ಕನ್ನಡಪ್ರಭ ವಾರ್ತೆ ಮಡಿಕೇರಿ
ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ, ಮಲ್ಟಿ ಆಕ್ಸಿಲ್ ಟ್ರಕ್‍ಗಳ ಸಂಚಾರ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್), ಆರ್ಟಿಕ್ಯೂಲೇಟೆಡ್ ವಾಹನಗಳು ಮತ್ತು ಮರಳು ಸಾಗಾಣಿಕೆ, ಮರದ ದಿಮ್ಮಿಗಳನ್ನು ಸಾಗಿಸುವ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ನಿರ್ಬಂಧಿಸಲಾಗಿದೆ.
ಕರ್ನಾಟಕ ಪೊಲೀಸ್ ಕಾಯ್ದೆ 1961 ರ ವಿಧಿ 11 ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಆಕ್ಟ್ 2005ರ ಕಲಂ 33, ಮೋಟಾರು ವಾಹನಗಳ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989 ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221-ಎ(5) ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಸ್ಥಳೀಯರು ವಾಹನ ಸವಾರರ ಹಾಗೂ ಸಾರ್ವಜನಿಕರ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ಜು.1 ರಿಂದ ಜು.30ರ ವರೆಗೆ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ವೆಂಕಟ್ ರಾಜಾ ಆದೇಶಿಸಿದ್ದಾರೆ.ನಿರ್ಬಂಧಿತ ವಾಹನಗಳು: ಎಲ್ಲ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು, ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಣೆ ಮಾಡುವ ಸರಕು ಸಾಗಾಣಿಕೆ ವಾಹನಗಳು, ಭಾರಿ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳು/ ಆರ್ಟಿಕ್ಯೂಲೇಟೆಡ್ ವಾಹನಗಳು.
ಕೊಡಗು ಜಿಲ್ಲೆಯ ಮುಖಾಂತರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275 ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‍ಪೋಸ್ಟ್ ನಿರ್ಮಿಸಿ, ದಿನದ 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿ ನಿಯೋಜಿಸಲು, ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಪೊಲೀಸ್ ಹಾಗೂ ಸಾರಿಗೆ ಇಲಾಖೆಗೆ ಸೂಚಿಸಿದೆ ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.