ಕೊಪ್ಪಳ: ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜು. 6ರಿಂದ ಆರೋಗ್ಯ ಕೇಂದ್ರ ಕಾರ್ಯನಿರ್ವಹಿಸಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಂ.ಆರ್. ಒಡೆಯರ್ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ನ್ಯಾಯಾಲಯ ಆವರಣದಲ್ಲಿ ಇದುವರೆಗೂ ಆರೋಗ್ಯ ಕೇಂದ್ರವಿರಲಿಲ್ಲ. ನ್ಯಾಯಾಲಯಕ್ಕೆ ಪ್ರತಿನಿತ್ಯ ಬರುವ ನೂರಾರು ಕಕ್ಷಿದಾರರು, ವಕೀಲರು, ನ್ಯಾಯಾಲಯದ ಸಿಬ್ಬಂದಿಗೆ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆ ಉಂಟಾದರೂ ಜಿಲ್ಲಾಸ್ಪತ್ರೆಗೆ ಕಳುಹಿಸುವ ಅನಿವಾರ್ಯತೆ ಇತ್ತು. ಈ ವಿಷಯವನ್ನು ಗಮನದಲ್ಲಿಟ್ಟುಕೊಂಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿ. ಚಂದ್ರಶೇಖರ ಅವರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಆರೋಗ್ಯ ಕೇಂದ್ರ ಪ್ರಾರಂಭಕ್ಕೆ ಅನುವು ಮಾಡಿದರು. ಈ ಆರೋಗ್ಯ ಕೇಂದ್ರವನ್ನು ಜು. 6ರಂದು ಕೊಪ್ಪಳ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರೂ ಆಗಿರುವ, ಹೈಕೋರ್ಟ್ ನ್ಯಾಯಾಧೀಶ ಎಂ.ಜಿ. ಶುಕುರೆ ಕಮಾಲ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶರು, ಜಿಲ್ಲಾ ಆರೋಗ್ಯಾಧಿಕಾರಿಗಳು, ವಕೀಲರ ಸಂಘದ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಆರೋಗ್ಯ ಕೇಂದ್ರವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ: ಜು. 13ರಂದು ರಾಷ್ಟ್ರೀಯ ಮೆಗಾ ಲೋಕ ಅದಾಲತ್ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ರಾಜೀ ಆಗಬಹುದಾದ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗುವುದು. ಈ ಕಾರ್ಯಕ್ರಮದ ಬಗ್ಗೆ ಕರಪತ್ರಗಳ ವಿತರಣೆ, ಬಸ್ ನಿಲ್ದಾಣಗಳ ಧ್ವನಿವರ್ಧಕಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಕಸ ವಿಲೇವಾರಿಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ಕಡಿಮೆ ಖರ್ಚಿನಲ್ಲಿ ಇಲ್ಲವೇ ಖರ್ಚು ಇಲ್ಲದೇ ಶೀಘ್ರ ತೀರ್ಮಾನಕ್ಕಾಗಿ ಲೋಕ ಅದಾಲತ್ ಒಂದು ವಿಶೇಷ ಅವಕಾಶವಾಗಿದ್ದು, ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ದಾವೆದಾರರು ಹಾಗೂ ಕಕ್ಷಿದಾರರು ಈ ಲೋಕ ಅದಾಲತ್‌ನಲ್ಲಿ ಭಾಗವಹಿಸಿ ಕಾನೂನು ಮೂಲಕ ರಾಜಿ ಆಗಬಹುದಾದ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದರು.
ಆಸ್ತಿ ತೆರಿಗೆ ಪಾವತಿಗೆ ರಿಯಾಯಿತಿ ಅವಧಿ ವಿಸ್ತರಣೆ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರ ನಿರ್ದೇಶನದ ಮೇರೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ನಗರ ಸ್ಥಳೀಯ ಸಂಸ್ಥೆಗಳ 2024-25ನೇ ಸಾಲಿನ ಆಸ್ತಿ ತೆರಿಗೆ ಪಾವತಿಗೆ ಏಪ್ರೀಲ್ ತಿಂಗಳ ವರೆಗೆ ನೀಡಲಾಗಿರುವ ಶೇ. 5ರ ರಿಯಾಯಿತಿಯನ್ನು ಲೋಕ್ ಅದಾಲ್ ಸಲುವಾಗಿ ಜುರ. 31ರ ವರೆಗೆ ವಿಸ್ತರಿಸಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ತಿಳಿಸಿದರು.