ಕನ್ನಡಪ್ರಭ ವಾರ್ತೆ ರಾಮನಗರ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಪತ್ತು ನಿರ್ವಹಣೆ ವಿಷಯಗಳ ಕುರಿತಂತೆ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ನಿಯೋಜಿತ ನೋಡಲ್ ಅಧಿಕಾರಿಗಳು ಪ್ರತಿ ಶುಕ್ರವಾರ ಸಂಬಂಧಿಸಿದ ಕ್ಷೇತ್ರಗಳಿಗೆ ತೆರಳಿ ಅಲ್ಲಿ ಬರ ಪರಿಸ್ಥಿತಿ ಸಮರ್ಪಕವಾಗಿ ನಿಭಾಯಿಸಲು ಸಂಬಂಧಿಸಿದ ಅಧಿಕಾರಿಗಳ ಸಭೆ ನಡೆಸಬೇಕು. ಪರಿಸ್ಥಿಗಳನ್ನು ಪರಿಶೀಲಿಸಿ ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಗಮನಕ್ಕೆ ತಂದ ಬಳಿಕ ತಮಗೆ ವರದಿ ನೀಡುವಂತೆ ಸೂಚನೆ ನೀಡಿದರು.
ಅಧಿಕಾರಿಗಳ ಹಂತದಲ್ಲಿಯೇ ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸಬೇಕು, ಅವರ ವ್ಯಾಪ್ತಿಯಲ್ಲಿ ಆಗದಿದ್ದ ಸಮಸ್ಯೆಗಳನ್ನು ತಮ್ಮ ಗಮನಕ್ಕೆ ತಂದರೆ ಮುಖ್ಯಮಂತ್ರಿಗಳು ಹಾಗೂ ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸಿ ಬಗೆಹರಿಸಲು ಪ್ರಯತ್ನಿಸಲಾಗುವುದು. ಬರಗಾಲದ ಸಂದರ್ಭದಲ್ಲಿ ಬೆಳೆ ವಿಮೆ ಅತ್ಯಂತ ಉಪಯುಕ್ತ ಕ್ರಮ. ರೈತರು ತಮ್ಮ ಬೆಳೆಗಳಿಗೆ ಮಾಡಿಸಿದ ವಿಮಾ ಪರಿಹಾರ ಹಣ ಸಕಾಲದಲ್ಲಿ ಪಡೆಯುವಂತಾಗಬೇಕು. ಅದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಜಿಲ್ಲೆಯಲ್ಲಿ 18,000ಕ್ಕೂ ಹೆಚ್ಚು ರೈತರು ಈ ಬಾರಿ ಬೆಳೆ ವಿಮೆಗೆ ನೋಂದಾಯಿಸಿದ್ದು, ಅವರಲ್ಲಿ ಮಾಗಡಿ ತಾಲೂಕಿನಲ್ಲಿ ಅತಿ ಹೆಚ್ಚು ಅಂದರೆ 9,000ಕ್ಕೂ ಹೆಚ್ಚು ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಹೇಳಿದರು.ಬರಗಾಲದ ಸಂದರ್ಭದಲ್ಲಿ ಬೆಳೆ ಹಾನಿಯಾದಾಗ ರೈತರಿಗೆ ಪರಿಹಾರದ ಮೊತ್ತ ಸಕಾಲದಲ್ಲಿ ಪಾವತಿಯಾದರೆ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ರೈತರು ಬೆಳೆ ವಿಮೆಗೆ ನೋಂದಾಯಿತರಾಗುತ್ತಾರೆ. ಆ ಮೂಲಕ ರೈತರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿದರೆ ಬೆಳೆ ವಿಮೆ ಪಾವತಿಸುವ ರೈತರ ಸಂಖ್ಯೆ ಹೆಚ್ಚಾಗುತ್ತದೆ. ಇದರಲ್ಲೇನಾದರೂ ಸಮಸ್ಯೆ ಕಂಡು ಬಂದರೆ ಸಚಿವ ಸಂಪುಟ ಸಭೆ, ಕೃಷಿ ಇಲಾಖೆ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿ ಸಮಸ್ಯೆಗೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಬಾಲಕೃಷ್ಣ ಹೇಳಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಂಬಿಕಾ ಮಾತನಾಡಿ, ಜಿಲ್ಲೆಯಲ್ಲಿ 632.8 ಎಂಎಂ ವಾಡಿಕೆ ಮಳೆಯಿದ್ದು, ಈ ಬಾರಿ ಕಡಿಮೆ ಮಳೆಯಾದ ಕಾರಣ ಸಾಕಷ್ಟು ಬೆಳೆ ಹಾನಿಯಾಗಿದೆ. 500 ಕೋಟಿಗಳ ರು.ಗಳಷ್ಟು ಬೆಳೆ ಹಾನಿಯಾಗಿದೆ ಎಂದು ವರದಿ ಸಲ್ಲಿಸಲಾಗಿದೆ ಎಂದು ಹೇಳಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆಯ ಕಾರ್ಯಪಾಲಕ ಅಭಿಯಂತರ ಜ್ಞಾನೇಶ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ 36 ಗ್ರಾಪಂಗಳ 68 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದ್ದು, 15 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಇನ್ನು 15 ಗ್ರಾಮಗಳಲ್ಲಿ ಖಾಸಗಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ. 59 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯಲಾಗಿದೆ. 56 ಹಳ್ಳಿಗಳಿಗೆ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜನರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ತಾಪಂ ಇಒಗಳು, ತಹಸೀಲ್ದಾರರು, ನಗರಸಭೆ ಪೌರಾಯುಕ್ತರು, ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಎಚ್ಚರಿಕೆ ವಹಿಸಬೇಕು. ಜಿಲ್ಲೆಯ ಎಲ್ಲಾ ತಾಲೂಕು ಹಾಗೂ ಜಿಲ್ಲಾ ಕೇಂದ್ರದಲ್ಲಿ ಸಹಾಯವಾಣಿ ತೆರೆಯುವಂತೆ ಸಚಿವ ಬಾಲಕೃಷ್ಣ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಕೆ. ರಾಜು, ಜಿಪಂ ಸಿಇಒ ಅನ್ಮೋಲ್ ಜೈನ್, ಎಸ್ಪಿ ರೋಹನ್ ಜಗದೀಶ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.