ಹಾರಂಗಿ: ರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ ಮಂತರ್‌ ಗೌಡ

KannadaprabhaNewsNetwork | Published : Oct 28, 2023 1:15 AM

ಸಾರಾಂಶ

ಕೆಲವು ಅಡೆತಡೆಗಳಿಂದ ನನೆಗುದಿಗೆ ಬಿದ್ದಿದ್ದ ಕಾಮಗಾರಿಯನ್ನು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು
ಕನ್ನಡಪ್ರಭ ವಾರ್ತೆ ಕುಶಾಲನಗರ ಕಾವೇರಿ ನೀರಾವರಿ ನಿಗಮದ ವತಿಯಿಂದ 10 ಕೋಟಿ ರು. ವೆಚ್ಚದಲ್ಲಿ ಕೈಗೊಂಡಿರುವ ಗುಮ್ಮನಕೊಲ್ಲಿ-ಹಾರಂಗಿ ಸಂಪರ್ಕ ಕಲ್ಪಿಸುವ ಕಾಂಕ್ರೀಟ್ ರಸ್ತೆ ಕಾಮಗಾರಿ ಆದಷ್ಟು ಬೇಗನೆ ಪೂರ್ಣಗೊಳಿಸಲಾಗುವುದು ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ. ಕೆಲವು ಅಡೆತಡೆಗಳಿಂದ ನನೆಗುದಿಗೆ ಬಿದ್ದಿದ್ದ ಕಾಮಗಾರಿಯನ್ನು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿ, ಅರ್ಧಕ್ಕೆ ನಿಂತಿರುವ ರಸ್ತೆಯ ಕಾಮಗಾರಿಯಿಂದ ನಾಗರಿಕರಿಗೆ ಆಗುತ್ತಿರುವ ಅನಾನುಕೂಲತೆ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಪರಿಶೀಲಿಸಲಾಗಿದೆ. ರಸ್ತೆಯ ಅಭಿವೃದ್ಧಿಗೆ ಇರುವ ತೊಡಕುಗಳ ಬಗ್ಗೆ ಅಧಿಕಾರಿಗಳೊಂದಿಗೆ ಮಾಹಿತಿ ಸಂಗ್ರಹಿಸಿದ್ದು, ಸದ್ಯದಲ್ಲೇ ರಸ್ತೆಯ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು. ರಸ್ತೆ ಬದಿಯಲ್ಲಿರುವ ಮರ ಹಾಗೂ ವಿದ್ಯುತ್ ಕಂಬಗಳಿಂದ ರಸ್ತೆ ಕಾಮಗಾರಿಗೆ ಅಡಚಣೆ ಉಂಟಾಗಿತ್ತು. ರಸ್ತೆ ಅಭಿವೃದ್ಧಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ನಿಗಮದ ಅಧಿಕಾರಿ ಮತ್ತು ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ನೀರಾವರಿ ನಿಗಮ, ಚೆಸ್ಕಾಂ, ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲಿಸಿ ಚರ್ಚಿಸಿ ಮರಗಳ ತೆರವು, ವಿದ್ಯುತ್ ಕಂಬಗಳ ಸ್ಥಳಾಂತರಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭ ವಲಯ ಅರಣ್ಯ ಅಧಿಕಾರಿ ರತನ್ ಕುಮಾರ್, ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರ ದೇವೇಗೌಡ, ಸಹಾಯಕ ಕಾರ್ಯಪಾಲಕ ಅಭಿಯಂತರ ಪುಟ್ಟಸ್ವಾಮಿ, ಚೆಸ್ಕಾಂನ ಸಹಾಯಕ ಅಭಿಯಂತರ ವಿನಯ್, ಡಿ.ಆರ್.ಎಫ್.ಒ.ಅನಿಲ್ ಡಿಸೋಜ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಜಿ.ಪಂ. ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ಪುರಸಭೆ ಸದಸ್ಯ ಎಂ.ಕೆ.ದಿನೇಶ್, ಕೂಡುಮಂಗಳೂರು ಗ್ರಾ.ಪಂ. ಸದಸ್ಯರಾದ ಗಿರೀಶ್, ಶಂಶುದ್ದಿನ್, ಫಿಲೋಮಿನಾ, ಗುತ್ತಿಗೆದಾರ ಕಿರಣ್ ಮತ್ತಿತರರು ಸ್ಥಳದಲ್ಲಿದ್ದರು.

Share this article