ಮಹಾರಾಷ್ಟ್ರದಲ್ಲಿ ಮಳೆ ಅಬ್ಬರ: ಕೃಷ್ಣಾ ನದಿಗೆ 90 ಸಾವಿರ ಕ್ಯು ನೀರು

KannadaprabhaNewsNetwork |  
Published : Jul 25, 2026, 03:00 AM IST
16 | Kannada Prabha

ಸಾರಾಂಶ

ನೆರೆಯ ಮಹಾರಾಷ್ಟ್ರದ ಪಶ್ಚಿಮ ಘಟ್ಟ ಹಾಗೂ ಕೃಷ್ಣಾ ನದಿ ಜಲಾನಯನ ಪ್ರದೇಶಗಳಲ್ಲಿ ಧಾರಾಕಾರ ಮಳೆ ಮುಂದುವರಿದ ಪರಿಣಾಮ ಬೆಳಗಾವಿ ಜಿಲ್ಲೆಯ ಗಡಿ ಭಾಗದ ನದಿಗಳು ಅಪಾಯದ ಮಟ್ಟದತ್ತ ಹರಿಯುತ್ತಿವೆ. ಕರ್ನಾಟಕದ ಗಡಿ ಪ್ರದೇಶದಲ್ಲಿ ಮಳೆಯ ಪ್ರಮಾಣ ಕಡಿಮೆಯಿದ್ದರೂ, ಮಹಾರಾಷ್ಟ್ರದಿಂದ ಹರಿದುಬರುತ್ತಿರುವ ಭಾರಿ ಪ್ರಮಾಣದ ನೀರಿನಿಂದ ಕೃಷ್ಣಾ, ದೂಧಗಂಗಾ, ವೇದಗಂಗಾ ಹಾಗೂ ಘಟಪ್ರಭಾ ನದಿಗಳ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ನೆರೆಯ ಮಹಾರಾಷ್ಟ್ರದ ಪಶ್ಚಿಮ ಘಟ್ಟ ಹಾಗೂ ಕೃಷ್ಣಾ ನದಿ ಜಲಾನಯನ ಪ್ರದೇಶಗಳಲ್ಲಿ ಧಾರಾಕಾರ ಮಳೆ ಮುಂದುವರಿದ ಪರಿಣಾಮ ಬೆಳಗಾವಿ ಜಿಲ್ಲೆಯ ಗಡಿ ಭಾಗದ ನದಿಗಳು ಅಪಾಯದ ಮಟ್ಟದತ್ತ ಹರಿಯುತ್ತಿವೆ. ಕರ್ನಾಟಕದ ಗಡಿ ಪ್ರದೇಶದಲ್ಲಿ ಮಳೆಯ ಪ್ರಮಾಣ ಕಡಿಮೆಯಿದ್ದರೂ, ಮಹಾರಾಷ್ಟ್ರದಿಂದ ಹರಿದುಬರುತ್ತಿರುವ ಭಾರಿ ಪ್ರಮಾಣದ ನೀರಿನಿಂದ ಕೃಷ್ಣಾ, ದೂಧಗಂಗಾ, ವೇದಗಂಗಾ ಹಾಗೂ ಘಟಪ್ರಭಾ ನದಿಗಳ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.

ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಸುಮಾರು 90 ಸಾವಿರ ಕ್ಯೂಸೆಕ್ ನೀರು ಹರಿದುಬರುತ್ತಿದೆ. ಮಹಾರಾಷ್ಟ್ರದ ಕೊಯ್ನಾ ಸೇರಿದಂತೆ ವಿವಿಧ ಜಲಾಶಯಗಳು ಹಾಗೂ ಜಲಾನಯನ ಪ್ರದೇಶಗಳಿಂದ ನೀರಿನ ಹರಿವು ಹೆಚ್ಚಾಗಿರುವುದರಿಂದ ಕೃಷ್ಣಾ ನದಿ ರಭಸದಿಂದ ಹರಿಯುತ್ತಿದೆ. ಕಳೆದ ಕೆಲವು ಗಂಟೆಗಳಲ್ಲಿ ನೀರಿನ ಪ್ರಮಾಣ ನಿರಂತರವಾಗಿ ಏರಿಕೆಯಾಗುತ್ತಿದ್ದು, ನದಿ ತೀರದ ಗ್ರಾಮಸ್ಥರಲ್ಲಿ ಮತ್ತೆ ಪ್ರವಾಹದ ಆತಂಕ ಮನೆಮಾಡಿದೆ.ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳು ಮೈದುಂಬಿ ಹರಿಯುತ್ತಿರುವುದರಿಂದ ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲೂಕು ವ್ಯಾಪ್ತಿಯ ಎಂಟು ಕೆಳಹಂತದ ಸೇತುವೆಗಳು ಜಲಾವೃತಗೊಂಡಿವೆ. ಸೇತುವೆಗಳ ಮೇಲೆ ನೀರು ಹರಿಯುತ್ತಿರುವುದರಿಂದ ಹಲವು ಗ್ರಾಮಗಳ ನಡುವಿನ ನೇರ ರಸ್ತೆ ಸಂಪರ್ಕ ಕಡಿತಗೊಂಡಿದೆ. ಗ್ರಾಮಸ್ಥರು ಹಾಗೂ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವಂತಾಗಿದೆ.ಕೆಲವು ಸೇತುವೆಗಳ ಎರಡೂ ಬದಿಯಲ್ಲಿ ಪೊಲೀಸ್ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಜಲಾವೃತ ಸೇತುವೆಗಳ ಮೇಲೆ ಜನರು ಸಂಚರಿಸದಂತೆ ತಡೆಹಿಡಿಯಲಾಗುತ್ತಿದೆ. ಆದರೂ ಕೆಲವರು ಅಪಾಯ ಲೆಕ್ಕಿಸದೆ ಸೇತುವೆ ದಾಟಲು ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ನೀರಿನ ವೇಗ ಹೆಚ್ಚಿರುವುದರಿಂದ ಸ್ವಲ್ಪ ನಿರ್ಲಕ್ಷ್ಯವೂ ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು ಎಂದು ತಿಳಿಸಿದ್ದಾರೆ.ಚಿಕ್ಕೋಡಿ ತಾಲೂಕಿನ ಕಲ್ಲೋಳ ಬ್ಯಾರೇಜ್ ಸಮೀಪದಲ್ಲಿರುವ ದತ್ತ ಮಂದಿರವೂ ಕೃಷ್ಣಾ ನದಿಯ ನೀರಿನಲ್ಲಿ ಮುಳುಗಡೆಯಾಗಿದೆ. ಮಂದಿರದ ಸುತ್ತಲಿನ ಪ್ರದೇಶ ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಭಕ್ತರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಬ್ಯಾರೇಜ್ ಸುತ್ತಮುತ್ತ ನೀರಿನ ಮಟ್ಟ ಹೆಚ್ಚುತ್ತಿರುವುದರಿಂದ ಪ್ರವಾಸಿಗರು ಹಾಗೂ ಸ್ಥಳೀಯರು ನದಿಯತ್ತ ತೆರಳದಂತೆ ಸೂಚಿಸಲಾಗಿದೆ.

ನದಿಗಳ ನೀರಿನ ಮಟ್ಟ ಏರಿಕೆಯಾಗುತ್ತಿರುವುದರಿಂದ ತಗ್ಗು ಪ್ರದೇಶಗಳಲ್ಲಿರುವ ಕೃಷಿ ಜಮೀನುಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ. ಕಬ್ಬು, ಸೋಯಾಬೀನ್, ಭತ್ತ, ಮೆಕ್ಕೆಜೋಳ ಸೇರಿದಂತೆ ವಿವಿಧ ಬೆಳೆಗಳು ನೀರಿನಲ್ಲಿ ಮುಳುಗುವ ಆತಂಕ ರೈತರನ್ನು ಕಾಡುತ್ತಿದೆ. ಕಳೆದ ವರ್ಷಗಳ ಪ್ರವಾಹದಿಂದ ಈಗಾಗಲೇ ನಷ್ಟ ಅನುಭವಿಸಿರುವ ರೈತರು, ಮತ್ತೊಮ್ಮೆ ಪ್ರವಾಹ ಪರಿಸ್ಥಿತಿ ಎದುರಾಗಬಹುದೆಂಬ ಭಯದಲ್ಲಿದ್ದಾರೆ.ದೂಧಗಂಗಾ ಹಾಗೂ ವೇದಗಂಗಾ ನದಿಗಳ ಹರಿವು ಕೂಡ ವೇಗವಾಗಿ ಹೆಚ್ಚುತ್ತಿದೆ. ನದಿಪಾತ್ರಕ್ಕೆ ಹೊಂದಿಕೊಂಡಿರುವ ಗ್ರಾಮಗಳಲ್ಲಿ ಜನರು ತಮ್ಮ ಜಾನುವಾರು, ಕೃಷಿ ಸಲಕರಣೆ ಮತ್ತು ಅಗತ್ಯ ವಸ್ತುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಆರಂಭಿಸಿದ್ದಾರೆ. ಕೆಲವು ಕಡೆ ನದಿ ನೀರು ತೋಟಗಳು ಹಾಗೂ ಹೊಲಗಳ ಅಂಚಿಗೆ ತಲುಪಿರುವುದರಿಂದ ರೈತರು ರಾತ್ರಿ ವೇಳೆಯಲ್ಲೂ ನೀರಿನ ಮಟ್ಟದ ಮೇಲೆ ನಿಗಾ ವಹಿಸುತ್ತಿದ್ದಾರೆ.ಇನ್ನೊಂದೆಡೆ, ಘಟಪ್ರಭಾ ನದಿಯಲ್ಲಿಯೂ ನೀರಿನ ಹರಿವು ಹೆಚ್ಚಿದ್ದು, ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯದ ನೀರಿನ ಮಟ್ಟ ಒಂದೇ ದಿನದಲ್ಲಿ ಸುಮಾರು ಮೂರು ಅಡಿ ಏರಿಕೆಯಾಗಿದೆ. ಜಲಾಶಯದಲ್ಲಿ 2,138 ಅಡಿ ನೀರು ಸಂಗ್ರಹವಾಗಿದ್ದು, 12,794 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಮಳೆ ಇದೇ ರೀತಿ ಮುಂದುವರಿದರೆ ಜಲಾಶಯದ ಒಳಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.ಹಿಡಕಲ್ ಜಲಾಶಯದ ನೀರಿನ ಮಟ್ಟ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ ಅಧಿಕಾರಿಗಳು ಒಳಹರಿವು ಮತ್ತು ಸಂಗ್ರಹ ಪ್ರಮಾಣವನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದಾರೆ. ಅಗತ್ಯವಿದ್ದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನದಿಗೆ ನೀರು ಬಿಡುವ ಸಾಧ್ಯತೆ ಇರುವುದರಿಂದ ಘಟಪ್ರಭಾ ನದಿ ತೀರದ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ.ಖಾನಾಪುರ ತಾಲೂಕಿನ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿಯೂ ಮಳೆಯ ಅಬ್ಬರ ಮುಂದುವರಿದಿದೆ. ಅರಣ್ಯ ಪ್ರದೇಶಗಳಿಂದ ಹರಿದುಬರುತ್ತಿರುವ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಕೆಲವು ಗ್ರಾಮೀಣ ರಸ್ತೆಗಳಲ್ಲಿ ನೀರು ನಿಂತಿದೆ. ಸಣ್ಣ ಸೇತುವೆಗಳು ಹಾಗೂ ಕಾಲುವೆಗಳ ಮೇಲೆ ನೀರಿನ ಒತ್ತಡ ಹೆಚ್ಚಾಗಿರುವುದರಿಂದ ವಾಹನ ಸವಾರರು ಜಾಗರೂಕತೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.

