ಕನ್ನಡಪ್ರಭ ವಾರ್ತೆ ಬೆಂಗಳೂರು
ಲೋಕಸಭಾ ಚುನಾವಣೆಗೆ ಬಿಜೆಪಿಯ ಮಿತ್ರಪಕ್ಷವಾಗಿರುವ ಜೆಡಿಎಸ್‌ನ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯು ಬಹುತೇಕ ಅಂತಿಮಗೊಂಡಿದೆ.
ಮಂಡ್ಯ ಕ್ಷೇತ್ರದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ಹಾಸನ, ಮಂಡ್ಯ ಮತ್ತು ಕೋಲಾರ ಕ್ಷೇತ್ರದಲ್ಲಿ ಕಣಕ್ಕಿಳಿಯಲಿದೆ. ಮಂಡ್ಯ ಕ್ಷೇತ್ರಕ್ಕೆ ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು ಬದಲಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರೇ ಕಣಕ್ಕಿಳಿಯುವುದು ಖಚಿತವಾಗಿದೆ.
ಅಂತೆಯೇ ಕೋಲಾರ ಕ್ಷೇತ್ರಕ್ಕೆ ಪಕ್ಷದ ನಾಯಕ ಮಲ್ಲೇಶ್ ಬಾಬುಗೆ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಿದೆ. ಇನ್ನು, ಹಾಸನ ಕ್ಷೇತ್ರದಿಂದ ನಿರೀಕ್ಷೆಯಂತೆ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಸ್ಪರ್ಧಿಸಲಿದ್ದಾರೆ.
ಭಾನುವಾರ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಪತ್ರಿಕಾಗೋಷ್ಠಿ ಕರೆದಿದ್ದು, ಈ ವೇಳೆ ಜೆಡಿಎಸ್ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸುವ ಸಾಧ್ಯತೆ ಇದೆ.
ಪತ್ರಿಕಾಗೋಷ್ಠಿ ವೇಳೆ ಪಕ್ಷದ ಬಹುತೇಕ ಮುಖಂಡರು ಹಾಜರಿರುವಂತೆ ಸೂಚಿಸಿದ್ದಾರೆ. ಪಕ್ಷದ ಪ್ರಮುಖರ ಸಮ್ಮುಖದಲ್ಲಿಯೇ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.
ಮಂಡ್ಯ ಕ್ಷೇತ್ರ ಜೆಡಿಎಸ್‌ಗೆ ಲಭಿಸಿರುವುದು ಖಚಿತವಾಗುತ್ತಿದ್ದಂತೆ ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು ಅಥವಾ ಡಿ.ಸಿ.ತಮ್ಮಣ್ಣ ಪೈಕಿ ಒಬ್ಬರಿಗೆ ಟಿಕೆಟ್ ನೀಡುವ ಸಾಧ್ಯತೆ ಹೆಚ್ಚಿತ್ತು. ಆದರೆ, ಇವರಿಬ್ಬರ ಪೈಕಿ ಒಬ್ಬರು ಕಣಕ್ಕಿಳಿದರೂ ಪಕ್ಷದ ಮತಗಳೇ ವಿಭಜನೆಯಾಗುವ ಸಾಧ್ಯತೆ ಹೆಚ್ಚಿತ್ತು.
ಹೀಗಾಗಿ ಕುಮಾರಸ್ವಾಮಿ ಅಥವಾ ನಿಖಿಲ್ ಕುಮಾರಸ್ವಾಮಿ ಪೈಕಿ ಒಬ್ಬರು ನಿಲ್ಲುವಂತೆ ಪಕ್ಷದ ಮುಖಂಡರೇ ಒತ್ತಾಯ ಮಾಡಿದ್ದರು.
ಅಲ್ಲದೇ, ದೆಹಲಿಗೆ ಭೇಟಿ ನೀಡಿ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ವೇಳೆ ಅವರು ಸಹ ಕುಮಾರಸ್ವಾಮಿ ಅವರೇ ಕಣಕ್ಕಿಳಿಯುವಂತೆ ಸಲಹೆ ನೀಡಿದ್ದರು.
ಈ ಎಲ್ಲಾ ಕಾರಣಗಳಿಂದಾಗಿ ಕುಮಾರಸ್ವಾಮಿ ಅವರೇ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವ ತೀರ್ಮಾನ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.
ಇನ್ನು, ಕೋಲಾರ ಕ್ಷೇತ್ರಕ್ಕೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಂಗಾರಪೇಟೆ ಕ್ಷೇತ್ರದಿಂದ ಸ್ಪರ್ಧಿಸಿ ಸೋಲನುಭವಿಸಿದ ಮಲ್ಲೇಶ್ ಬಾಬು ಹೆಸರು ಅಂತಿಮಗೊಂಡಿದೆ ಎಂದು ಹೇಳಲಾಗಿದೆ.
ಮಲ್ಲೇಶ್‌ಬಾಬು ಅವರು ವಿಧಾನಸಭೆ ಚುನಾವಣೆಯಲ್ಲಿ ಎರಡನೇ ಸ್ಥಾನ ಪಡೆದಿದ್ದರು. ಹೀಗಾಗಿ ಕಾಂಗ್ರೆಸ್‌ಗೆ ಸ್ಪರ್ಧೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಈ ಕಾರಣಕ್ಕಾಗಿಯೇ ಮಲ್ಲೇಶ್ ಬಾಬು ಅವರಿಗೆ ಟಿಕೆಟ್ ನೀಡಲಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿವೆ. ಈ ನಡುವೆ, ಹಾಲಿ ಶಾಸಕ ಸಮೃದ್ಧಿ ಮಂಜುನಾಥ್ ಮತ್ತು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಸಹ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ, ನಿಸರ್ಗ ನಾರಾಯಣಸ್ವಾಮಿ ಅವರಿಗೆ ಟಿಕೆಟ್ ಸಿಗುವುದು ಅನುಮಾನ ಎಂದು ಹೇಳಲಾಗಿದೆ.
ಮಲ್ಲೇಶ್ ಬಾಬು ಮತ್ತು ಸಮೃದ್ಧಿ ಮಂಜುನಾಥ್ ಇಬ್ಬರು ಕೋಲಾರ ಜಿಲ್ಲೆಯವರಾಗಿರುವ ಕಾರಣ ಈ ಇಬ್ಬರಲ್ಲಿ ಒಬ್ಬರಿಗೆ ಟಿಕೆಟ್ ನೀಡಲಾಗುತ್ತದೆ. ಮಲ್ಲೇಶ್ ಬಾಬು ಅವರ ಹೆಸರು ಮುಂಚೂಣಿಯಲ್ಲಿರುವ ಕಾರಣ ಅವರಿಗೆ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದೆ.