ರಾಘು ಕಾಕರಮಠ
ಈ ಹಿನ್ನೆಲೆಯಲ್ಲಿ ಅಂಕೋಲಾ ತಾಲೂಕು ಆರೋಗ್ಯ ಇಲಾಖೆ ಡೆಂಘೀ ನಿಯಂತ್ರಣಕ್ಕೆ ವ್ಯಾಪಕ ಜಾಗೃತಿ ಅಭಿಯಾನ ಆರಂಭಿಸಿದೆ. ಸಾರ್ವಜನಿಕರು ಕೂಡ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದೆ.
ತಾಲೂಕು ಆರೋಗ್ಯಾಧಿಕಾರಿ ಡಾ. ಜಗದೀಶ ನಾಯ್ಕ ಅವರ ನೇತೃತ್ವದಲ್ಲಿ ಡೆಂಘೀ ನಿಯಂತ್ರಣಕ್ಕೆ ವಿಶೇಷ ಕಾರ್ಯತಂತ್ರ ರೂಪಿಸಲಾಗಿದೆ. ಪ್ರತಿದಿನ ಪರಿಸ್ಥಿತಿಯ ಮೇಲೆ ನಿಗಾ ವಹಿಸುವಂತೆ ಆರೋಗ್ಯ ಸಿಬ್ಬಂದಿಗೆ ಸೂಚನೆ ನೀಡಿರುವ ಅವರು, ಗ್ರಾಮ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ಪತ್ತೆಹಚ್ಚಿ ನಿರ್ಮೂಲನೆ ಮಾಡಲು ಆದ್ಯತೆ ನೀಡುವಂತೆ ನಿರ್ದೇಶಿಸಿದ್ದಾರೆ.ನಿಂತ ನೀರೇ ಡೆಂಘೀಗೆ ಮೂಲ: ಡೆಂಘೀ ಹರಡುವ ಎಡಿಸ್ ಜಾತಿಯ ಸೊಳ್ಳೆಗಳು ಮನೆಯ ಸುತ್ತಮುತ್ತ ನಿಂತಿರುವ ಸ್ವಚ್ಛ ನೀರಿನಲ್ಲಿ ಸಂತಾನೋತ್ಪತ್ತಿ ಮಾಡುತ್ತವೆ. ಹಳೆಯ ಟೈರ್‌ಗಳು, ಹೂವಿನ ಕುಂಡಗಳು, ತೆರೆದ ನೀರಿನ ಟ್ಯಾಂಕ್‌ಗಳು, ತೆಂಗಿನ ಚಿಪ್ಪುಗಳು, ಪ್ಲಾಸ್ಟಿಕ್ ಪಾತ್ರೆಗಳು ಹಾಗೂ ಬಳಕೆಯಾಗದ ವಸ್ತುಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳುವುದು ಅತ್ಯಗತ್ಯವಾಗಿದೆ. ವಾರಕ್ಕೊಮ್ಮೆ ನೀರಿನ ಪಾತ್ರೆಗಳನ್ನು ಖಾಲಿ ಮಾಡಿ ಸ್ವಚ್ಛಗೊಳಿಸುವುದರಿಂದ ಸೊಳ್ಳೆಗಳ ಉತ್ಪತ್ತಿಯನ್ನು ಪರಿಣಾಮಕಾರಿಯಾಗಿ ತಡೆಯಬಹುದು.
ಸೊಳ್ಳೆ ಕಡಿತದಿಂದ ರಕ್ಷಿಸಿಕೊಳ್ಳಿ: ಪೂರ್ಣ ತೋಳಿನ ಉಡುಪು ಧರಿಸುವುದು, ಸೊಳ್ಳೆ ಪರದೆ ಹಾಗೂ ಸೊಳ್ಳೆ ನಿವಾರಕಗಳ ಬಳಕೆ, ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವುದು ಡೆಂಘೀ ತಡೆಗೆ ಸಹಕಾರಿಯಾಗುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಡೆಂಘೀ ತಡೆಗಟ್ಟಲು ಸಾರ್ವಜನಿಕರ ಸಹಕಾರ ಅತ್ಯಂತ ಮುಖ್ಯ. ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಜ್ವರದ ಲಕ್ಷಣಗಳು ಕಂಡುಬಂದರೆ ವಿಳಂಬ ಮಾಡದೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷೆ ಮಾಡಿಸಿಕೊಳ್ಳಿ. ಪ್ರತಿಯೊಬ್ಬರ ಜಾಗೃತಿಯೇ ಡೆಂಘೀ ನಿಯಂತ್ರಣದ ಅತ್ಯಂತ ಪರಿಣಾಮಕಾರಿ ಅಸ್ತ್ರ ಎಂದು ಅಂಕೋಲಾ ತಾಲೂಕು ಆರೋಗ್ಯಾಧಿಕಾರಿ ಡಾ. ಜಗದೀಶ ನಾಯ್ಕ ಹೇಳಿದರು.