ಹಾವೇರಿಗೆ ಬೇಕಿದೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

KannadaprabhaNewsNetwork |  
Published : Feb 23, 2026, 02:15 AM IST
ಹಾವೇರಿ ಮೆಡಿಕಲ್ ಕಾಲೇಜು | Kannada Prabha

ಸಾರಾಂಶ

ವೈದ್ಯಕೀಯ ಸೌಲಭ್ಯದಲ್ಲಿ ತೀರಾ ಹಿಂದುಳಿದಿರುವ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಬೇಕು ಎಂಬ ಒತ್ತಾಯ ಹೆಚ್ಚುತ್ತಿದೆ. ಕಳೆದ ತಿಂಗಳು ಮೆಡಿಕಲ್‌ ಕಾಲೇಜು ಕಟ್ಟಡ ಉದ್ಘಾಟನೆ ಸಂದರ್ಭದಲ್ಲಿ ಈ ಬೇಡಿಕೆ ಈಡೇರಿಸುವ ವಾಗ್ದಾನ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ ಬಜೆಟ್‌ನಲ್ಲಿ ಘೋಷಣೆ ಮಾಡಿ ಅನುದಾನ ಮೀಸಲಿಡಬೇಕಿದೆ.

ನಾರಾಯಣ ಹೆಗಡೆಕನ್ನಡಪ್ರಭ ವಾರ್ತೆ ಹಾವೇರಿ

ವೈದ್ಯಕೀಯ ಸೌಲಭ್ಯದಲ್ಲಿ ತೀರಾ ಹಿಂದುಳಿದಿರುವ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಬೇಕು ಎಂಬ ಒತ್ತಾಯ ಹೆಚ್ಚುತ್ತಿದೆ. ಕಳೆದ ತಿಂಗಳು ಮೆಡಿಕಲ್‌ ಕಾಲೇಜು ಕಟ್ಟಡ ಉದ್ಘಾಟನೆ ಸಂದರ್ಭದಲ್ಲಿ ಈ ಬೇಡಿಕೆ ಈಡೇರಿಸುವ ವಾಗ್ದಾನ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ ಬಜೆಟ್‌ನಲ್ಲಿ ಘೋಷಣೆ ಮಾಡಿ ಅನುದಾನ ಮೀಸಲಿಡಬೇಕಿದೆ.

ಹಾವೇರಿಯಲ್ಲಿ ಸರ್ಕಾರದಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಬೇಕು ಎಂಬುದು ಜಿಲ್ಲೆಯ ಜನರ ಹಲವು ವರ್ಷಗಳ ಬೇಡಿಕೆಯಾಗಿದೆ.

ಜಿಲ್ಲೆಯಲ್ಲಿ ಬಡವರು ಮತ್ತು ಕೆಳ ಮಧ್ಯಮ ವರ್ಗದ ಜನರೇ ಹೆಚ್ಚಿದ್ದಾರೆ. ಹೆಚ್ಚು ದುಡ್ಡು ತೆತ್ತು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಸಾಮರ್ಥ್ಯ ಜಿಲ್ಲೆಯ ಬಹಳಷ್ಟು ಜನರಲ್ಲಿ ಇಲ್ಲ. ಹಾಗಾಗಿ ಸರ್ಕಾರಿ ಆರೋಗ್ಯ ಸೌಲಭ್ಯಗಳನ್ನೇ ಅವಲಂಬಿಸಿದ್ದಾರೆ. ಅಲ್ಲದೇ ಜಿಲ್ಲಾ ಕೇಂದ್ರ ಹಾವೇರಿಯಲ್ಲಂತೂ ಖಾಸಗಿ ಆಸ್ಪತ್ರೆಗಳಲ್ಲೂ ಮೂಲಸೌಕರ್ಯಗಳಿಲ್ಲ. ಇನ್ನು, ಮೆಡಿಕಲ್‌ ಕಾಲೇಜಿನ ಅಡಿಯಲ್ಲಿ ಬರುವ ಜಿಲ್ಲಾಸ್ಪತ್ರೆ ಸಹ ಮೂಲ ಸೌಕರ್ಯಗಳು ಮತ್ತು ಸಿಬ್ಬಂದಿ ಕೊರತೆಯಿಂದ ಸೊರಗುತ್ತಿದೆ. ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ ತಜ್ಞ ವೈದ್ಯರೂ ಸೇರಿದಂತೆ ಪ್ರಮುಖ ವಿಭಾಗಗಳೇ ಇಲ್ಲ.ಜಿಲ್ಲೆಯ ಹೆಚ್ಚಿನ ಜನಸಂಖ್ಯೆ ಗ್ರಾಮೀಣ ಭಾಗದಲ್ಲಿದ್ದು ತುರ್ತು ಆರೋಗ್ಯ ಸೇವೆ ಮರೀಚಿಕೆಯಾಗಿದೆ. ಜಿಲ್ಲೆಯಲ್ಲಿ 120 ಕಿಮೀ ರಾಷ್ಟ್ರೀಯ ಹೆದ್ದಾರಿಯಿದ್ದು ರಸ್ತೆ ಅಪಘಾತಗಳಲ್ಲಿ ಗಾಯಾಳುಗಳ ಚಿಕಿತ್ಸೆಗೆ ಟ್ರಾಮಾ ಕೇರ್ ಸೆಂಟರ್ ಸಹ ಇಲ್ಲ. ಜಿಲ್ಲೆಯ ಜನ ಹೆಚ್ಚಿನ ಚಿಕಿತ್ಸೆ ಪಡೆಯಲು ದೂರದ ದಾವಣಗೆರೆ ಅಥವಾ ಹುಬ್ಬಳ್ಳಿಗೆ ತೆರಳುವುದು ಅನಿವಾರ್ಯವಾಗಿದೆ. ಸುಸಜ್ಜಿತ ಆಸ್ಪತ್ರೆಗಳ ಕೊರತೆಯಿಂದ ಜಿಲ್ಲೆಯ ಜನ ಅಕ್ಷರಶಃ ಬಸವಳಿದಿದ್ದು, ಸರ್ಕಾರದಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಾರ್ವಜನಿಕರಿಂದ ಒತ್ತಾಯ ಹೆಚ್ಚುತ್ತಿದೆ.

