ಬೆಳ್ತಂಗಡಿ: ಮಳೆ ಮಾಪಕಗಳ ಸಮರ್ಪಕ ನಿರ್ವಹಣೆ ಕೊರತೆಯಿಂದ ಕೃಷಿಕರಿಗೆ ಅನ್ಯಾಯವಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲ ಮಳೆ ಮಾಪಕಗಳನ್ನು ಪರಿಶೀಲಿಸಿ 20 ದಿನಗಳೊಳಗೆ ದುರಸ್ತಿಗೊಳಿಸುವಂತೆ ತಹಸೀಲ್ದಾರ್‌ಗೆ ಶಾಸಕ ಹರೀಶ್ ಪೂಂಜ ಸೂಚಿಸಿದ್ದಾರೆ.
ಬೆಳ್ತಂಗಡಿ: ಮಳೆ ಮಾಪಕಗಳ ಸಮರ್ಪಕ ನಿರ್ವಹಣೆ ಕೊರತೆಯಿಂದ ಕೃಷಿಕರಿಗೆ ಅನ್ಯಾಯವಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲ ಮಳೆ ಮಾಪಕಗಳನ್ನು ಪರಿಶೀಲಿಸಿ 20 ದಿನಗಳೊಳಗೆ ದುರಸ್ತಿಗೊಳಿಸುವಂತೆ ತಹಸೀಲ್ದಾರ್‌ಗೆ ಶಾಸಕ ಹರೀಶ್ ಪೂಂಜ ಸೂಚಿಸಿದ್ದಾರೆ.
ಕಳೆದ ಹಲವು ದಿನಗಳಿಂದ ಬೆಳ್ತಂಗಡಿ ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಉಂಟಾಗಿರುವ ಪ್ರವಾಹ, ಗುಡ್ಡ ಕುಸಿತ, ರಸ್ತೆ ಸಂಪರ್ಕ ಸಮಸ್ಯೆ ಹಾಗೂ ಮನೆಗಳಿಗೆ ಹಾನಿಯಾದ ಘಟನೆಗಳ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಸೋಮವಾರ ಬೆಳ್ತಂಗಡಿ ತಾ.ಪಂ. ಕಚೇರಿ ನೇತ್ರಾವತಿ ಸಭಾಂಗಣದಲ್ಲಿ ನಡೆದ ತುರ್ತು ಸಭೆಯಲ್ಲಿ ಅವರು ಮಾತನಾಡಿದರು.
ತುರ್ತು ಪರಿಸ್ಥಿತಿಯಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ಸನ್ನದ್ಧ ಸ್ಥಿತಿಯಲ್ಲಿ ಕಾರ್ಯನಿರ್ವಹಿಸಬೇಕು. ಮಳೆ ಹಾನಿ ಕುರಿತು ಪ್ರತಿ ದಿನ ವರದಿ ಸಲ್ಲಿಸುವ ಮೂಲಕ ಪರಿಸ್ಥಿತಿಯನ್ನು ನಿರಂತರ ಪರಿಶೀಲಿಸಬೇಕು ಎಂದು ಸೂಚಿಸಿದರು.
ತುರ್ತು ಸಂದರ್ಭಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ ನೀಡುತ್ತಿರುವ ಸೇವೆಯನ್ನು ಅವರು ಶ್ಲಾಘಿಸಿದರು.
ಕಿಲ್ಲೂರು-ಲಾಯಿಲ, ನಾವೂರು-ಮಿತ್ತಬಾಗಿಲು ಸೇರಿದಂತೆ ಹಲವು ಪ್ರಮುಖ ರಸ್ತೆಗಳಲ್ಲಿ ನೀರು ನಿಂತು ಸಂಚಾರ ಸ್ಥಗಿತಗೊಂಡಿರುವುದು, ಕೆಲವೆಡೆ ಸೇತುವೆಗಳಿಗೆ ಹಾನಿಯಾಗಿರುವ ಬಗ್ಗೆ ಮಾಹಿತಿ ಪಡೆದುಕೊಂಡ ಶಾಸಕರು, ಸಮಸ್ಯೆಗಳ ಕುರಿತು ತ್ವರಿತ ವರದಿ ಸಲ್ಲಿಸಿ ಪರಿಹಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ತಗ್ಗು ಪ್ರದೇಶ ಹಾಗೂ ನದಿ ಪಾತ್ರದ ಮನೆಗಳಲ್ಲಿ ವಾಸಿಸುವ ಜನರನ್ನು ಅಗತ್ಯವಿದ್ದರೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ಗ್ರಾಪಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಶಾಲೆ, ಕಾಲೇಜು ಹಾಗೂ ಅಂಗನವಾಡಿಗಳ ಅಸುರಕ್ಷಿತ ಕಟ್ಟಡಗಳಲ್ಲಿರುವ ಮಕ್ಕಳನ್ನು ಸುರಕ್ಷಿತ ಕಟ್ಟಡಗಳಿಗೆ ಸ್ಥಳಾಂತರಿಸಬೇಕು. 15 ದಿನಗಳ ಬಳಿಕ ಮತ್ತೆ ಪ್ರಗತಿ ಪರಿಶೀಲನಾ ಸಭೆ ನಡೆಸುವುದಾಗಿ ತಿಳಿಸಿದರು.
ತಹಸೀಲ್ದಾರ್ ಎಸ್.ಎನ್. ನರಗುಂದ ಮಾತನಾಡಿ, ಇದುವರೆಗೆ ಬಂದ ವರದಿಗಳ ಪ್ರಕಾರ ತಾಲೂಕಿನ ಐದು ಕಡೆ ಮನೆಗಳಿಗೆ ಹಾನಿಯಾಗಿದ್ದು, ಹಲವೆಡೆ ಗುಡ್ಡ ಕುಸಿತ ಸಂಭವಿಸಿದೆ ಎಂದರು.
ತಾಪಂ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಬೆಳ್ತಂಗಡಿ ಸರ್ಕಲ್ ಇನ್‌ಸ್ಪೆಕ್ಟರ್ ರವಿ ಬಿ.ಎಸ್. ಸೇರಿದಂತೆ ಇಲಾಖೆಗಳ ಅಧಿಕಾರಿಗಳು ಇದ್ದರು.
ತಕ್ಷಣ ಕ್ರಮಕ್ಕೆ ಸೂಚನೆ:
ಮುಂಡಾಜೆ ಪರಿಸರದಲ್ಲಿ ಭಾರಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದ್ದು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಸಮಸ್ಯೆ ಮತ್ತಷ್ಟು ಹೆಚ್ಚಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಶಾಸಕರು, ತಕ್ಷಣ ಪರಿಹಾರ ಕಾಮಗಾರಿ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಮುಂಡಾಜೆ-ಕಲ್ಮಂಜ-ಧರ್ಮಸ್ಥಳ ರಸ್ತೆಯಲ್ಲಿ ಸಂಭವಿಸಿರುವ ಗುಡ್ಡ ಕುಸಿತ ತೆರವುಗೊಳಿಸಿ ವಾಹನ ಸಂಚಾರ ಸುಗಮಗೊಳಿಸಲು ತ್ವರಿತ ಕ್ರಮಕ್ಕೆ ನಿರ್ದೇಶನ ನೀಡಿದರು.
....ಬಾಕ್ಸ್....
ಆನೆ ದಾಳಿ: 20 ಲಕ್ಷ ಪರಿಹಾರ:
ರೆಖ್ಯ ಗ್ರಾಮದಲ್ಲಿ ಆನೆ ದಾಳಿಗೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ ಸರ್ಕಾರದಿಂದ 20 ಲಕ್ಷ ರು. ಪರಿಹಾರ ಮಂಜೂರಾಗಿದ್ದು, ಮೊದಲ ಹಂತವಾಗಿ 5 ಲಕ್ಷ ರು. ಚೆಕ್ ವಿತರಿಸಲಾಗಿದೆ ಎಂದು ಪೂಂಜ ತಿಳಿಸಿದರು. ಸ್ಥಳೀಯರ ಮಾಹಿತಿ ಪ್ರಕಾರ ಎರಡು ಅಪಾಯಕಾರಿ ಕಾಡಾನೆಗಳು ನಿರಂತರವಾಗಿ ಸಂಚರಿಸುತ್ತಿದ್ದು, ಅವುಗಳನ್ನು ಸೆರೆ ಹಿಡಿದು ಆನೆ ಶಿಬಿರಕ್ಕೆ ಸ್ಥಳಾಂತರಿಸುವಂತೆ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.