ಶಿಗ್ಗಾಂವಿ: ತಾಲೂಕಿನ ಬಾಡ ಗ್ರಾಮದ ಹೊರವಲಯದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ತಾಲೂಕು ಆರೋಗ್ಯ ಇಲಾಖೆಯ ವೈದ್ಯರು ಹಾಗೂ ಸಿಬ್ಬಂದಿ ಶಿಬಿರ ಹೂಡಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿ, ಅಗತ್ಯ ಚಿಕಿತ್ಸೆ ಹಾಗೂ ಆರೋಗ್ಯ ಸಲಹೆಗಳನ್ನು ನೀಡಿದರು.
ಶಾಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಕೆಮ್ಮು, ಶೀತ, ಜ್ವರ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಚಂದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಿಲಾ ಎನ್.ಡಿ. ಅವರ ನೇತೃತ್ವದಲ್ಲಿ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಕಾರ್ಯ ನಡೆಯಿತು.
ತಾಲೂಕು ಆಸ್ಪತ್ರೆಯ ವೈದ್ಯರಾದ ಡಾ. ಅಶೋಕ, ಡಾ. ಎಸ್.ಸಿ. ಕೋರಿ ಹಾಗೂ ಡಾ. ಅಮೃತಗೌಡ ಪಾಟೀಲ ಅವರು ವಿದ್ಯಾರ್ಥಿಗಳನ್ನು ಪರೀಕ್ಷಿಸಿ, ಅವರ ಆರೋಗ್ಯ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡರು. ಅಗತ್ಯವಿರುವ ವಿದ್ಯಾರ್ಥಿಗಳಿಗೆ ಸ್ಥಳದಲ್ಲಿಯೇ ಚಿಕಿತ್ಸೆ ಹಾಗೂ ಔಷಧೋಪಚಾರ ನೀಡಲಾಯಿತು.ಇದರೊಂದಿಗೆ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ, ಆರೋಗ್ಯ ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತೆಯರು ಶಿಬಿರದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ, ಸ್ವಚ್ಛತೆ ಮತ್ತು ಕುಡಿಯುವ ನೀರು ಸೇರಿದಂತೆ ವಿವಿಧ ಅಂಶಗಳ ಕುರಿತು ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳ ಆರೋಗ್ಯದ ಮೇಲೆ ನಿಗಾ ವಹಿಸುವಂತೆ ಶಾಲೆಯ ಸಿಬ್ಬಂದಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಸಲಹೆ ನೀಡಿದರು.