ಕನ್ನಡಪ್ರಭ ವಾರ್ತೆ ಕಲಬುರಗಿ
ಡೆಂಘೀ ಜ್ವರ ವ್ಯಾಪಕವಾಗಿ ಹರಡುತ್ತಿರುವ ಕಾರಣ ಜಿಲ್ಲೆಯಲ್ಲಿ ನಿಯಂತ್ರಣ ನಿಟ್ಟಿನಲ್ಲಿ ಬುಧವಾರ ಆರೋಗ್ಯ ಸಿಬ್ಬಂದಿ ಶಹಾಬಾದ ತಾಲೂಕಿನ ರಾವೂರು ಕಲ್ಲು ಗಣಿಯ ನೀರು ನಿಂತ ಪ್ರದೇಶದಲ್ಲಿ ಗಪ್ಪೆ ಎಂಬ ಲಾರ್ವಾಹಾರಿ ಮೀನುಗಳನ್ನು ಬಿಡಲಾಯಿತು.ಡೆಂಘೀ ಜ್ವರವು ಈಡಿಸ್ ಎಂಬ ಜಾತಿಯ ಸೊಳ್ಳೆ ಕಚ್ಚುವುದರಿಂದ ಒಬ್ಬರಿಂದ ಒಬ್ಬರಿಗೆ ಹರಡುವ ರೋಗವಾಗಿದ್ದು, ಈ ಸೊಳ್ಳೆಗಳ ತಿನ್ನುವ ಗಪ್ಪೆ ಮೀನುಗಳನ್ನು ಜಿಲ್ಲಾ ಪಂಚಾಯ್ತಿ ಸಿ.ಇ.ಓ ಭಂವರ್ ಸಿಂಗ್ ಮೀನಾ ಮತ್ತು ಡಿ.ಎಚ್.ಓ ಡಾ.ರತಿಕಾಂತ ಸ್ವಾಮಿ ಅವರ ಸಮಕ್ಷಮ ಆರೋಗ್ಯ ಸಿಬ್ಬಂದಿ ನೀರಿನ ಪ್ರದೇಶಕ್ಕೆ ಬಿಟ್ಟರು.
ಈಡಿಸ್ ಸೊಳ್ಳೆಗಳು ನೀರು ಶೇಖರಣೆಯ ತೊಟ್ಟಿಗಳು, ಬ್ಯಾರಲ್ ಗಳು, ಡ್ರಮ್ ಗಳು, ಹೂವಿನ ಕುಂಡ ಮುಂತಾದವುಗಳಲ್ಲದೇ ಮನೆ ಸುತ್ತ ಮುತ್ತ ಬಯಲಲ್ಲಿ ಬಿಸಾಡಿದ ಪಿಂಗಾಣಿ ವಸ್ತುಗಳು, ಪ್ಲಾಸ್ಟಿಕ್ ಕಪ್ಪುಗಳು, ಟೈರ್‌ಗಳು, ಎಳೆ ನೀರಿನಿಂದ ಚಿಪ್ಪು ಮತ್ತು ಇತರೆ ವಸ್ತುಗಳಲ್ಲಿ ನೀರು ಸಂಗ್ರಹವಾದಾಗ ಉತ್ಪತ್ತಿಯಾಗುತ್ತವೆ. ಹೀಗಾಗಿ ನೀರು ನಿಲ್ಲದಂತೆ ಮುಂಜಾಗ್ರತೆ ವಹಿಸಬೇಕು ಎಂದು ಸೊಳ್ಳೆಗಳ ತಾಣ ನಿರ್ಮೂಲನಾ ಅರಿವು ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ಅವರು ಚಾಲನೆ ನೀಡಿ ಮಾತನಾಡಿದರು.ಸಾರ್ವಜನಿಕರು ಡೆಂಘೀ ಜ್ವರದ ಕುರಿತು ಭಯ ಹಾಗೂ ಆತಂಕಕ್ಕೆ ಒಳಗಾಗದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಡೆಂಘೀ ಜ್ವರದಿಂದ ಸಂರಕ್ಷಿಸಿಕೊಳ್ಳಬೇಕು. ಡೆಂಘೀ ನಿಯಂತ್ರಣಕ್ಕಾಗಿ ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛತೆವಾಗಿಟ್ಟುಕೊಳ್ಳುವುದು ಬಹುಮುಖ್ಯವಾಗಿದೆ ಎಂದು ಭಂವರ್ ಸಿಂಗ್ ಮೀನಾ ತಿಳಿಸಿದರು. ಇದೇ ಸಂದರ್ಭದಲ್ಲಿ ಗ್ರಾಮದಲ್ಲಿ ಫಾಗಿಂಗ್ ಸಹ ಮಾಡಲಾಯಿತು.
ತಾಲೂಕಾ ಆರೋಗ್ಯಾಧಿಕಾರಿ ಡಾ.ಸಂತೋಷ, ತಾಪಂ ಇ.ಓ ಮಲ್ಲಿನಾಥ, ಗ್ರಾಪಂ ಅಧ್ಯಕ್ಷರು, ಪಿ.ಡಿ.ಓ, ಆಶಾ ಕಾರ್ಯಕರ್ತೆಯರು ಇದ್ದರು.