ಹುಬ್ಬಳ್ಳಿ: ರಾಮಜನ್ಮಭೂಮಿ ಹೋರಾಟಗಾರ ಎಂದು ಹೇಳುತ್ತಿರುವ ಬಂಧನಕ್ಕೊಳಗಾಗಿರುವ ರೌಡಿಶೀಟರ್ ಶ್ರೀಕಾಂತ ಪೂಜಾರಿ ಪರವಾಗಿ ಪ್ರತಿಭಟನೆ ನಡೆಸಿದ್ದಕ್ಕೆ ಪ್ರತಿಯಾಗಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅವಹೇಳನಕಾರಿಯಾಗಿ ನಿಂದಿಸಿದ್ದನ್ನು ಖಂಡಿಸಿ ಕಾಂಗ್ರೆಸ್ ಇಲ್ಲಿನ ಶಹರ ಠಾಣೆಯಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ ಸೇರಿದಂತೆ 43 ಜನರ ವಿರುದ್ಧ ದೂರು ದಾಖಲಿಸಿದೆ. 3 ಪ್ರತ್ಯೇಕ ದೂರು ಸಲ್ಲಿಸಲಾಗಿದೆ.
ಇದೊಂದು ಪೂರ್ವನಿಯೋಜಿತ ಹೋರಾಟ. ಅಪರಾಧ ಎಸಗುವ ಉದ್ದೇಶದಿಂದ ಈ ರೀತಿ ನಾಗರಿಕ ವಿರೋಧಿ ಪ್ರತಿಭಟನೆ ನಡೆಸಿದ್ದಾರೆ. ಕೂಡಲೇ ಇವರ ಮೇಲೆ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ, ಉಪನಾಯಕ ಅರವಿಂದ ಬೆಲ್ಲದ, ಶಾಸಕರಾದ ಮಹೇಶ ಟೆಂಗಿನಕಾಯಿ, ಪ್ರದೀಪ ಶೆಟ್ಟರ್, ಎಂ.ಆರ್. ಪಾಟೀಲ, ಪಾಲಿಕೆ ಸದಸ್ಯರಾದ ಸಂತೋಷ ಚವ್ಹಾಣ, ಶಿವು ಮೆಣಸಿನಕಾಯಿ ಸೇರಿದಂತೆ 43 ಜನರ ವಿರುದ್ಧ ದೂರು ಸಲ್ಲಿಸಿದ್ದಾರೆ. ಇವರ ಮೇಲೆ ಎಫ್‌ಐಆರ್ ದಾಖಲಿಸಿಕೊಂಡು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.ಹುಬ್ಬಳ್ಳಿ- ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಹಾಗೂ ಪಾಲಿಕೆ ಪ್ರತಿಪಕ್ಷದ ನಾಯಕಿ ಸುವರ್ಣ ಕಲ್ಲಕುಂಟ್ಲಾ ಹೀಗೆ ಒಟ್ಟು ಮೂರು ದೂರು ಸಲ್ಲಿಸಲಾಗಿದೆ.