ಕಾಳಜಿ ಕೇಂದ್ರಗಳಿಗೆ ಜನರನ್ನು ಶಿಫ್ಟ್ ಮಾಡಬೇಕು । ಅಂಗನವಾಡಿ ಶಾಲೆಗಳ ಕಟ್ಟಡಗಳ ಗುಣಮಟ್ಟ ಪರಿಶೀಲಿಸಬೇಕು । ಜಿಪಂನಲ್ಲಿ ಪ್ರಗತಿ ಪರಿಶೀಲನಾ ಸಭೆ
ಮುಂದಿನ ಎರಡು ತಿಂಗಳು ಭಾರೀ ಮಳೆಯಾಗುವ ಸಾಧ್ಯತೆ ಇದ್ದರಿಂದ ಈಗಿನಿಂದಲೇ ಮುಂಜಾಗ್ರತಾ ಕ್ರಮಗಳನ್ನು ತೆಗೆದು ಕೊಳ್ಳಬೇಕು. ಎಲ್ಲಾ ಅಧಿಕಾರಿಗಳು ಹೈ ಅಲರ್ಟ್ ಆಗಿರಬೇಕು ಎಂದು ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದರು.
ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಗುರುವಾರ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪದೇ ಪದೇ ಭೂ ಕುಸಿತ ಉಂಟಾಗುವ ಪ್ರದೇಶದಲ್ಲಿ ವಾಸವಾಗಿರುವ ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಬೇಕು. ಅಂಗನವಾಡಿ ಹಾಗೂ ಸರ್ಕಾರಿ ಶಾಲೆಗಳ ಕಟ್ಟಡಗಳ ಫಿಟ್‌ನೆಸ್ ಪರಿಶೀಲನೆ ನಡೆಸಬೇಕು ಎಂದರು.ಮುಂಗಾರು ಮಳೆ ಸಂದರ್ಭದಲ್ಲಿ ಪ್ರಕೃತಿ ವಿಕೋಪ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ತೆಗೆದುಕೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಮೀನಾ ನಾಗರಾಜ್, ಪ್ರತಿ ವರ್ಷ ಮಳೆಗಾಲದ ಸಂದರ್ಭ ದಲ್ಲಿ ಭೂ ಕುಸಿತ ಉಂಟಾಗುವ ಸ್ಥಳಗಳಿಗೆ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್‌ಐ) ತಂಡ ಭೇಟಿ ನೀಡಿತ್ತು. ಇದರ ಜತೆಗೆ ಹೊಸದಾಗಿ ಕೆಲವೆಡೆ ಭೂ ಕುಸಿತ ಉಂಟಾಗಿದೆ. ಅಂತಹ ಪ್ರದೇಶಗಳನ್ನು ಗುರುತು ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ, ಪಂಚಾಯತ್ ಇಲಾಖೆಗೆ ಒಳಪಡುವ ರಸ್ತೆ ಹಾಗೂ ಸಂಪರ್ಕ ರಸ್ತೆಗಳ ಮಾಹಿತಿ ಕ್ರೋಡಿಕರಿಸಿ ಮೊದಲ ಆದ್ಯತೆ ಮೇಲೆ ರಾಷ್ಟ್ರೀಯ ಹೆದ್ದಾರಿ ರಸ್ತೆಗಳಲ್ಲಿ ಭೂ ಕುಸಿತ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ವಿವರಿಸಿದರು.
ವಿಪತ್ತು ನಿರ್ವಹಣೆಗೆ ಕೊಡುತ್ತಿರುವ ಹಣವನ್ನು ಅದೇ ವರ್ಷದಲ್ಲೇ ಬಳಕೆ ಮಾಡಬೇಕು. ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ (ಎಸ್‌ಡಿಆರ್‌ಎಫ್) ನಿಯಮ ಕಡ್ಡಾಯವಾಗಿ ಪಾಲನೆ ಮಾಡಬೇಕು. ರಸ್ತೆಗಳ ಗುಂಡಿ ಮುಚ್ಚಲು ಕೊಟ್ಟ ಹಣ ಅದೇ ಉದ್ದೇಶಕ್ಕೆ ಬಳಕೆ ಮಾಡಬೇಕು ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಪೋಡಿಗೆ ಹಿನ್ನಡೆ:
ತರೀಕೆರೆ ಶಾಸಕ ಶ್ರೀನಿವಾಸ್ ಮಾತನಾಡಿ, ಸರ್ಕಾರದಿಂದ ಮಂಜೂರಾದ ಜಮೀನು ಹಲವು ಮಂದಿ ಸಾಗುವಳಿ ಮಾಡುತ್ತಿಲ್ಲ ಎಂತಹ ಜಮೀನುಗಳನ್ನು ಪತ್ತೆ ಹಚ್ಚಿ ಸಾರ್ವಜನಿಕ ಉದ್ದೇಶಕ್ಕೆ ಬಳಕೆ ಮಾಡಲು ಮೀಸಲಿಡಬೇಕೆಂದು ಹೇಳಿದಾಗ ಸಚಿವರು ಒಪ್ಪಿಗೆ ಸೂಚಿಸಿದರು.
ಹಲವು ವರ್ಷಗಳ ಹಿಂದೆ ಸರ್ಕಾರ ಭೂಹೀನರಿಗೆ ಜಮೀನು ಮಂಜೂರು ಮಾಡಿದೆ. ಕಾಲ ಕ್ರಮೇಣ ಅದು ಪೋಡ್ ಆಗಿಲ್ಲ. ಇದರಿಂದ ಬಹಳಷ್ಟು ಜನರಿಗೆ ತೊಂದರೆಯಾಗಿದೆ. ಕಷ್ಟ ಕಾಲದಲ್ಲಿ ಜಮೀನು ಮಾರಾಟ ಮಾಡಲು ಆಗುತ್ತಿಲ್ಲ. ಹಾಗಾಗಿ ಅಂತಹ ಪ್ರಕರಣಗಳನ್ನು ಪತ್ತೆ ಹಚ್ಚಿ ಪೋಡ್ ಮಾಡಬೇಕು ಎಂದು ಹೇಳಿದರು.
ಮಲೆನಾಡಿನ ತಾಲೂಕುಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಕಂದಾಯ ಗ್ರಾಮಗಳ ಗುರುತಿಸುವಿಕೆ ಕೆಲಸ ಆಗಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ ಹೊರ ಹಾಕಿದರು.
ಕೆಲವು ಸರ್ವೆ ನಂಬರ್‌ಗಳು ಸೊಪ್ಪಿನಬೆಟ್ಟ, ಅರಣ್ಯ ವ್ಯಾಪ್ತಿಯಲ್ಲಿ ಇರುವುದರಿಂದ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಸಾಧಿಸಲು ಸಾಧ್ಯವಾಗಿಲ್ಲ ಎಂದು ಶೃಂಗೇರಿ ತಹಸೀಲ್ದಾರ್ ಅನೂಪ್ ಹೇಳಿದರು.
26 ಕೆಸಿಕೆಎಂ 1ಚಿಕ್ಕಮಗಳೂರು ಜಿಪಂ ಸಭಾಂಗಣದಲ್ಲಿ ರಾಜ್ಯ ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ ಗುರುವಾರ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು.