ಹಾನಗಲ್ಲ: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಲು ಕಾರಣರಾದ ತಾಲೂಕಿನ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಶಾಸಕ ಶ್ರೀನಿವಾಸ ಮಾನೆ ಅವರು ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಶಾಸಕ ಮಾನೆ, ಮತದಾರರ ಪಟ್ಟಿ ಪರಿಷ್ಕರಣೆ ಪ್ರಜಾಪ್ರಭುತ್ವದ ಬುನಾದಿಯನ್ನು ಬಲಪಡಿಸುವ ಅತ್ಯಂತ ಮಹತ್ವದ ಕಾರ್ಯವಾಗಿದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿಯ ಪರಿಶ್ರಮ, ಸಮನ್ವಯ ಹಾಗೂ ಬದ್ಧತೆಯ ಫಲವಾಗಿ ಹಾನಗಲ್ ತಾಲೂಕು ರಾಜ್ಯದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದೆ. ತಾಲೂಕಾಡಳಿತ, ಚುನಾವಣಾ ವಿಭಾಗ, ಕಂದಾಯ ಇಲಾಖೆ, ಗ್ರಾಮ ಆಡಳಿತ ಅಧಿಕಾರಿಗಳು, ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಸೇರಿದಂತೆ ಈ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಎಲ್ಲ ಸಿಬ್ಬಂದಿಯ ಸೇವೆಯನ್ನು ಅವರು ಶ್ಲಾಘಿಸಿದರು.
ತಹಸೀಲ್ದಾರ್ ವಿಠ್ಠಲ ಚೌಗಲಾ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಹನುಮಂತಪ್ಪ ಮರಗಡಿ, ತಾಲೂಕಾಧ್ಯಕ್ಷ ವೀರಪ್ಪ ಬೈಲವಾಳ, ಕೆಪಿಸಿಸಿ ಸದಸ್ಯರಾದ ಟಾಕನಗೌಡ ಪಾಟೀಲ, ಖ್ವಾಜಾಮೊಹಿದ್ದೀನ ಜಮಾದಾರ, ಕೆಎಂಎಫ್ ನಿರ್ದೇಶಕ ಚಂದ್ರಪ್ಪ ಜಾಲಗಾರ ಸೇರಿದಂತೆ ಇತರರು ಇದ್ದರು.