ಮಲೆನಾಡಿನಲ್ಲಿ ಮಳೆ ಅಬ್ಬರ; ದೇವಗಿರಿ-ಕಳಸೂರು ಬ್ರಿಡ್ಜ್ ಕಂ ಬ್ಯಾರೇಜ್ ಮುಳುಗಡೆ

KannadaprabhaNewsNetwork |  
Published : Aug 03, 2026, 02:15 AM IST
ಸವಣೂರು ತಾಲೂಕಿನ ದೇವಗಿರಿ-ಕಳಸೂರು ಗ್ರಾಮಗಳ ನಡುವೆ ಸಂಪರ್ಕ ಕಲ್ಪಿಸುವ ಬ್ರಿಡ್ಜ್ ಕಂ ಬ್ಯಾರೇಜ್ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಡೆಯಾಗಿರುವುದು. | Kannada Prabha

ಸಾರಾಂಶ

ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಜಿಲ್ಲೆಯ ಪ್ರಮುಖ ನದಿಗಳಲ್ಲಿ ನೀರಿನ ಹರಿವು ಹೆಚ್ಚಿದ್ದು, ವರದಾ, ತುಂಗಭದ್ರಾ ಹಾಗೂ ಧರ್ಮಾ ನದಿಗಳು ಉಕ್ಕಿ ಹರಿಯುತ್ತಿವೆ.

ಹಾವೇರಿ: ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಜಿಲ್ಲೆಯ ಪ್ರಮುಖ ನದಿಗಳಲ್ಲಿ ನೀರಿನ ಹರಿವು ಹೆಚ್ಚಿದ್ದು, ವರದಾ, ತುಂಗಭದ್ರಾ ಹಾಗೂ ಧರ್ಮಾ ನದಿಗಳು ಉಕ್ಕಿ ಹರಿಯುತ್ತಿವೆ. ಸವಣೂರು ತಾಲೂಕಿನ ದೇವಗಿರಿ-ಕಳಸೂರು ಗ್ರಾಮಗಳ ನಡುವೆ ಸಂಪರ್ಕ ಕಲ್ಪಿಸುವ ಬ್ರಿಡ್ಜ್ ಕಂ ಬ್ಯಾರೇಜ್ ಸಂಪೂರ್ಣವಾಗಿ ವರದಾ ನದಿ ನೀರಿನಲ್ಲಿ ಮುಳುಗಡೆಯಾಗಿದೆ. ಮೇಲ್ಭಾಗದ ಪ್ರದೇಶಗಳಿಂದ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ಮುಳುಗಡೆಗೊಂಡು ವಾಹನ ಸಂಚಾರ ಸ್ಥಗಿತಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ಆಡಳಿತವು ಸಾರ್ವಜನಿಕರು ಸೇತುವೆ ಮೇಲೆ ಸಂಚರಿಸದಂತೆ ಎಚ್ಚರಿಕೆ ನೀಡಿದೆ.ದೇವಗಿರಿ, ಕಳಸೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರು ಪ್ರತಿನಿತ್ಯ ಇದೇ ಮಾರ್ಗವನ್ನು ಬಳಸಿ ಶಾಲೆ, ಆಸ್ಪತ್ರೆ, ಮಾರುಕಟ್ಟೆ ಹಾಗೂ ವಿವಿಧ ಕೆಲಸಗಳಿಗೆ ತೆರಳುತ್ತಾರೆ. ಆದರೆ ಬ್ರಿಡ್ಜ್ ಕಂ ಬ್ಯಾರೇಜ್ ಮುಳುಗಡೆಯಾದ ಕಾರಣ ಜನರು ಪರ್ಯಾಯ ಮಾರ್ಗಗಳನ್ನು ಬಳಸಬೇಕಾದ ಅನಿವಾರ್ಯತೆ ಎದುರಾಗಿದೆ. ಇದರಿಂದ ಪ್ರಯಾಣದ ಸಮಯ ಹೆಚ್ಚಾಗಿದ್ದು, ವಿದ್ಯಾರ್ಥಿಗಳು, ರೈತರು ಮತ್ತು ವ್ಯಾಪಾರಸ್ಥರಿಗೆ ತೊಂದರೆ ಉಂಟಾಗಿದೆ.ಮಲೆನಾಡು ಭಾಗದಲ್ಲಿ ಮಳೆಯ ಪ್ರಮಾಣ ಮುಂದುವರಿದಿರುವುದರಿಂದ ಮುಂದಿನ ಕೆಲವು ದಿನಗಳವರೆಗೆ ನದಿಗಳಲ್ಲಿ ನೀರಿನ ಹರಿವು ಮತ್ತಷ್ಟು ಹೆಚ್ಚುವ ಸಾಧ್ಯತೆ ಇದ್ದು, ನದಿ ತೀರದ ಜಮೀನುಗಳ ರೈತರಲ್ಲಿ ಆತಂಕ ಮೂಡಿಸಿದೆ. ಸಂಬಂಧಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದ್ದು, ನೀರಿನ ಮಟ್ಟ ಇಳಿಯುವವರೆಗೆ ಯಾರೂ ಬ್ರಿಡ್ಜ್ ಕಂ ಬ್ಯಾರೇಜ್ ದಾಟುವ ಸಾಹಸ ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ. ವಿಶೇಷವಾಗಿ ಮಕ್ಕಳು ಹಾಗೂ ಯುವಕರು ಪ್ರವಾಹದ ನೀರಿನ ಬಳಿ ತೆರಳಿ ಸೆಲ್ಫಿ ತೆಗೆಯುವುದು ಅಥವಾ ಈಜಲು ಇಳಿಯುವ ಸಾಹಸಕ್ಕೆ ಮುಂದಾಗಬಾರದು ಎಂದು ಸೂಚಿಸಲಾಗಿದೆ.ಸೇತುವೆ ನಿರ್ಮಾಣಕ್ಕೆ ಆಗ್ರಹ: ಇತ್ತೀಚಿನ ವರ್ಷಗಳಲ್ಲಿ ಮಳೆಗಾಲದ ಸಂದರ್ಭದಲ್ಲಿ ದೇವಗಿರಿ-ಕಳಸೂರು ನಡುವಿನ ಬ್ರಿಡ್ಜ್ ಕಂ ಬ್ಯಾರೇಜ್ ಮುಳುಗಡೆಯಾಗುವುದು ಸಾಮಾನ್ಯ ಸಂಗತಿಯಾಗಿದ್ದರೂ, ಪ್ರತಿಬಾರಿಯೂ ಸಂಪರ್ಕ ಕಡಿತಗೊಂಡು ಜನಜೀವನ ಅಸ್ತವ್ಯಸ್ತವಾಗುತ್ತದೆ. ಇದರಿಂದ ಗ್ರಾಮಸ್ಥರು ಈ ಭಾಗದಲ್ಲಿ ವರ್ಷಪೂರ್ತಿ ಸುಗಮ ಸಂಚಾರಕ್ಕೆ ಅನುಕೂಲವಾಗುವ ಎತ್ತರದ ಸೇತುವೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುರುಗೋಡು ತಾಲೂಕಿನಲ್ಲಿ ತೀವ್ರ ಬರ
ಕಲಾ ತರಬೇತಿಯಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ: ಶಿಕಾರಿ ರಾಮು