-ಕೃಷ್ಣಾ, ಭೀಮಾ ನದಿ ವ್ಯಾಪ್ತಿಯಲ್ಲಿ ಪ್ರವಾಹ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಡಿಸಿ ಸಭೆ
------ಕನ್ನಡಪ್ರಭ ವಾರ್ತೆ ಯಾದಗಿರಿ
ಭೀಮಾ ಹಾಗೂ ಕೃಷ್ಣಾ ನದಿ ಸೇರಿದಂತೆ ಜಲಾಶಯಗಳ ವ್ಯಾಪ್ತಿಯಲ್ಲಿ ಯಾವುದೇ ಪರಿಸ್ಥಿತಿಯಲ್ಲಿ ಮಾನವ ಜೀವಹಾನಿಯಾಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಡಾ. ಸುಶೀಲಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಕೃಷ್ಣಾ ಹಾಗೂ ಭೀಮಾ ನದಿ ವ್ಯಾಪ್ತಿಯಲ್ಲಿ ಪ್ರವಾಹ ಮುನ್ನೆಚ್ಚರಿಕೆ ಕ್ರಮಗಳ ಕುರಿತು ನಡೆಸಿದ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.ಕೃಷ್ಣಾ ಹಾಗೂ ಭೀಮಾ ನದಿ ತೀರದಲ್ಲಿ ಯಾರು ಹೋಗದಂತೆ ನಿಗಾ ವಹಿಸಬೇಕು, ನದಿಗಳ ಪಾತ್ರದಲ್ಲಿ, ಜಲಾಶಯ ವ್ಯಾಪ್ತಿಯಲ್ಲಿ ನೀರು ಕುಡಿಯಲು ಹೋಗುವುದಾಗಲಿ, ಈಜಲು, ಬಟ್ಟೆ ತೊಳೆಯಲು, ದನಕರುಗಳ ಮೇಯಿಸಲು ಹೋಗದಂತೆ ಬೋರ್ಡ್ ಹಾಕಿಸಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಬೇಕು. ಆಯಾ ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ನೋಟಿಸ್ ಬೋರ್ಡ್ ಮೂಲಕ ಮಾಹಿತಿ ನೀಡಬೇಕು. ನದಿ ಪಾತ್ರದ ಗ್ರಾಮಗಳಲ್ಲಿ ಡಂಗುರ ಸಾರಿ ತಿಳಿ ಹೇಳಬೇಕು ಎಂದು ಸೂಚಿಸಿದರು.
ಇತ್ತೀಚೆಗೆ ಮಾಚನೂರ ಗ್ರಾಮದ ಇಬ್ಬರು ಯುವಕರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ನೋಡಲ್ ಅಧಿಕಾರಿಗಳು, ಆಯಾ ತಹಸೀಲ್ದಾರರು, ಪೋಲಿಸ್ ಅಧಿಕಾರಿ ಸಿಬ್ಬಂದಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಪಿಡಿಓ, ಗ್ರಾಮ ಪಂಚಾಯತ್ ಸಿಬ್ಬಂದಿ ಹಾಗೂ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು.ಯಾವುದೇ ಸಂದರ್ಭದಲ್ಲಿ ಮಾನವ, ಜಾನುವಾರು ಜೀವಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅವರು ಸೂಚಿಸಿದರು.ನದಿಗಳ ನೀರು ಏರಿಕೆ ಬಗ್ಗೆ ನಿಗಾ ಇಡುವ ಜೊತೆಗೆ ಜಾಗೃತಿ ಸಹ ಮೂಡಿಸಬೇಕು. ಆಯಾ ಗ್ರಾಮಗಳ ವ್ಯಾಪ್ತಿಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ವಾಟ್ಸ್ ಆ್ಯಪ್ ಗ್ರೂಪ್ ರಚಿಸಿಕೊಂಡು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ನಿಗಾ ಇಡಬೇಕು. ಪ್ರವಾಹ ಪರಿಸ್ಥಿತಿ ಬಗ್ಗೆ ನಿರಂತರ ನಿಗಾ ಇಡಬೇಕು. ನೋಡಲ್ ಅಧಿಕಾರಿಗಳು ಕಾಲಕಾಲಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಭಾಯಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಕುಡಿಯಲು ಅಶುದ್ಧ ನೀರು ಪೂರೈಕೆಯಾಗದಂತೆ ನಿಗಾವಹಿಸಬೇಕು. ಕುಡಿಯುವ ನೀರು ದುರಸ್ತಿಯಿರುವ ಪೈಪ್‌ಲೈನ್‌ಗಳನ್ನು ತಕ್ಷಣ ದುರಸ್ತಿಗೊಳಿಸಬೇಕು. ರೈತರಿಗೆ ಬೀಜ, ರಸಗೊಬ್ಬರದ ಕೊರತೆಯಾಗದಂತೆ ಈಗಿನಿಂದಲೇ ಮುನ್ನೆಚ್ಚರಿಕೆ ವಹಿಸಬೇಕು. ಈವರೆಗೆ ಬೋರ್ವೆಲ್ ಮೂಲಕ ನೀರು ಪೂರೈಕೆ ಕುರಿತ ವರದಿ ಸಲ್ಲಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.ಜಿಪಂ ಸಿಇಒ ಲವೀಶ್ ಒರಡಿಯಾ ಅವರು ಜಿಲ್ಲೆಯಲ್ಲಿ ಓವರ್ ಹೆಡ್ ಟ್ಯಾಂಕ್,ಒಳಚರಂಡಿಗಳ ಸ್ವಚ್ಛತೆ ಸೇರಿದಂತೆ ಇನ್ನಿತರ ಮುನ್ನೆಚ್ಚರಿಕಾ ಕ್ರಮಗಳಿಗಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಕೈಗೊಂಡ ಕ್ರಮಗಳ ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಅಪರ ಜಿಲ್ಲಾಧಿಕಾರಿ ರಮೇಶ ಕೋಲಾರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
-2ವೈಡಿಆರ್3 : ಭೀಮಾ ಹಾಗೂ ಕೃಷ್ಣಾ ನದಿ ಸೇರಿದಂತೆ ಜಲಾಶಯಗಳ ವ್ಯಾಪ್ತಿಯಲ್ಲಿ ಯಾವುದೇ ಪರಿಸ್ಥಿತಿಯಲ್ಲಿ ಮಾನವ ಜೀವಹಾನಿಯಾಗದಂತೆ ಎಚ್ಚರಿಕೆ ವಹಿಸುವಂತೆ ಯಾದಗಿರಿ ಜಿಲ್ಲಾಧಿಕಾರಿ ಡಾ. ಸುಶೀಲಾ ಸಂಬಂಧಿಸಿದ ಅಧಿಕಾರಿಗಳ ಸಭೆ ನಡೆಸಿದರು.