ಸಿಪಿವೈ ಜತೆ ಚರ್ಚಿಸಲು ಮುಖಂಡರಿಗೆ ಎಚ್ಡಿಕೆ ಸೂಚನೆ

KannadaprabhaNewsNetwork | Published : Jul 8, 2024 12:33 AM

ಸಾರಾಂಶ

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವರ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಪಕ್ಷದ ಕಾರ್ಯಕರ್ತರು, ಮುಖಂಡರ ಜತೆ ಸಮಾಲೋಚನೆ ನಡೆಸಿದರು.

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವರ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಪಕ್ಷದ ಕಾರ್ಯಕರ್ತರು, ಮುಖಂಡರ ಜತೆ ಸಮಾಲೋಚನೆ ನಡೆಸಿದರು.

ಬೆಂಗಳೂರಿನ ಜೆಪಿ ನಗರದ ತಮ್ಮ ನಿವಾಸದಲ್ಲಿ ಸಭೆ ನಡೆಸಿದ ಕುಮಾರಸ್ವಾಮಿ ಅವರು, ಅಭ್ಯರ್ಥಿ ಆಯ್ಕೆ ಸೇರಿದಂತೆ ಜೆಡಿಎಸ್ -ಬಿಜೆಪಿ ಮೈತ್ರಿಕೂಟ ಒಮ್ಮತವಾಗಿ ಚುನಾವಣೆ ಎದುರಿಸುವ ಬಗ್ಗೆ ಚರ್ಚಿಸಿದರು.

ಚನ್ನಪಟ್ಟಣ ಜೆಡಿಎಸ್ ಭದ್ರಕೋಟೆ. ಇಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಸಂಘಟನೆ ದೃಷ್ಟಿಯಿಂದ ಕ್ಷೇತ್ರವನ್ನು ಉಳಿಸಿಕೊಳ್ಳುವುದು ಮುಖ್ಯ. ಆದ್ದರಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ನಾಯಕರೊಬ್ಬರಿಗೆ ಟಿಕೆಟ್ ನೀಡುವಂತೆ ಮುಖಂಡರು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಅಭ್ಯರ್ಥಿ ಯಾರಾಗುತ್ತಾರೆ ಎನ್ನುವುದು ಮುಖ್ಯವಲ್ಲ. ಅಭ್ಯರ್ಥಿ ಯಾರೇ ಆದರೂ ಅವರು ಎನ್‌ಡಿಎ ಅಭ್ಯರ್ಥಿ ಆಗಿರುತ್ತಾರೆ. ಈ ಕುರಿತು ಯಾವುದೇ ಗೊಂದಲ ಬೇಡ. ಎಲ್ಲರೂ ಒಮ್ಮತವಾಗಿ, ಒಗ್ಗಟ್ಟಾಗಿ ಕೆಲಸ ಮಾಡಬೇಕು. ಮೈತ್ರಿ ಅಭ್ಯರ್ಥಿ ಗೆಲ್ಲಬೇಕು ಎನ್ನುವುದು ನಮ್ಮೆಲ್ಲರ ಗುರಿ ಆಗಬೇಕು ಎಂದು ಮುಖಂಡರಿಗೆ ತಿಳಿ ಹೇಳಿದರು.

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರನ್ನು ಪ್ರಮುಖ ಮುಖಂಡರೆಲ್ಲ ಹೋಗಿ ಖುದ್ದು ಭೇಟಿ ಮಾಡಿ ಮುಕ್ತವಾಗಿ ಚರ್ಚಿಸಿ. ಯೋಗೇಶ್ವರ ಅವರನ್ನು ಎಲ್ಲಾ ಹಂತಗಳಲ್ಲಿಯೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು, ಅವರ ಮಾರ್ಗದರ್ಶನ ಪಡೆಯಬೇಕು ಎಂದು ಹೇಳಿದರು.

ಮುಂದಿನ ವಾರ ನಾನು ಮತ್ತೆ ಬೆಂಗಳೂರಿಗೆ ಬರುತ್ತೇನೆ. ಈ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಬಿಜೆಪಿಯ ರಾಜ್ಯ, ರಾಷ್ಟ್ರೀಯ ನಾಯಕರ ಜತೆ ಸಮಾಲೋಚನೆ ನಡೆಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಚನ್ನಪಟ್ಟಣ ಕ್ಷೇತ್ರದ ಎಲ್ಲಾ ಪ್ರಮುಖ ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು.

7ಕೆಆರ್ ಎಂಎನ್ 2.ಜೆಪಿಜಿ

ಕೇಂದ್ರ ಸಚಿವ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದ ಜೆಡಿಎಸ್ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು.

Share this article