ಸಾಲ ವಸೂಲಿ ನೆಪದಲ್ಲಿ ಕಿರುಕುಳ ನೀಡಿದಲ್ಲಿ ಕಠಿಣ ಕ್ರಮ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

KannadaprabhaNewsNetwork |  
Published : Feb 12, 2025, 12:34 AM IST
ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸಾಲ ವಸೂಲಾತಿ ನೆಪದಲ್ಲಿ ಸಾಲಗಾರರಿಗೆ ಆಗುತ್ತಿರುವ ಕಿರುಕುಳ ಹಿನ್ನೆಲೆಯಲ್ಲಿ ಬಳ್ಳಾರಿ ಡಿಸಿ ಕಚೇರಿ ಸಭಾಂಗಣದಲ್ಲಿ ವಿವಿಧ ಹಣಕಾಸು ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ಸಭೆ ನಡೆಸಿದರು. ಎಸ್ಪಿ ಡಾ.ಶೋಭಾರಾಣಿ ಇತರರಿದ್ದರು.  | Kannada Prabha

ಸಾರಾಂಶ

ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸಾಲ ವಸೂಲಾತಿ ನೆಪದಲ್ಲಿ ಸಾಲಗಾರರಿಗೆ ಆಗುತ್ತಿರುವ ಕಿರುಕುಳ ಹಿನ್ನೆಲೆ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಬಳ್ಳಾರಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಪ್ರಶಾಂತಕುಮಾರ ಮಿಶ್ರಾ ನೇತೃತ್ವದಲ್ಲಿ ಸಭೆ ನಡೆಯಿತು.

ಬಳ್ಳಾರಿ: ಜಿಲ್ಲೆಯಲ್ಲಿನ ಮೈಕ್ರೋ ಫೈನಾನ್ಸ್ ಕಂಪನಿಗಳು ಆರ್‌ಬಿಐ ಮಾರ್ಗಸೂಚಿಯನ್ವಯ ಕಾರ್ಯನಿರ್ವಹಿಸಬೇಕು. ಸಾಲ ವಸೂಲಾತಿ ನೆಪದಲ್ಲಿ ಮಾನಸಿಕವಾಗಿ ನಿಂದಿಸುವುದು, ಅವಾಚ್ಯ ಶಬ್ದ ಬಳಸುವುದು, ಅವಮಾನಿಸುವ ಪ್ರಕರಣಗಳು ಕಂಡುಬಂದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಖಡಕ್ ಸೂಚನೆ ನೀಡಿದರು.

ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸಾಲ ವಸೂಲಾತಿ ನೆಪದಲ್ಲಿ ಸಾಲಗಾರರಿಗೆ ಆಗುತ್ತಿರುವ ಕಿರುಕುಳ ಹಿನ್ನೆಲೆ ಹಾಗೂ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಸಾಲ ವಸೂಲಾತಿ ನೆಪದಲ್ಲಿ ಯಾವುದೇ ಕಿರುಕುಳ ಪ್ರಕರಣಗಳು ವರದಿಯಾಗಿಲ್ಲ. ಕಂಪನಿಗಳ ಪದಾಧಿಕಾರಿಗಳು ಸಾರ್ವಜನಿಕ ವಲಯದಲ್ಲಿ ಉತ್ತಮ ಬಾಂಧವ್ಯ ಇಟ್ಟುಕೊಳ್ಳಬೇಕು. ಕಿರುಕುಳ ಪ್ರಕರಣಗಳಿಗೆ ಆಸ್ಪದ ನೀಡಬಾರದು ಎಂದು ಸೂಚಿಸಿದರು.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಆಗುತ್ತಿರುವ ಆತ್ಮಹತ್ಯೆ ಪ್ರಕರಣಗಳ ಕುರಿತಾಗಿ ಈಗಾಗಲೇ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ, ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಮುಂದಿನ ದಿನಗಳಲ್ಲಿ ಕಾಯ್ದೆ ಜಾರಿಗೆ ಬರಲಿದೆ ಎಂದು ತಿಳಿಸಿದರು.

ಆರ್‌ಬಿಐ ಮಾರ್ಗಸೂಚಿ ಪಾಲನೆ ಕಡ್ಡಾಯ: ಮೈಕ್ರೋ ಫೈನಾನ್ಸ್ ಕಂಪನಿಗಳು ಕಡ್ಡಾಯವಾಗಿ ಆರ್‌ಬಿಐ ಮಾರ್ಗಸೂಚಿ ಪಾಲನೆ ಮಾಡಬೇಕು. ಸಾಲ ಮಂಜೂರಾತಿ ಹಾಗೂ ವಸೂಲಾತಿ ನಿಯಮಬದ್ಧವಾಗಿರಬೇಕು. ಯಾವುದೇ ಕಾರಣಕ್ಕೂ ನಿಯಮಬಾಹಿರ ಮಾರ್ಗ ಅನುಸರಿಸಬಾರದು. ಸಾಲ ಮಂಜೂರಾತಿ ಸಂದರ್ಭದಲ್ಲಿ ನೇರವಾಗಿ ಸಾಲ ಪಡೆದವರೊಂದಿಗೇ ವ್ಯವಹರಿಸಬೇಕು. ಮಧ್ಯವರ್ತಿಗಳಿಗೆ ಅವಕಾಶ ನೀಡಬಾರದು ಎಂದರು.

