ಉಡುಪಿ ಜಿಲ್ಲೆಯಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯ: ಪ್ರೇಮ್ ಪ್ರಸಾದ್ ಶೆಟ್ಟಿ

KannadaprabhaNewsNetwork |  
Published : Nov 13, 2026, 02:30 AM IST
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ನ.14ರಂದು ಕಾರ್ಕಳದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ | Kannada Prabha

ಸಾರಾಂಶ

ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಬಹುದಿನಗಳ ಬೇಡಿಕೆಗೆ ಬಲ ತುಂಬುವ ಉದ್ದೇಶದಿಂದ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ, ಉಡುಪಿ ಜಿಲ್ಲೆ, ಕಾರ್ಕಳ ಯು-ಆಕ್ಟ್ ಹಾಗೂ ವಕೀಲರ ಸಂಘ ನೇತೃತ್ವದಲ್ಲಿ 14ರಂದು ಕಾರ್ಕಳದ ಹೋಟೆಲ್ ಪ್ರಕಾಶ್ ಸಭಾಂಗಣದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ ಆಯೋಜಿಸಲಾಗಿದೆ.

ಕಾರ್ಕಳ: ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಬಹುದಿನಗಳ ಬೇಡಿಕೆಗೆ ಬಲ ತುಂಬುವ ಉದ್ದೇಶದಿಂದ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿ, ಉಡುಪಿ ಜಿಲ್ಲೆ, ಕಾರ್ಕಳ ಯು-ಆಕ್ಟ್ ಹಾಗೂ ವಕೀಲರ ಸಂಘ ನೇತೃತ್ವದಲ್ಲಿ 14ರಂದು ಕಾರ್ಕಳದ ಹೋಟೆಲ್ ಪ್ರಕಾಶ್ ಸಭಾಂಗಣದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ ಆಯೋಜಿಸಲಾಗಿದೆ.

ಕಾರ್ಕಳ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಉಡುಪಿ ಜಿಲ್ಲಾ ಸಂಚಾಲಕ ಹಾಗೂ ನ್ಯಾಯವಾದಿ ಪ್ರೇಮ್ ಪ್ರಸಾದ್ ಶೆಟ್ಟಿ, ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾದರೆ ನ್ಯಾಯಕ್ಕಾಗಿ ಬೆಂಗಳೂರಿಗೆ ಅಲೆದಾಡುತ್ತಿರುವ ಸಾವಿರಾರು ಕಕ್ಷಿದಾರರಿಗೆ ಅನುಕೂಲವಾಗಲಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸುಮಾರು 80 ಲಕ್ಷ ಜನರಿಗೆ ನ್ಯಾಯದಾನ ವ್ಯವಸ್ಥೆ ಸುಲಭವಾಗಿ ಲಭ್ಯವಾಗಲಿದೆ ಎಂದರು.

ಪ್ರಸ್ತುತ ನ್ಯಾಯಕ್ಕಾಗಿ ಬೆಂಗಳೂರಿಗೆ ತೆರಳಬೇಕಾದ ಅನಿವಾರ್ಯತೆಯಿಂದ ಸಾರ್ವಜನಿಕರು ಮತ್ತು ಸಾಮಾನ್ಯ ಕುಟುಂಬಗಳು ಹೆಚ್ಚಿನ ಹಣ, ಸಮಯ ಹಾಗೂ ಶ್ರಮ ವ್ಯಯಿಸಬೇಕಾಗಿದೆ. ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾದರೆ ಈ ಹೊರೆಯನ್ನು ಕಡಿಮೆ ಮಾಡುವುದರ ಜತೆಗೆ ನ್ಯಾಯದಾನ ಪ್ರಕ್ರಿಯೆ ವೇಗಗೊಳ್ಳಲಿದೆ. ಸ್ಥಳೀಯ ಆಡಳಿತ ವ್ಯವಸ್ಥೆಯೂ ಹೆಚ್ಚು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯನ್ನು ಪರಿಶೀಲಿಸುವ ನಿಟ್ಟಿನಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸೆ.29ರಂದು ನ್ಯಾಯಮೂರ್ತಿ ಅನು ಶಿವರಾಮನ್, ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಹಾಗೂ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಾಧೀಶರ ಸಮಿತಿ ರಚಿಸಿರುವುದನ್ನು ಹೋರಾಟ ಸಮಿತಿ ಸ್ವಾಗತಿಸಿದೆ ಎಂದರು.

ಕೇಂದ್ರಬಿಂದು: ಉಡುಪಿ ಜಿಲ್ಲೆಯು ಮೂರು ಕರಾವಳಿ ಜಿಲ್ಲೆಗಳಿಗೆ ಕೇಂದ್ರಬಿಂದುವಾಗಿದ್ದು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕೆಲವು ತಾಲೂಕುಗಳಿಗೂ ಸಮೀಪದಲ್ಲಿದೆ. ಹೀಗಾಗಿ ಉದ್ದೇಶಿತ ಸಂಚಾರಿ ಅಥವಾ ಶಾಶ್ವತ ಹೈಕೋರ್ಟ್ ಪೀಠವನ್ನು ಉಡುಪಿ ಜಿಲ್ಲೆಯಲ್ಲೇ ಸ್ಥಾಪಿಸಬೇಕು ಎಂಬುದು ಸಮಿತಿಯ ಪ್ರಮುಖ ಆಗ್ರಹವಾಗಿದೆ ಎಂದು ಹೇಳಿದರು.

ಈ ಹೋರಾಟ ಯಾವುದೇ ರಾಜಕೀಯ ಪಕ್ಷಕ್ಕೆ ಸೀಮಿತವಾಗಿರದೆ, ಸಾರ್ವಜನಿಕ ಹಿತಾಸಕ್ತಿಯನ್ನು ಆಧರಿಸಿದ ಪಕ್ಷಾತೀತ ಹೋರಾಟವಾಗಿದೆ. ಎಲ್ಲ ರಾಜಕೀಯ ಪಕ್ಷಗಳು, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಹೋರಾಟಕ್ಕೆ ಬೆಂಬಲ ನೀಡಬೇಕು. ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸುವುದು ಹಾಗೂ ಜನಾಭಿಪ್ರಾಯ ಕ್ರೋಡೀಕರಿಸುವ ಉದ್ದೇಶದಿಂದ ಕಾರ್ಕಳದಲ್ಲಿ ಹಕ್ಕೊತ್ತಾಯ ಸಭೆ ಆಯೋಜಿಸಲಾಗಿದೆ ಎಂದು ಪ್ರೇಮ್ ಪ್ರಸಾದ್ ಶೆಟ್ಟಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವಕೀಲರ ಸಂಘ ಕಾರ್ಕಳದ ಅಧ್ಯಕ್ಷ ಪ್ರಕಾಶ್ ಆಚಾರ್, ಕಾರ್ಯದರ್ಶಿ ಪದ್ಮ ಪ್ರಸಾದ್ ಜೈನ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಗುಲಾಬಿ ಮೆಟ್ರೋ ಮಾರ್ಗ ಉದ್ಘಾಟನೆ
ಚಲ್ಲಘಟ್ಟ ಮೆಟ್ರೋ ಡಿಪೋ ಬಳಿ ಅಂಡರ್‌ಪಾಸ್‌