ಹೈ ಅಲರ್ಟ್ ಘೋಷಣೆ : ಕೆಆರ್‌ಎಸ್ ಜಲಾಶಯಕ್ಕೆ ಹೆಚ್ಚಿನ ಭದ್ರತೆ

KannadaprabhaNewsNetwork |  
Published : May 09, 2025, 12:48 AM ISTUpdated : May 09, 2025, 03:48 AM IST
8ಕೆಎಂಎನ್ ಡಿ20  | Kannada Prabha

ಸಾರಾಂಶ

ಭಾರತೀಯ ಸೇನೆ ಪಾಕಿಸ್ತಾನದ ಭಯೋತ್ಪಾದನ ಕೇಂದ್ರಗಳ ಮೇಲೆ ದಾಳಿ ನಡೆಸಿದ ಬಳಿಕ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆಯಾಗಿದ್ದು, ಅದರಂತೆ ವಿಶ್ವ ವಿಖ್ಯಾತ ಕೆಆರ್‌ಎಸ್ ಜಲಾಶಯಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. 

 ಶ್ರೀರಂಗಪಟ್ಟಣ : ಭಾರತೀಯ ಸೇನೆ ಪಾಕಿಸ್ತಾನದ ಭಯೋತ್ಪಾದನ ಕೇಂದ್ರಗಳ ಮೇಲೆ ದಾಳಿ ನಡೆಸಿದ ಬಳಿಕ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆಯಾಗಿದ್ದು, ಅದರಂತೆ ವಿಶ್ವ ವಿಖ್ಯಾತ ಕೆಆರ್‌ಎಸ್ ಜಲಾಶಯಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಕೆಆರ್‌ಎಸ್‌ನ ಕೈಗಾರಿಕಾ ಭದ್ರತಾ ಸಿಬ್ಬಂದಿಯನ್ನು ಅಣೆಕಟ್ಟೆ ಹಾಗೂ ಹಿನ್ನೀರಿನ ಬಳಿ ನಿಯೋಜಿಸಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕಟ್ಟೆಚ್ಚರ ವಹಿಸಲಾಗಿದೆ. ಜೊತೆಗೆ ಅನುಮಾನಾಸ್ಪದ ಸ್ಥಳಗಳು, ವಾಹನಗಳ ಮೇಲೆ ಹೆಚ್ಚಿನ ನಿಗಾವಹಿಸಿ ಗಸ್ತು ತಿರುಗುವ ಮೂಲಕ ಅಣೆಕಟ್ಟೆ ಭದ್ರತೆಗೆ ಮುಂದಾಗಿದ್ದಾರೆ.

ಪ್ರಸ್ತುತ ಸನ್ನಿವೇಶದಲ್ಲಿ ರಾಜ್ಯದ ಎಲ್ಲಾ ಅಣೆಕಟ್ಟುಗಳಿಗೆ ಬಿಗಿ ಭದ್ರತೆ ಒದಗಿಸಲು ಸರ್ಕಾರ ತುರ್ತು ಆದೇಶ ಹೊರಡಿಸಿದೆ. ಸರ್ಕಾರದ ಸೂಚನೆ ಮೇರೆಗೆ ಕೆಆರ್‌ಎಸ್ ಜಲಾಶಯಕ್ಕೆ ಹೆಚ್ಚಿನ ಭದ್ರತೆ ಒದಗಿಸಲು ನೀರಾವರಿ ಇಲಾಖೆ ಮುಂದಾಗಿದೆ ಎಂದು ತಿಳಿದು ಬಂದಿದೆ.

ಕೆಆರ್‌ಎಸ್ ಬೃಂದಾವನದ ವೀಕ್ಷಣೆಗೆ ಬರುವ ಪ್ರವಾಸಿಗರ ಮೇಲೂ ಪೊಲೀಸರು ತೀವ್ರ ನಿಗಾ ವಹಿಸಿದ್ದು, ಪ್ರವಾಸಿಗರ ಬ್ಯಾಗ್ ಸಹಿತ ಎಲ್ಲಾ ವಸ್ತುಗಳನ್ನು ಪರೀಕ್ಷಿಸಿ ಒಳಗೆ ಕಳುಸಲಾಗುತ್ತಿದೆ. ಕೆಲ ದಿನಗಳವರೆಗೆ ಕೆಆರ್‌ಎಸ್ ಬೃಂದಾವನಕ್ಕೆ ಪ್ರವಾಸಿಗರ ಪ್ರವೇಶವನ್ನು ನಿರ್ಭಂಧಿಸಲು ಸರ್ಕಾರ ಚಿಂತನೆ ನಡೆಸುತ್ತಿರುವುದಾಗಿ ಮಾಹಿತಿ ಲಭ್ಯವಾಗಿದೆ. ಮುಂದಿನ ಬೆಳವಣಿಗೆಗಳ ಮೇಲೆ ರಾಜ್ಯದ ಸ್ಪಷ್ಟ ತೀರ್ಮಾನ ಹೊರ ಬೀಳಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಕೆಆರ್‌ಎಸ್ ಜಲಾಶಯಕ್ಕೆ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಕೈಗಾರಿಕಾ ಭದ್ರತಾ ಸಿಬ್ಬಂದಿಯನ್ನೇ ಬಳಸಿಕೊಳ್ಳಲಾಗಿದೆ. 

