ಹೆಣ್ಮಕ್ಕಳ ಮೇಲೆ ದೌರ್ಜನ್ಯ ಎಸಗಿದ್ರೆ ಕಠಿಣ ಶಿಕ್ಷೆ: ಶಿವಲೀಲಾ ಸರಗಣಾಚಾರಿ

KannadaprabhaNewsNetwork | Published : Feb 13, 2025 12:49 AM

ಸಾರಾಂಶ

ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗಿದರೆ ಪೋಕ್ಸೋ ಕಾಯ್ದೆಯಡಿ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶಿವಲೀಲಾ ಸರಗಣಾಚಾರಿ ಹೇಳಿದರು.

ಕನ್ನಡಪ್ರಭ ವಾರ್ತೆ ಇಳಕಲ್ಲ

ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗಿದರೆ ಪೋಕ್ಸೋ ಕಾಯ್ದೆಯಡಿ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶಿವಲೀಲಾ ಸರಗಣಾಚಾರಿ ಹೇಳಿದರು.

ತಾಲೂಕಿನ ಹಿರೇಕೊಡಗಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಾಗಲಕೋಟೆ, ನಗರದ ಆಶಾದೀಪ ಅಂಗವಿಕಲರ ಸರ್ವ ಅಭಿವೃದ್ಧಿ ಸೇವಾ ಸಂಸ್ಥೆ ಹಾಗೂ ನಗರದ ಮಹಿಳಾ ಸಾಂತ್ವನ ಸಹಾಯವಾಣಿ ಕೇಂದ್ರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ವಿವರಿಸಿದ ಅವರು, ಎಲ್ಲರಿಗೂ ಪ್ರಮಾಣ ವಚನ ಹೇಳಿಸುವ ಮೂಲಕ ಜಾಗೃತಿ ಮೂಡಿಸಿದರು.

ಸಾಂತ್ವನ ಕೇಂದ್ರದ ಸಮಾಜ ಸೇವಾ ಕಾರ್ಯಕರ್ತೆ ಸಾವಿತ್ರಿ ಆಚಾರ‍್ಯ ಅವರು ಮಕ್ಕಳನ್ನುದ್ದೇಶಿಸಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಮತ್ತು ಬಾಲ್ಯ ವಿವಾಹಕ್ಕೆ ಪ್ರಮುಖ ಕಾರಣಗಳು, ಪರಿಣಾಮಗಳನ್ನು ವಿದ್ಯಾರ್ಥಿಗಳಿಗೆ ಮನ ಮುಟ್ಟುವಂತೆ ಉದಾಹರಣೆಗಳ ಮೂಲಕ ವಿವರಿಸಿದರು.

ಶಾಲೆಯ ಶಿಕ್ಷಕಿ ಅನುಪಮ ಪಾಡಮುಖಿ ಮಾತನಾಡಿ, ಹೆಣ್ಣು ಮಕ್ಕಳು ಎಲ್ಲ ಕ್ಷೇತ್ರಗಳಲ್ಲೂ ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸಿದರೂ ಸಮಾನತೆ ಈಗಲೂ ಶೋಚನೀಯವಾಗಿದೆ. ಮಕ್ಕಳು ಮೊಬೈಲ್‌ಗೆ ಆಕರ್ಷಿತರಾಗದೆ ಶಿಕ್ಷಣದ ಕಡೆ ಗಮನ ನೀಡಬೇಕು. ಅಂದಾಗ ಮಾತ್ರ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಸಾಧ್ಯ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಂಸ್ಥೆಯ ಸುರೇಶ ಹಡಪದ ಸಂಸ್ಥೆ ನಡೆದು ಬಂದ ದಾರಿ, ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ರಘು ಹುಬ್ಬಳ್ಳಿ ಅವರು ಪಟ್ಟ ಶ್ರಮದ ಬಗ್ಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ಪ್ರಭಾರಿ ಮುಖ್ಯಶಿಕ್ಷಕ ಡಿ.ಎಚ್. ಮುಕ್ಕಣ್ಣನವರ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಶಾಲಾ ವಿದ್ಯಾರ್ಥಿಗಳಾದ ನಿಲಾಂಬಿಕಾ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಪೂರ್ಣಿಮಾ ಧೋತ್ರೆ ಸ್ವಾಗತಿಸಿ, ನಿರೂಪಿಸಿದರು.

Share this article