ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಏ.4ರ ಗುರುವಾರ ನಾಮಪತ್ರ ಸಲ್ಲಿಸುತ್ತಿದ್ದು, ತಾಲೂಕಿನ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸವಂತೆ ಶಾಸಕ ಎಚ್.ಟಿ.ಮಂಜು ಮನವಿ ಮಾಡಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರ ಅಭಿಮಾನ ಹಾಗೂ ಕೇಂದ್ರ ಬಿಜೆಪಿ ನಾಯಕರ ಒತ್ತಾಯಕ್ಕೆ ಕುಮಾರಣ್ಣ ಲೋಕಸಭೆಗೆ ಸ್ಪರ್ಧಿಸುತ್ತಿದ್ದು ಗುರುವಾರ ತಮ್ಮ ಉಮೇದುವಾರಿಕೆ ಸಲ್ಲಿಸುತ್ತಿದ್ದಾರೆ. ಮೈತ್ರಿ ಪಕ್ಷಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಮಂಡ್ಯಕ್ಕೆ ಆಗಮಿಸಿ ಕುಮಾರಸ್ವಾಮಿ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರಿಗೆ ನೈತಿಕ ಸ್ಥೈರ್ಯ ತುಂಬಬೇಕು ಎಂದರು.
ಕುಮಾರಣ್ಣ ನಾಡಿನ ಜನತೆಯ ಹಿತಚಿಂತಕರಾಗಿದ್ದು, ನಿಮ್ಮೆಲ್ಲರ ಆಶೀರ್ವಾದದಿಂದಾಗಿ ಜಯಶೀಲರಾಗುವ ಮೂಲಕ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಮಂತ್ರಿಯಾಗಲಿದ್ದಾರೆ. ಆ ಮೂಲಕ ಬಹಳ ವರ್ಷಗಳ ಕಾವೇರಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದಾರೆ ಎಂದರು.ಕನ್ನಡ ನಾಡಿಗೆ ಹೆಚ್ಚಿನ ಅನುದಾನ ತರುವ ಮೂಲಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಕುಮಾರಣ್ಣನ ಗೆಲುವು ಜಿಲ್ಲೆ, ರಾಜ್ಯಕ್ಕೆ ಸ್ಫೂರ್ತಿಯಾಗಲಿದೆ. ಆದ್ದರಿಂದ ಜಿಲ್ಲೆಯ ಜನತೆ ಕುಮಾರಸ್ವಾಮಿ ಅವರನ್ನು ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಮನವಿ ಮಾಡಿದರು.
ಸಂಸದೆ ಸುಮಲತಾ ಬೆಂಬಲಕ್ಕೆ ಸ್ವಾಗತ:ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಅವರನ್ನು ಬೆಂಬಲಿಸುವುದಾಗಿ ಹೇಳಿದ್ದು, ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಮೈತ್ರಿ ಪಕ್ಷದ ಅಭ್ಯರ್ಥಿಗಳು ಜಯಶೀಲರಾಗಿ ಮಾಡುವ ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ಮಾಡಲು ಸುಮಲತಾ ತೆಗೆದುಕೊಂಡಿರುವ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದರು.ನಿನ್ನೆ 7 ಅಭ್ಯರ್ಥಿಗಳಿಂದ 9 ನಾಮಪತ್ರ ಸಲ್ಲಿಕೆ
ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ 5ನೇ ದಿನವಾದ ಬುಧವಾರ 7 ಮಂದಿ ಅಭ್ಯರ್ಥಿಗಳು 9 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ. ಕುಮಾರ ತಿಳಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಗಳಾಗಿ ಅರುಣ್ ಕುಮಾರ್. ಟಿ.ವಿ - 1, ಲೋಲ - 1, ಶಿವನಂಜಪ್ಪ - 1, ಡಿ.ರಾಮಯ್ಯ 1, ಲೋಕ ಶಕ್ತಿ ಪಕ್ಷದ ಅಭ್ಯರ್ಥಿ ಎನ್. ಬಸವರಾಜು - 1 , ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಶಿವಶಂಕರ್ ಎಸ್ - 3 ನಾಮಪತ್ರ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಚಂದ್ರಶೇಖರ ಕೆ. ಆರ್ - 1 ನಾಮಪತ್ರ ಸಲ್ಲಿಸಿದರು.