ಬೆಂಗಳೂರು : ನ್ಯಾಯಾಲಯದ ಆದೇಶ ಹಾಗೂ ನಿರ್ದೇಶಗಳನ್ನು ಪಾಲಿಸಲು ರಾಜ್ಯ ಸರ್ಕಾರ ಎಲ್ಲ ಇಲಾಖೆಗಳು ಮತ್ತು ಪ್ರಾಧಿಕಾರಗಳಲ್ಲಿ ಆಂತರಿಕ ಮೇಲ್ವಿಚಾರಣಾ ವ್ಯವಸ್ಥೆ ಆರಂಭಿಸುವ ವಿಚಾರ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಸರ್ಕಾರದ 41 ಇಲಾಖೆಗಳಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ನ್ಯಾಯಾಲಯಗಳ ಆದೇಶ ಪಾಲಿಸಲು ಸರ್ಕಾರ ಮತ್ತದರ ಪ್ರಾಧಿಕಾರಗಳು ನಿರ್ಲಕ್ಷ್ಯ ಹಾಗೂ ವಿಳಂಬ ಧೋರಣೆ ಪ್ರದರ್ಶಿಸುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ಅರ್ಜಿಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಕೃಷಿ, ಕಂದಾಯ, ಆರೋಗ್ಯ ಹಾಗೂ ಗೃಹ ಇಲಾಖೆ ಸೇರಿದಂತೆ 41 ಇಲಾಖೆ, ಬಿಡಿಎ, ಬಿಬಿಎಂಪಿ ಆಯುಕ್ತರು ಮತ್ತು ಕೆಐಎಡಿಬಿ ಕಾರ್ಯಕಾರಿ ನಿರ್ದೇಶಕರನ್ನು ಪ್ರತಿವಾದಿ ಮಾಡಲಾಗಿದೆ. ಅರ್ಜಿದಾರರ ಪರ ವಕೀಲ ಮಧುಕರ್ ಎಂ. ದೇಶಪಾಂಡೆ ಅವರ ವಾದ ಆಲಿಸಿದ ವಿಭಾಗೀಯ ಪೀಠ, ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ನೀಡಿ ವಿಚಾರಣೆ ಮುಂದೂಡಿತು.
ನ್ಯಾಯಾಲಯಗಳ ಆದೇಶ ಪಾಲಿಸಲು ಸರ್ಕಾರ ಮತ್ತದರ ಪ್ರಾಧಿಕಾರಗಳು ನಿರ್ಲಕ್ಷ್ಯ ಹಾಗೂ ವಿಳಂಬ ನೀತಿ ಅನುಸರಿಸುತ್ತಿವೆ. ನ್ಯಾಯಾಲಯಗಳ ಮೊರೆ ಹೋಗುವುದು ಸಾರ್ವಜನಿಕರ ಮೂಲಭೂತ ಹಕ್ಕು , ಹಾಗಾಗಿ ಆದೇಶ ಪಾಲಿಸದಿರುವುದು ಜನರ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ನ್ಯಾಯಾಲಯಗಳ ಆದೇಶ ಪಾಲಿಸಲು ಅಧಿಕಾರಿಗಳು ತೋರುತ್ತಿರುವ ನಿರ್ಲಕ್ಷ್ಯ ಒಪ್ಪುವಂಥದ್ದಲ್ಲ. ಆದ್ದರಿಂದ ನ್ಯಾಯಾಲಯಗಳ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ. ಅದಕ್ಕಾಗಿ ಎಲ್ಲ ಇಲಾಖೆಗಳಲ್ಲಿ ಆಂತರಿಕ ಮೇಲ್ವಿಚಾರಣಾ ಸಮಿತಿ ಆರಂಭಿಸಬೇಕಿದೆ. ಈ ಕುರಿತು ಅಗತ್ಯ ನಿರ್ದೇಶನ ನೀಡಬೇಕಿರುವ ಹಿನ್ನೆಲೆಯಲ್ಲಿ ಸರ್ಕಾರ ಮತ್ತದರ ಎಲ್ಲ ಇಲಾಖೆಗಳನ್ನು ಪ್ರತಿವಾದಿ ಮಾಡಿ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸುವಂತೆ ರಿಜಿಸ್ಟ್ರಾರ್ ಜನರಲ್ ಅವರಿಗೆ ಹೈಕೋರ್ಟ್ ವಿಭಾಗೀಯ ಪೀಠವು ಕಳೆದ ಏ.8ರಂದು ನಿರ್ದೇಶಿಸಿತ್ತು. ಅದರಂತೆ ರಿಜಿಸ್ಟ್ರಾರ್ ಜನರಲ್ ಅವರು ಈ ಅರ್ಜಿ ದಾಖಲಿಸಿದ್ದಾರೆ.