ ಮುಂಭಾಗದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಸಚಿವ ಡಾ. ಜಿ. ಪರಮೇಶ್ವರ ಅವರ ಭಾವಚಿತ್ರ ಹರಿದುಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಅಲ್ಪಸಂಖ್ಯಾತರ ತುಷ್ಟೀಕರಣಕ್ಕೆ ಸರ್ಕಾರ ಮುಂದಾಗಿದೆ. ಗಲಭೆಕೋರರು ದೇವಸ್ಥಾನ, ಆಸ್ಪತ್ರೆ ಹಾಗೂ ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆಕೋರರನ್ನು ಬಗ್ಗು ಬಡಿದು ಕಾನೂನು ರೀತಿಯ ಶಿಕ್ಷೆಗೆ ಗುರಿಪಡಿಸಬೇಕಾದ ಸರ್ಕಾರ ಅವರ ರಕ್ಷಣೆಗೆ ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.ವಾರದ ಗಡುವು:
ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಮಾತನಾಡಿ, ಗಲಭೆ ಕೇಸ್ ಹಿಂಪಡೆಯುವ ನಿರ್ಧಾರದಿಂದ ಸರ್ಕಾರ ಕೂಡಲೇ ಹಿಂದೆ ಸರಿಯಬೇಕು. ವಾರದೊಳಗೆ ತನ್ನ ನಿರ್ಧಾರವನ್ನು ವಾಪಸ್ ಪಡೆದು ಗಲಭೆಕೋರರಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಇಲ್ಲದಿದ್ದಲ್ಲಿ ಹುಬ್ಬಳ್ಳಿ ಬಂದ್ ಕರೆ ನೀಡುವ ಮೂಲಕ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಜಿಹಾದಿಗಳಿಗೆ ರಕ್ಷಣೆ ನೀಡುವ ಮೂಲಕ ಕರ್ನಾಟಕವನ್ನು ತಾಲಿಬಾನ್ ಮಾಡಲು ಹೊರಟಿದೆ. ಇದೇ ರೀತಿಯಾದಲ್ಲಿ ರಾಜ್ಯದಲ್ಲೂ ಲಾಡೆನ್ ನಂಥವರನ್ನು ಬೆಳೆಸಿದಂತಾಗುತ್ತದೆ. ವೋಟ್ ಬ್ಯಾಂಕ್‌ಗಾಗಿ ಕಾಂಗ್ರೆಸ್ ಸರ್ಕಾರ ಇಂತಹ ಕಾರ್ಯಕ್ಕೆ ಮುಂದಾಗಿದೆ ಎಂದು ವಾಗ್ದಾಳಿ ನಡೆಸಿದರು.
ಭಯೋತ್ಪಾದಕರ ಪರ ಮಾತನಾಡುತ್ತಿರುವ ಗೃಹ ಸಚಿವ ಜಿ. ಪರಮೇಶ್ವರ ಹಾಗೂ ಶಾಸಕ ಪ್ರಸಾದ್ ಅಬ್ಬಯ್ಯ, ಹಿಂದೂಗಳ ಮತ ಪಡೆದು ಅಧಿಕಾರಕ್ಕೆ ಬಂದಿದ್ದಾರೆ. ಅದನ್ನು ಅವರು ಅರಿತು ಮಾತನಾಡಬೇಕು ಎಂದರು.ಜಿಲ್ಲಾಧ್ಯಕ್ಷ ಅಣ್ಣಪ್ಪ ದಿವಟಗಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಂಜು ಕಾಟಕರ್, ಬಸು ದುರ್ಗದ, ಬಸವರಾಜ ಗೌಡರ, ಗಣಧರ ದಡೋತಿ, ನಾಗರಾಜ ಸೌತಿಕಾಯಿ, ನಾಗರಾಜ ಹುರಕಡ್ಲಿ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ತುಂತುರು ಮಳೆಯಲ್ಲೇ ಪ್ರತಿಭಟನೆ ನಡೆಸಲಾಯಿತು. ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.