ಹೊಸಪೇಟೆ: ವಿಶ್ವವಿಖ್ಯಾತ ಹಂಪಿ ಉತ್ಸವವನ್ನು ಈ ಬಾರಿ ಫೆಬ್ರವರಿ 13, 14 ಮತ್ತು 15ರಂದು ಮೂರು ದಿನಗಳ ಕಾಲ ಅತ್ಯಂತ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಲ್ಪಸಂಖ್ಯಾತರ, ವಸತಿ, ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ತಿಳಿಸಿದರು.
ಹಂಪಿ ಉತ್ಸವದ ರೂವಾರಿ ಎಂ.ಪಿ. ಪ್ರಕಾಶ್ ಕಾಲದಲ್ಲಿ ನವೆಂಬರ್‌ನಲ್ಲಿ ಉತ್ಸವ ನಡೆಯುತ್ತಿತ್ತು. ಆದರೆ ಕೋವಿಡ್ ಕಾರಣದಿಂದ ವಿಳಂಬವಾಗಿ ಕಳೆದ ವರ್ಷಗಳಿಂದ ಫೆಬ್ರವರಿಯಲ್ಲಿ ನಡೆಸಲಾಗುತ್ತಿದೆ. ಈ ಬಾರಿಯೂ ಫೆಬ್ರವರಿ 13ರಿಂದಲೇ ಆರಂಭಿಸಲು ತೀರ್ಮಾನಿಸಲಾಗಿದೆ ಎಂದರು.
₹22 ಕೋಟಿ ಬಜೆಟ್ ಪ್ರಸ್ತಾವನೆ:ಹಂಪಿ ಉತ್ಸವದ ಯಶಸ್ವಿ ಆಚರಣೆಗಾಗಿ ಈ ಬಾರಿ ₹22 ಕೋಟಿ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಳೆದ ವರ್ಷ ₹16 ಕೋಟಿ ಅನುದಾನ ನೀಡಲಾಗಿತ್ತು. ರಾಷ್ಟ್ರ ಮತ್ತು ರಾಜ್ಯಮಟ್ಟದ ಖ್ಯಾತ ಕಲಾವಿದರನ್ನು ಆಹ್ವಾನಿಸುವ ಕುರಿತು ಜ.15ರಂದು ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಮಹತ್ವದ ಸಭೆ ನಡೆಸಲಾಗುವುದು. ಈ ಸಭೆಯಲ್ಲಿ ಕಾರ್ಯಕ್ರಮಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದರು.
ಹಂಪಿ ಉತ್ಸವದಲ್ಲಿ ಪ್ರತಿ ವರ್ಷದಂತೆ ಸ್ಥಳೀಯ ಕಲಾವಿದರಿಗೂ ಹೆಚ್ಚಿನ ಆದ್ಯತೆ ನೀಡಲಾಗುವುದು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸಾರಿಗೆ ಹಾಗೂ ಮೂಲಸೌಕರ್ಯಗಳ ಬಗ್ಗೆ ವಿಶೇಷ ಗಮನ ಹರಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವನಾಗಿ ಎರಡು ಉತ್ಸವಗಳನ್ನು ಯಶಸ್ವಿ ಮಾಡಲಾಗಿದ್ದು ಇದು ಮೂರನೇ ಉತ್ಸವವಾಗಿದ್ದು, ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತದೆ ಎಂದರು.ಸಂಸದ ಈ.ತುಕಾರಾಂ, ಶಾಸಕರಾದ ಲತಾ ಮಲ್ಲಿಕಾರ್ಜುನ್, ಗಣೇಶ್, ನಾರಾ ಭರತ್ ರೆಡ್ಡಿ, ಹುಡಾ ಅಧ್ಯಕ್ಷ ಎಚ್.ಎನ್.ಎಫ್. ಇಮಾಮ್ ನಿಯಾಜಿ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಪಂ ಸಿಇಒ ಮಹ್ಮದ್ ಅಲಿ ಅಕ್ರಂ ಷಾ, ಎಸ್ಪಿ ಎಸ್.ಜಾಹ್ನವಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.