;Resize=(412,232))
ಬೆಂಗಳೂರು: ಮನೆಯಲ್ಲಿ ಅನಧಿಕೃತವಾಗಿ ಶಸ್ತ್ರಾಸ್ತ್ರ ಇರಿಸಿಕೊಂಡ ಆರೋಪದ ಮೇಲೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮ್ಮರೂಡಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ತಡೆಯಾಜ್ಞೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರ ಪೀಠ ಇತ್ತೀಚೆಗೆ ಈ ಆದೇಶ ಮಾಡಿದೆ.
ಅಲ್ಲದೆ, ಅರ್ಜಿ ಸಂಬಂಧ ಬೆಳ್ತಂಗಡಿ ಠಾಣಾ ಪೊಲೀಸರಿಗೆ ಮತ್ತು ಪ್ರಕರಣದ ದೂರುದಾರಾಗಿರುವ ಎಸ್‌ಐಟಿ ಪೊಲೀಸ್ ಅಧಿಕಾರಿ ಸಿ.ಎ.ಸಿಮನ್‌ಗೆ ನೋಟಿಸ್ ಜಾರಿ ಮಾಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಮಹೇಶ್ ತಿಮ್ಮರೂಡಿ ಅವರ ಮನೆಯಲ್ಲಿ 2025ರ ಆ.26ರಂದು ಶೋಧ ನಡೆಸಿದ್ದ ಎಸ್‌ಐಟಿ ಪೊಲೀಸರು, ಸೆ.16ರಂದು ದೂರು ನೀಡಿದ್ದಾರೆ. ಅದರೂ ಅರ್ಜಿದಾರರ ಮನೆಯಲ್ಲಿ ಪರವಾನಗಿಯಿಲ್ಲದ ಏರ್‌ಗನ್ ವಶಪಡಿಸಿಕೊಂಡಿದ್ದು ಶಸ್ತ್ರಾಸ್ತ್ರ ಕಾಯ್ದೆ-1959ರ ಅಡಿ ದೂರು ದಾಖಲಿಸಿದ್ದಾರೆ. ಅರ್ಜಿದಾರರಿಗೆ ಕಿರುಕುಳ ನೀಡುವ ಏಕೈಕ ಉದ್ದೇಶದಿಂದ ಈ ದೂರು ದಾಖಲಿಸಲಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಈ ವಾದ ಪರಿಗಣಿಸಿದ ನ್ಯಾಯಪೀಠ, ಅರ್ಜಿ ಕುರಿತ ಮುಂದಿನ ವಿಚಾರಣೆವರೆಗೆ ಶಸ್ತ್ರಾಸ್ತ ಕಾಯ್ದೆಯಡಿ ಅರ್ಜಿದಾರರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದ ತನಿಖೆಗೆ ತಡೆಯಾಜ್ಞೆ ನೀಡಿ ವಿಚಾರಣೆಯನ್ನು ನವೆಂಬರ್ ಮೂರನೇ ವಾರಕ್ಕೆ ಮುಂದೂಡಿತು.
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಸಮಾಧಿ ಹೂತಿಟ್ಟ ದೂರಿಗೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಎಸ್‌ಐಟಿ ಪೊಲೀಸರು, ಆ.26ರಂದು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಶೋಧ ನಡೆಸಿದ ವೇಳೆ ಎರಡು ತಲವಾರುಗಳು ಮತ್ತು ಒಂದು ಬಂದೂಕು ಸೇರಿದಂತೆ ಒಟ್ಟು 44 ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಈ ಬಗ್ಗೆ ತನಿಖಾ ತಂಡ ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಿತ್ತು. ನಂತರ ಎಸ್‌ಐಟಿ ಅಧಿಕಾರಿ ಸಿಮನ್ ಅವರು ಸೆ.16ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿ, ತಿಮರೋಡಿ ತಮ್ಮ ಮನೆಯಲ್ಲಿ ಅಕ್ರಮವಾಗಿ ಮಾರಕಾಸ್ತ್ರಗಳನ್ನು ಸಂಗ್ರಹಿಸಿಟ್ಟಿರುವ ಬಗ್ಗೆ ಮುಂದಿನ ತನಿಖೆ ನಡೆಸಬೇಕು ಎಂದು ಕೋರಿದ್ದರು. ಈ ದೂರಿನ ಆಧಾರದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿತ್ತು.