ಭರವಸೆ ನೀಡಿದ್ದ ಸಿಎಂ: ಕಳೆದ ಜನವರಿ 7ರಂದು ₹500 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಹಾವೇರಿ ಮೆಡಿಕಲ್‌ ಕಾಲೇಜು ಕಟ್ಟಡವನ್ನು ಉದ್ಘಾಟಿಸಿದ್ದ ಸಿಎಂ ಸಿದ್ದರಾಮಯ್ಯ, ಹಾವೇರಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವುದಾಗಿ ಭರವಸೆ ನೀಡಿದ್ದರು. ಹೆಚ್ಚಿನ ಅವಧಿ ಸಿಎಂ ಆಗಿ ದಾಖಲೆ ಬರೆದ ಸಿದ್ದರಾಮಯ್ಯ ಮೆಡಿಕಲ್‌ ಕಾಲೇಜು ಉದ್ಘಾಟನೆ ವೇಳೆ ಸಂಸದ ಬಸವರಾಜ ಬೊಮ್ಮಾಯಿ, ಜಿಲ್ಲೆಯ ಸಚಿವರು, ಶಾಸಕರ ಒತ್ತಾಯಕ್ಕೆ ಮಣಿದು ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನೀಡುವುದಾಗಿ ಹೇಳಿದ್ದರು. ಆದರೆ, ಇದಾಗಿ ಕೇವಲ ಒಂದು ತಿಂಗಳಲ್ಲಿ ವರಸೆ ಬದಲಿಸಿರುವುದು ಜನರಲ್ಲಿ ನಿರಾಸೆ ಮೂಡಿಸಿದೆ. ಫೆ. 14ರಂದು ಹಾವೇರಿಯಲ್ಲಿ ಆಯೋಜಿಸಿದ್ದ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶದಲ್ಲಿ ಜಿಲ್ಲೆಯ ಶಾಸಕರು ಮತ್ತೊಮ್ಮೆ ಮುಖ್ಯಮಂತ್ರಿಗಳ ಗಮನ ಸೆಳೆದು, ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಜೆಟ್‌ನಲ್ಲಿ ಘೋಷಿಸುವುದಾಗಿ ಹೇಳುವಂತೆ ಮನವಿ ಮಾಡಿದರು. ಹಣಕಾಸಿನ ಲಭ್ಯತೆ ನೋಡಿಕೊಂಡು ಬೇಡಿಕೆ ಈಡೇರಿಸುವುದಾಗಿ ಹೇಳಿದ್ದಾರೆ. ಇದರಿಂದ ಬಜೆಟ್‌ನಲ್ಲಿ ಈ ಬೇಡಿಕೆ ಈಡೇರಲಿದೆಯೇ ಎಂಬ ಕುತೂಹಲ ಎಲ್ಲರದ್ದಾಗಿದೆ.

ಹಾವೇರಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಿಸಬೇಕು. ಇದು ತೀರಾ ಅವಶ್ಯಕತೆಯಾಗಿದೆ. ಸದ್ಯ ತೊಂದರೆ ಬಂದರೆ ಹುಬ್ಬಳ್ಳಿ ಅಥವಾ ದಾವಣಗೆರೆಗೆ ಹೋಗಬೇಕಾದ ಸ್ಥಿತಿ ಇದೆ. ಮೆಡಿಕಲ್‌ ಕಾಲೇಜು ಇರುವುದರಿಂದ ಅಗತ್ಯ ಅನುದಾನವನ್ನು ಬಜೆಟ್‌ನಲ್ಲಿ ಘೋಷಿಸಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನು ಘೋಷಿಸಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವುದು ಎಲ್ಲರ ಬೇಡಿಕೆ ಮತ್ತು ಹಕ್ಕೊತ್ತಾಯವಾಗಿದೆ. ಈ ಬಗ್ಗೆ ಜಿಲ್ಲೆಯ ಎಲ್ಲ ಶಾಸಕರು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಬಜೆಟ್‌ನಲ್ಲಿ ಘೋಷಣೆ ಮಾಡುವ ನಿರೀಕ್ಷೆಯಿದೆ ಎಂದು ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಶವಂತಪುರದಿಂದ ಹೊರಡೋ ಈ ರೈಲಿನ ಮಾರ್ಗ ಬದಲಾವಣೆ
ಬೆಂಗಳೂರಿಗರೆ ಎಚ್ಚರ : ಇಲ್ಲಿನ ತರಕಾರಿಗಳು ಸೇಫ್ ಅಲ್ಲ..!