ಹಗಲು-ರಾತ್ರಿ ಪಾಳಯಗಳಲ್ಲಿ ದಿನದ 24 ಗಂಟೆಯೂ ಸಹ ಅಣೆಕಟ್ಟೆ ಭದ್ರತೆಗೆ ನಿಯೋಜಿಸಲಾಗಿದೆ. ಸೂಕ್ಷ್ಮ ಪರಿಸ್ಥಿತಿಯಿಂದಾಗಿ ಯಾವುದೇ ಸಿಬ್ಬಂದಿಗೆ ರಜೆ ನೀಡದೆ ಎಲ್ಲರೂ ಕಾರ್ಯಪ್ರವೃತ್ತರಾಗಿ ಕೆಸಲ ಮಾಡಲು ಆದೇಶಿಸಲಾಗಿದೆ. ಅನುಮಾನ ಬಂದ ವ್ಯಕ್ತಿಗಳ ಮೇಲೆ ಹೆಚ್ಚಿನ ನಿಗಾ ವಹಿಸುವಂತೆ ಜೊತೆಗೆ ಸ್ಥಳೀಯ ಪೊಲೀಸರ ಸಹಾಯ ಪಡೆಯಲಾಗಿದೆ.

- ಪ್ರಮೋದ್, ಡೆಪ್ಯೂಟಿ ಕಮಾಂಡೆಡ್ ಕೈಗಾರಿಕಾ ಭದ್ರತಾ ಪಡೆ ಕೆಆರ್‌ಎಸ್

ಕೇಂದ್ರದ ಸೂಚನೆಯಂತೆ ರಾಜ್ಯಾದ್ಯಂತ ಹೈ ಅಲರ್ಟ್: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಹೇಳಿದರು.

ಮಂಡ್ಯ ಜಿಲ್ಲಾ ಪ್ರವಾಸದ ಹಿನ್ನೆಲೆಯಲ್ಲಿ ಬೆಂಗಳೂರಿಂದ ತಾಲೂಕಿನ ಗೆಜ್ಜೆಲಗೆರೆ ಗ್ರಾಮದ ಸಮೀಪದ ಹೆಲಿಪ್ಯಾಡ್ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಭಾರತೀಯ ಸೇನೆ ಆಪರೇಷನ್ ಸಿಂದೂರ ಕಾರ್ಯಾಚರಣೆ ನಡೆಸುವ ಮೂಲಕ ಭಯೋತ್ಪಾದಕರ ಅಡಗು ತಾಣಗಳನ್ನು ಧ್ವಂಸಗೊಳಿಸಿದೆ ಎಂದರು.

ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ಜಲಾಶಯಗಳು, ರೈಲು ನಿಲ್ದಾಣ ಸೇರಿದಂತೆ ಆಯಾ ಕಟ್ಟಿನ ಸ್ಥಳಗಳಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಜೊತೆಗೆ ರಾಜ್ಯಾದ್ಯಂತ ಇರುವ ಪಾಕಿಸ್ತಾನಿ ಪ್ರಜೆಗಳನ್ನು ಗಡಿಪಾರು ಮಾಡಲಾಗುತ್ತಿದೆ. ಕೆಲವರು ಮೈಸೂರಿನ ನ್ಯಾಯಾಲಯದ ಮರೆ ಹೋಗಿದ್ದಾರೆ. ರಾಜ್ಯದಲ್ಲಿ ಎಷ್ಟು ಜನರಿದ್ದಾರೆ ಎನ್ನುವ ಬಗ್ಗೆ ಇಲ್ಲಿಯವರೆಗೆ ಮಾಹಿತಿ ಇಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.

ನಮ್ಮ ದೇಶದ ಸೈನಿಕರ ಕ್ಷೇಮ ಮತ್ತು ಮುಂದೆ ನಡೆಯುವ ಯುದ್ಧದಲ್ಲಿ ಭಾರತೀಯ ಸೈನಿಕರಿಗೆ ಯಾವುದೇ ಪ್ರಾಣಾಪಾಯ ಆಗದೆ ಗೆಲುವು ಸಿಗಲಿ ಎಂದು ರಾಜ್ಯ ಸರ್ಕಾರದಿಂದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಸಂಕಲ್ಪದೊಂದಿಗೆ ಪೂಜೆ ನಡೆಸಲು ಆದೇಶ ಮಾಡಲಾಗಿದೆ ಎಂದರು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕರಾದ ಕೆ.ಎಂ.ಉದಯ್, ನರೇಂದ್ರ ಸ್ವಾಮಿ, ರಮೇಶ ಬಂಡಿಸಿದ್ದೇಗೌಡ ಮತ್ತಿತರರು ಇದ್ದರು.

PREV

Recommended Stories

ವಿಶ್ವಾದ್ಯಂತ ಒಂದೇ ದಿನ ಕಾಂತಾರ ಚಾಪ್ಟರ್ 1 ಬಿಡುಗಡೆ
ಈರುಳ್ಳಿ, ಹೂ, ಪಚ್ಚ ಬಾಳೆ ಬೆಲೆ ಧರೆಗೆ!