ಜಿಲ್ಲಾಡಳಿತವು ನದಿಗಳು ಮತ್ತು ಜಲಾಶಯಗಳ ನೀರಿನ ಮಟ್ಟವನ್ನು ನಿರಂತರವಾಗಿ ಗಮನಿಸುತ್ತಿದ್ದು, ಕಂದಾಯ, ಪೊಲೀಸ್, ಅಗ್ನಿಶಾಮಕ, ಸಾರಿಗೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗಳ ಅಧಿಕಾರಿಗಳಿಗೆ ಸನ್ನದ್ಧರಾಗಿರುವಂತೆ ಸೂಚಿಸಿದೆ. ಪ್ರವಾಹದ ಪರಿಸ್ಥಿತಿ ಉಂಟಾದಲ್ಲಿ ಜನರ ಸ್ಥಳಾಂತರ, ಜಾನುವಾರು ರಕ್ಷಣೆ ಹಾಗೂ ಪರಿಹಾರ ಕೇಂದ್ರಗಳ ವ್ಯವಸ್ಥೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ನದಿ ತೀರದ ಗ್ರಾಮಗಳಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸ್ಥಳೀಯ ಸಿಬ್ಬಂದಿ ಮೂಲಕ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಲಾಗುತ್ತಿದೆ. ಜಲಾವೃತ ಸೇತುವೆಗಳನ್ನು ದಾಟಬಾರದು, ನದಿಯಲ್ಲಿ ಮೀನುಗಾರಿಕೆ ನಡೆಸಬಾರದು, ಮಕ್ಕಳನ್ನು ನದಿಯತ್ತ ಬಿಡಬಾರದು ಹಾಗೂ ವದಂತಿಗಳಿಗೆ ಕಿವಿಗೊಡದೆ ಅಧಿಕೃತ ಮಾಹಿತಿಯನ್ನು ಮಾತ್ರ ನಂಬಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.ಮಹಾರಾಷ್ಟ್ರದಲ್ಲಿ ಮಳೆ ಇನ್ನೂ ಮುಂದುವರಿಯುವ ಸಾಧ್ಯತೆ ಇರುವುದರಿಂದ ಕೃಷ್ಣಾ ನದಿ ಮತ್ತು ಉಪನದಿಗಳ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗುವ ಆತಂಕವಿದೆ. ಹೀಗಾಗಿ ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ ಮತ್ತು ಖಾನಾಪುರ ತಾಲೂಕುಗಳ ನದಿ ತೀರದ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೆಹಲಿ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿ ಕ್ಯಾಂಡಲ್ ಮಾರ್ಚ್
ಯುವಕರನ್ನು ಕೆಣಕಿದವರಾರೂ ಉದ್ಧಾರವಾಗಿಲ್ಲ: ಸುನೀಲಗೌಡ ಪಾಟೀಲ