ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದ ಶ್ರೀಸೌಮ್ಯಕೇಶವಸ್ವಾಮಿ ದೇವಸ್ಥಾನದ ಆವರಣದಲ್ಲಿ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ನಾಗಮಂಗಲ ಪುರಸಭೆ ಕಚೇರಿಯ ಸಹಭಾಗಿತ್ವದಲ್ಲಿ ಭಾನುವಾರ ಆಯೋಜಿಸಿದ್ದ 10ನೇ ಸ್ವಚ್ಛ ಸರ್ವೇಕ್ಷಣ್ ಜನಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.
ಕೇಂದ್ರ ಸರ್ಕಾರದ ಸ್ವಚ್ಛ ಸರ್ವೇಕ್ಷಣ್ ಕಾರ್ಯಕ್ರಮವನ್ನು ಪೂರ್ಣ ಪ್ರಮಾಣದಲ್ಲಿ ಸಾಕಾರಗೊಳಿಸುವ ನಿಟ್ಟಿನಲ್ಲಿ ಇಲ್ಲಿನ ಪುರಸಭೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಟೊಂಕಕಟ್ಟಿ ನಿಂತು ಹಗಲಿರುಳು ಶ್ರಮಿಸುತ್ತಿದ್ದಾರೆ. ಪುರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಲ್ಲಿಯೂ ಸ್ವಚ್ಛತೆಗೆ ಆದ್ಯತೆ ಕೊಟ್ಟು ಪಟ್ಟಣ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಪ್ಲಾಸ್ಟಿಕ್ ಸೇರಿದಂತೆ ತ್ಯಾಜ್ಯ ವಸ್ತುಗಳನ್ನು ಬಿಸಾಡದಂತೆ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.ಸಾರ್ವಜನಿಕ ಆರೋಗ್ಯ ಸುರಕ್ಷತೆ ಮತ್ತು ಪರಿಸರ ನೈರ್ಮಲ್ಯ ಕಾಪಾಡುವ ದೃಷ್ಟಿಯಿಂದ ಪಟ್ಟಣ ವ್ಯಾಪ್ತಿಯ ಎಲ್ಲ ಅಂಗಡಿ ಮುಂಗಟ್ಟುಗಳಲ್ಲಿ ಸಂಗ್ರಹವಾಗುವ ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸಿ ಪ್ರತಿನಿತ್ಯ ಆಯಾ ವಾರ್ಡ್‌ಗಳಲ್ಲಿ ಸಂಚರಿಸುವ ಪುರಸಭೆಯ ವಾಹನಕ್ಕೆ ನೀಡುವುದನ್ನು ರೂಢಿಸಿಕೊಳ್ಳಬೇಕು ಎಂದರು.
ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀಸೌಮ್ಯಕೇಶವಸ್ವಾಮಿ ದೇವಸ್ಥಾನದ ಪ್ರಾಂಗಣ ಸೇರಿದಂತೆ ಹಲವು ಅಭಿವೃದ್ಧಿಗಾಗಿ ಪುರಾತತ್ವ ಇಲಾಖೆಯಿಂದ 1 ಕೋಟಿ ರು. ಅನುದಾನ ಬಿಡುಗಡೆಯಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭಗೊಳ್ಳಲಿದೆ. ಅಲ್ಲದೇ, ಪ್ರತಿ ವರ್ಷ ನಡೆಯುವ ಶ್ರೀಸೌಮ್ಯಕೇಶವಸ್ವಾಮಿ ಬ್ರಹ್ಮರಥೋತ್ಸವದ ನೂತನ ರಥ ಸಿದ್ಧಪಡಿಸಲು ೮೦ ಲಕ್ಷ ರು.ಗಳ ಅಂದಾಜು ವೆಚ್ಚದ ಪೈಕಿ ರಾಜ್ಯ ಸರ್ಕಾರ ಈಗಾಗಲೇ 38 ಲಕ್ಷ ರು. ಹಣ ಬಿಡುಗಡೆ ಮಾಡಿದೆ. ಇನ್ನುಳಿದ 42 ಲಕ್ಷ ಹಣವನ್ನು ತಕ್ಷಣ ಬಿಡುಗಡೆ ಮಾಡಿಸಲಾಗುವುದು. ಮುಂದಿನ ಒಂದು ವರ್ಷದೊಳಗೆ ಹೊಸ ರಥ ಚಾಲನೆಗೆ ಸಿದ್ದಗೊಳ್ಳಲಿದೆ ಎಂದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಜಿ.ಆದರ್ಶ, ಪುರಸಭೆ ಮುಖ್ಯಾಧಿಕಾರಿ ವೀಣಾ, ತಾಪಂ ಇಒ ಸತೀಶ್, ಡಿವೈಎಸ್‌ಪಿ ಬಿ.ಚಲುವರಾಜು, ಪಟ್ಟಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಿವಕುಮಾರ್, ಸಿಪಿಐ ಹೇಮಂತ್‌ಕುಮಾರ್, ಸಿಡಿಪಿಒ ಕೃಷ್ಣಮೂರ್ತಿ, ಹಿರಿಯ ಆರೋಗ್ಯ ನಿರೀಕ್ಷಕ ವೆಂಕಟೇಶ್, ನಿಂಗೇಗೌಡ, ಸಿಬ್ಬಂದಿ ಕುಸುಮ, ಆಶಾ, ಬಿ.ಎಂ.ಜವರೇಗೌಡ ಸೇರಿದಂತೆ ಹಲವರು ಇದ್ದರು.