ಇಂದಿನಿಂದ ಹರ್‌ ಘರ್ ತಿರಂಗಾ ಅಭಿಯಾನ

KannadaprabhaNewsNetwork |  
Published : Aug 13, 2024, 12:57 AM IST
ಚಿತ್ರದುರ್ಗ  ಎರಡನೇ ಪುಟದ ಲೀಡ್  | Kannada Prabha

ಸಾರಾಂಶ

ಹರ್ ಘರ್ ತಿರಂಗ ಅಭಿಯಾನ ಕುರಿತಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

78ನೇ ಸ್ವಾತಂತ್ರ್ಯಮಹೋತ್ಸವ ಅರ್ಥಪೂರ್ಣವಾಗಿ ಆಚರಿಸುವ ಹಿನ್ನಲೆಯಲ್ಲಿ ಆ.13ರಿಂದ15 ವರೆಗೆ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಮೂರು ದಿನಗಳ ಕಾಲ ಜಿಲ್ಲೆಯ ಪ್ರತಿಯೊಬ್ಬರು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ರಾಷ್ಟ್ರಪ್ರೇಮ ಮೆರೆಯಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಹರ್ ಘರ್ ತಿರಂಗಾ ಅಭಿಯಾನ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಾರತದ ತ್ರಿವರ್ಣ ಧ್ವಜ ನಮ್ಮೆಲ್ಲರ ಅಸ್ಮಿತೆಯ ಪ್ರತೀಕ. ಇದಕ್ಕೆ ಚ್ಯುತಿ ಬಾರದಂತೆ ಪ್ರತಿಯೊಬ್ಬರು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಿ, ಅದರ ಸೆಲ್ಫೀ ಫೋಟೋವನ್ನು ವೆಬ್‍ಸೈಟ್ hargartiranga.comನಲ್ಲಿ ಅಪ್‍ಲೋಡ್ ಮಾಡುವಂತೆ ಮನವಿ ಮಾಡಿದರು.

ಆಗಸ್ಟ್13 ರಿಂದ 15ರವರೆಗೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ, ಅಂಗನವಾಡಿ ಕೇಂದ್ರ, ಶಾಲಾ-ಕಾಲೇಜು, ಸರ್ಕಾರಿ ಕಚೇರಿ, ನ್ಯಾಯಬೆಲೆ ಅಂಗಡಿ, ಸಂಘ-ಸಂಸ್ಥೆಗಳು, ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಬೇಕು. ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ಬಾವುಟಕ್ಕೆ ಅಗೌರವ ತೋರಬಾರದು. ಕಡ್ಡಾಯವಾಗಿ ಧ್ವಜ ಸಂಹಿತೆಯನ್ನು ಪಾಲಿಸಬೇಕು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳನ್ನು ಸ್ಮರಿಸಬೇಕು. ಧ್ಜಜ ಸಂಹಿತೆಯಂತೆ ಪ್ರತಿದಿನ ಸಂಜೆ ಸೂರ್ಯಾಸ್ತದ ಮೊದಲು ಧ್ವಜವನ್ನು ಇಳಿಸಬೇಕು. ಈ ಮೂಲಕ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಸ್ಥಳೀಯ ಸಂಸ್ಥೆಗಳು, ನಗರಸಭೆ, ಕ್ರೀಡಾ ಇಲಾಖೆ ಹಾಗೂ ಶಿಕ್ಷಣ ಇಲಾಖೆಗಳು ಸಹಯೋಗದೊಂದಿಗೆ ಆ.13ರಂದು ಬೈಕ್ ರ್‍ಯಾಲಿ ಆಯೋಜಿಸಬೇಕು. ಆ.14 ರಂದು ಬೆಳಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಿರಂಗಾ ಯಾತ್ರೆ ಕೈಗೊಳ್ಳಬೇಕು. ಶಾಲಾ ಕಾಲೇಜುಗಳಲ್ಲಿ ಸ್ವಾತಂತ್ರ್ಯ ಹೋರಾಟದ ಮಹತ್ವ ಸಾರಲು ಚಿತ್ರಕಲೆ, ದೇಶ ಭಕ್ತಿ ಗೀತೆ, ಆಶುಭಾಷಣ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಬೇಕು ಎಂದರು.

ಆ.14 ರಂದು ಸಂಜೆ 5.30ಕ್ಕೆ ನಗರದ ಒನಕೆ ಓಬವ್ವ ವೃತ್ತದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ದೇಶಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ಕಚೇರಿ ಮುಖ್ಯಸ್ಥರು ಹಾಗೂ ಸಿಬ್ಬಂದಿ ತಪ್ಪದೇ ಪಾಲ್ಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಜಿಪಂ ಉಪಕಾರ್ಯದರ್ಶಿ ತಿಮ್ಮಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಸುಬ್ರಾನಾಯ್ಕ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್ ಇದ್ದರು.ಪ್ರತಿ ರಾಷ್ಟ್ರಧ್ವಜಕ್ಕೆ ₹26 ನಿಗದಿ: ನಗರದ ತರಾಸು ರಂಗಮಂದಿರ ಆವರಣದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ 5000 ರಾಷ್ಟ್ರಧ್ವಜಗಳು ಲಭ್ಯವಿದ್ದು, ಪ್ರತಿ ರಾಷ್ಟ್ರಧ್ವಜಕ್ಕೆ ರು.26 ದರ ನಿಗದಿಪಡಿಸಲಾಗಿದೆ. ಎಲ್ಲರಿಗೂ ಸುಲಭವಾಗಿ ಲಭ್ಯವಾಗುವ ರೀತಿಯಲ್ಲಿ ಪ್ರತಿ ಅಂಚೆ ಕಚೇರಿ ಹಾಗೂ ರೈಲ್ವೇ ನಿಲ್ದಾಣಗಳಲ್ಲಿಯೂ ಸಹಿತ ರಾಷ್ಟ್ರ ಧ್ವಜ ಮಾರಾಟ ಮಾಡಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಮಾಹಿತಿ ನೀಡಿದರು.

PREV

Recommended Stories

ಶ್ರೀ ಶ್ರೀ ರವಿಶಂಕರ್‌ಗೆ ವರ್ಲ್ಡ್ ಲೀಡರ್ ಫಾರ್ ಪೀಸ್ ಆ್ಯಂಡ್‌ ಸೆಕ್ಯೂರಿಟಿ ಪ್ರಶಸ್ತಿ
ಹಾಡಹಗಲೇ ಮನೆಗೆ ನುಗ್ಗಿ ಚಹಾ ವ್ಯಾಪಾರಿಯ ಕತ್ತು ಕೊಯ್ದು ಹತ್ಯೆ