ಔರಾದ್: ತಾಲೂಕಿನ ಸಾವರಗಾಂವ ಗ್ರಾಮಸ್ಥರಿಗೆ ಸಮರ್ಪಕವಾಗಿ ಕುಡಿಯಲು ನೀರು ಪೂರೈಸಲು ಸರ್ಕಾರಕ್ಕೆ ನಿರ್ದೇಶನ ಕೋರಿ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಇತ್ತೀಚೆಗೆ ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಸರ್ಕಾರದ ಪ್ರಧಾನ ಕಾರ್ಯದರ್ಶಿ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಬೆಂಗಳೂರು, ಜಿಲ್ಲಾಧಿಕಾರಿಗಳು ಬೀದರ್, ಸಿಇಒ ಜಿಪಂ ಬೀದರ್, ತಹಸೀಲ್ದಾರ್ ಔರಾದ್, ಇಒ ತಾಪಂ ಔರಾದ್, ಕಾರ್ಯನಿರ್ವಾಹಕ ಅಭಿಯಂತರರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೀದರ್ ಹಾಗೂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಔರಾದ್ ಅವರನ್ನು ಪ್ರಕರಣದಲ್ಲಿ ಪ್ರತಿವಾದಿಗಳಾಗಿದ್ದಾರೆ ಎಂದು ತಿಳಿಸಿದ್ದಾರೆ.
2020-21ರಲ್ಲಿ ಸಾವರಗಾಂವ ಗ್ರಾಮಕ್ಕೆ ಜೆಜೆಎಂ ಯೋಜನೆಡಿಯಲ್ಲಿ 141 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದೆ. ಆದರೆ ಇಲ್ಲಿಯವರೆಗೆ ಗ್ರಾಮಸ್ಥರಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗಿಲ್ಲ. ಗ್ರಾಪಂನಿಂದ ಸಮರ್ಪಕ ವ್ಯವಸ್ಥೆ ಕೈಗೊಂಡಿಲ್ಲ. ಗ್ರಾಮಸ್ಥರಿಗೆ ನೀರಿನ ಸಮಸ್ಯೆ ಎದುರಾಗಿದೆ ಎಂದು ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಮಾಡಬೇಕೆಂದು ಗುರುನಾಥ ವಡ್ಡೆ ಹೈಕೋರ್ಟಗೆ ಸಲ್ಲಿಸಿದ ಅರ್ಜಿಯಲ್ಲಿ ವಿನಂತಿಸಿದ್ದಾರೆ.