ಮುಕ್ತ, ನ್ಯಾಯ ಸಮ್ಮತ ಚುನಾವಣೆಗೆ ಸಹಕರಿಸಿ : ಡಿಸಿ ಡಾ. ಸುಶೀಲಾ

KannadaprabhaNewsNetwork |  
Published : Apr 09, 2024, 12:50 AM IST
 ಶಹಾಪುರ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತರ ಅಧ್ಯಯನ ಕೇಂದ್ರದಲ್ಲಿ ನಡೆದ ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿಗಳ ತರಬೇತಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ. ಸುಶೀಲಾ ಭೇಟಿ ನೀಡಿ ತರಬೇತಿ ವೀಕ್ಷಿಸಿದರು. | Kannada Prabha

ಸಾರಾಂಶ

ಲೋಕಸಭಾ ಚುನಾವಣೆಯನ್ನು ಅತ್ಯಂತ ಶಿಸ್ತುಬದ್ಧವಾಗಿ, ನ್ಯಾಯ ಸಮ್ಮತ ಮತ್ತು ಮುಕ್ತವಾಗಿ ನಡೆಸಿಕೊಂಡು ಹೋಗುವಲ್ಲಿ ಚುನಾವಣೆಗೆ ನಿಯೋಜನೆಗೊಂಡಿರುವ ಅಧಿಕಾರಿಗಳ ಪಾತ್ರ ಮುಖ್ಯವಾಗಿದೆ

ಕನ್ನಡಪ್ರಭ ವಾರ್ತೆ ಶಹಾಪುರ

ಲೋಕಸಭಾ ಚುನಾವಣೆಯನ್ನು ಅತ್ಯಂತ ಶಿಸ್ತುಬದ್ಧವಾಗಿ, ನ್ಯಾಯ ಸಮ್ಮತ ಮತ್ತು ಮುಕ್ತವಾಗಿ ನಡೆಸಿಕೊಂಡು ಹೋಗುವಲ್ಲಿ ಚುನಾವಣೆಗೆ ನಿಯೋಜನೆಗೊಂಡಿರುವ ಅಧಿಕಾರಿಗಳ ಪಾತ್ರ ಮುಖ್ಯವಾಗಿದೆ. ಹೀಗಾಗಿ ಅತ್ಯಂತ ಜಾಗರುಕತೆಯಿಂದ ಚುನಾವಣೆಯ ಕಾರ್ಯವನ್ನು ನಿರ್ವಹಿಸಿಕೊಂಡು ಹೋಗಬೇಕು ಎಂದು ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಅವರು ಮತಗಟ್ಟೆ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿರುವ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆದ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.

ತರಬೇತಿ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆವರೆಗೆ ನಡೆಯಿತು. ಶಹಾಪುರ ವಿಧಾನ ಸಭಾ ಮತಕ್ಷೇತ್ರದ 265 ಮತ ಕೇಂದ್ರಗಳ 383 ಮತಗಟ್ಟೆ ಅಧಿಕಾರಿಗಳು, 387 ಸಹಾಯಕ ಮತಗಟ್ಟೆ ಅಧಿಕಾರಿಗಳು ಹಾಗೂ ಹೆಚ್ಚುವರಿಯಾಗಿ 10 ಜನ ಮತಗಟ್ಟೆ ಅಧಿಕಾರಿ,10 ಜನ ವಿಕಲಚೇತನರು ಸೇರಿ ಈ ತರಬೇತಿಯಲ್ಲಿ 790 ಮಂದಿ ಪಾಲ್ಗೊಂಡಿದ್ದರು ಎಂದು ಅವರು ಮಾಹಿತಿ ನೀಡಿದರು.

ಮೇ 7ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾಗಿ ನಡೆಸಲು ಶಹಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಸೋಮವಾರ ಪ್ರಥಮ ಹಂತದ ತರಬೇತಿ ನೀಡಲಾಯಿತು.

ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ 14 ಕೊಠಡಿಗಳಲ್ಲಿ ತರಬೇತಿ ನೀಡಲಾಗಿದೆ. ಈ ತರಬೇತಿ ದಾರರಿಗೆ 14 ಜನ ಮಾಸ್ಟರ್ ಟ್ರೈನರ್ ಅಧಿಕಾರಿಗಳು ತರಬೇತಿ ನೀಡಿದ್ದಾರೆ. ಇದು ವೇಳೆ ತರಬೇತಿದಾರರಿಗೆ 20 ಜನ ಸೆಕ್ಟರ್ ಅಧಿಕಾರಿಗಳ ಪರಿಚಯಿಸಿಕೊಡಲಾಯಿತು.

ಮತದಾನ ನಡೆಯುವ ವೇಳೆ ಮತದಾರರಿಗೆ ಯಾವುದೇ ಅಡತಡೆಯಾಗದಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಂತೆ ಪೂರ್ವಭಾವಿಯಾಗಿ ಎರಡು ಹಂತದ ತರಬೇತಿ ನೀಡಲಾಗುವುದು. ಮೊದಲ ಹಂತದಲ್ಲಿ ಪಾಲ್ಗೊಂಡಿರುವ ಅಧಿಕಾರಿಗಳು ಮತಯಂತ್ರಗಳ ಮಾದರಿ, ಬಳಕೆ ಮಾಡುವ ವಿಧಾನ ಕುರಿತು ನುರಿತ ತಜ್ಞರಿಂದ ತರಬೇತಿ ಪಡೆದು ಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ತರಬೇತಿ ಕೇಂದ್ರದಲ್ಲಿ ಆರೋಗ್ಯ ಮತ್ತು ಊಟದ ವ್ಯವಸ್ಥೆ. ತರಬೇತಿಗೆ ಹಾಜರಾಗುವ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ಹಾಗೂ ಊಟದ ವ್ಯವಸ್ಥೆ ಮತ್ತು ನೀರಿನ ವ್ಯವಸ್ಥೆ ಮಾಡಲಾಗಿತ್ತು.

ತಹಸೀಲ್ದಾರ್ ಉಮಾಕಾಂತ ಹಳ್ಳೆ, ಚುನಾವಣೆ ಎಂ.ಸಿ.ಸಿ. ಟೀಮ್ ನೋಡಲ್ ಅಧಿಕಾರಿ ಹಾಗೂ ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ್ ಕುಮಾರ್, ಪೋಸ್ಟಲ್ ಬ್ಯಾಲೆಟ್ ಪೇಪರ್ ನೋಡಲ್ ಅಧಿಕಾರಿ ಹಣಮಂತರಾಯ ಸೋಮಪುರ, ಚಂದ್ರಕಾಂತ್ ಮೈತ್ರಿ, ವೆಂಕಟೇಶ್ ಸೇರಿದಂತೆ ಇತರರಿದ್ದರು.ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಪಾರದರ್ಶಕವಾಗಿ ಹಾಗೂ ನಿಷ್ಪಕ್ಷಪಾತವಾಗಿ ನಡೆಸಲು ಜಿಲ್ಲಾಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಸಕಲಸಿದ್ಧತೆ ಮಾಡಿಕೊಳ್ಳಲಾಗಿದೆ. ಮತದಾನ ಹೆಚ್ಚಾಗುವಂತೆ ಸಾರ್ವಜನಿಕರು ಸಹಕಾರ ನೀಡಬೇಕು.:

- ಲಕ್ಷ್ಮಣ ಶೃಂಗೇರಿ, ಸಹಾಯಕ ಚುನಾವಣಾ ಅಧಿಕಾರಿ, ಶಹಾಪುರ ವಿಧಾನಸಭಾ ಮತಕ್ಷೇತ್ರ.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