ಸಾಲ ಮಂಜೂರಾತಿ ನಿಯಮಗಳು, ಸಾಲದ ಮೊತ್ತ, ಅವಧಿ, ಬಡ್ಡಿ ದರ, ಹಿಂಪಾವತಿ ಅವಧಿ ಸೇರಿದಂತೆ ಅಗತ್ಯ ಮಾಹಿತಿಗಳನ್ನೊಳಗೊಂಡ ಮಾರ್ಗಸೂಚಿ ಸಾಲ ಪಡೆಯುವವರಿಗೆ ಕಡ್ಡಾಯವಾಗಿ ನೀಡಬೇಕು. ಪಡೆದ ಸಾಲ ವಸೂಲಾತಿ ನೆಪದಲ್ಲಿ ಯಾವುದೇ ಕಾರಣಕ್ಕೂ ಕಿರುಕುಳ ನೀಡುವಂತಿಲ್ಲ ಎಂದು ತಾಕೀತು ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ. ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 118 ಮೈಕ್ರೋ ಫೈನಾನ್ಸ್ ಕಂಪನಿಗಳಿದ್ದು, ಅದರಲ್ಲಿ 27 ಕಂಪನಿಗಳು ಆರ್‌ಬಿಐ ನಡಿ ಅಧಿಕೃತವಾಗಿ ನೋಂದಾಯಿಸಿಕೊಂಡಿವೆ. ಇನ್ನುಳಿದ 97 ಕಂಪನಿಗಳು ನೋಂದಾಯಿಸಿಕೊಂಡಿಲ್ಲ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ತಮ್ಮ ಮಾಹಿತಿಯನ್ನು ಜಿಲ್ಲಾಧಿಕಾರಿ ಕಚೇರಿ ಅಥವಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ನೀಡಬೇಕು. ಅಧಿಕಾರಿ ಮತ್ತು ಸಿಬ್ಬಂದಿ ಎಸ್‌ಪಿ ಕಚೇರಿ ಅಥವಾ ಹತ್ತಿರದ ಪೊಲೀಸ್ ಠಾಣೆಗಳಲ್ಲಿ ಕಡ್ಡಾಯವಾಗಿ ತಾವು ನೇಮಕಗೊಂಡಿರುವ ಕುರಿತು ದಾಖಲೆಗಳ ಪರಿಶೀಲನೆ ಮಾಡಿಸಬೇಕು. ಇದರಿಂದ ವಸೂಲಾತಿಗೆ ತೆರಳುವ ಏಜೆಂಟರುಗಳ ಮಾಹಿತಿ ಇರುತ್ತದೆ ಎಂದರು.

ಮುಖ್ಯವಾಗಿ ಸಾಲ ವಸೂಲಾತಿಗೆ ಬೆಳಗ್ಗೆ 9 ಗಂಟೆಯ ಮುಂಚೆ ಮತ್ತು ಸಂಜೆ 6 ಗಂಟೆಯ ನಂತರ ಕರೆ ಮಾಡುವುದಾಗಲೀ, ಮನೆಯ ಬಳಿ ಹೋಗುವುದಾಗಲೀ ಮಾಡುವಂತಿಲ್ಲ. ಮಾನಹಾನಿ, ಕಿರುಕುಳ ನೀಡುವುದು ಕಂಡುಬಂದಲ್ಲಿ ಮುಲಾಜಿಲ್ಲದೇ ಕೇಸ್ ದಾಖಲು ಮಾಡಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಒತ್ತಡ ಹೇರುವಂತಿಲ್ಲ: ಸಾಲ ಮಂಜೂರಾತಿ ಸಂದರ್ಭದಲ್ಲಿಯೇ ಸಂಸ್ಥೆಯ ಎಲ್ಲ ಷರತ್ತು ಹಾಗೂ ನಿಬಂಧನೆಗಳನ್ನು ಸಾಲ ಪಡೆಯುವವರಿಗೆ ಮನವರಿಕೆ ಮಾಡಿಕೊಡಬೇಕು. ನಿಯಮಬದ್ಧವಾಗಿಯೇ ಸಾಲ ವಸೂಲಾತಿ ಮಾಡಬೇಕು. ಯಾವುದೇ ತರಹದ ಒತ್ತಡವನ್ನು ಸಾಲಗಾರರ ಮೇಲೆ ಹೇರಬಾರದು. ಅಪರಾಧ ಹಿನ್ನಲೆ ಹೊಂದಿರುವರನ್ನು ಸಾಲ ವಸೂಲಾತಿಗೆ ನೇಮಿಸಿಕೊಳ್ಳಬಾರದು. ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಹಣ ವಸೂಲಾತಿ ನೆಪದಲ್ಲಿ ಮಾನಹಾನಿ ಇಲ್ಲವೇ ಕಿರುಕುಳ ನೀಡುವುದು ಕಂಡುಬಂದಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆ 9480803000 ಗೆ ಕರೆ ಮಾಡಿ ತಿಳಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದರು.

ಇಂತಹ ಪ್ರಕರಣಗಳಲ್ಲಿ ಶಿಕ್ಷೆಯ ವಿಧಾನಗಳು, ದಂಡದ ಪ್ರಮಾಣಗಳನ್ನು ಸಭೆಯಲ್ಲಿ ತಿಳಿಸಲಾಯಿತು.

ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಉಪವಿಭಾಗಾಧಿಕಾರಿ ಪಿ. ಪ್ರಮೋದ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಗಿರೀಶ್ ವಿ. ಕುಲಕರ್ಣಿ ಹಾಗೂ ವಿವಿಧ ಮೈಕ್ರೋಫೈನಾನ್ಸ್ ಕಂಪನಿಗಳ ವ್ಯವಸ್ಥಾಪಕರು, ಸಿಬ್ಬಂದಿ ಉಪಸ್ಥಿತರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