ಹಾವೇರಿ: ಬೆಳಗಾವಿಯಲ್ಲಿ ಡಿ. 2ರಿಂದ 11ರ ವರೆಗೆ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ವಿಚಾರಗಳಿಗೆ ವಿಶೇಷ ಒತ್ತು ನೀಡಿ, ಸಮಗ್ರ ಕರ್ನಾಟಕದ ಅಭಿವೃದ್ಧಿ ಕುರಿತು ವಿಸ್ತ್ರತ ಚರ್ಚೆಗೆ ಅವಕಾಶ ಕಲ್ಪಿಸಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಹೇಳಿದರು.
ಒಟ್ಟು ಒಂಬತ್ತು ದಿನಗಳ ಅಧಿವೇಶನದ ಅವಧಿಯನ್ನು ಒಂದು ದಿನ ವಿಸ್ತರಿಸುವ ಸಾಧ್ಯತೆಯಿದೆ. ಈ ಕುರಿತು ಬಿಸಿನೆಸ್ ಅಡ್ವೈಸರಿ ಕಮಿಟಿಯಲ್ಲಿ ಚರ್ಚೆ ನಡೆಸಲಾಗುವುದು. ಸರ್ಕಾರದ ತೀರ್ಮಾನದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಚರ್ಚೆ ತಡವಾದರೂ ಸದನದಲ್ಲಿ ಕುಳಿತುಕೊಳ್ಳಲು ಸಿದ್ಧನಿದ್ದೇನೆ. ಆಡಳಿತ ಮತ್ತು ವಿರೋಧ ಪಕ್ಷಗಳು ಸಹಕಾರ ನೀಡಬೇಕು. ಅಧಿವೇಶನದ ಪ್ರತಿಯೊಂದು ನಿಮಿಷವೂ ಅಮೂಲ್ಯವಾಗಿದ್ದು, ಉತ್ತರ ಕರ್ನಾಟಕದ ಜನರ ಭಾವನೆಗಳನ್ನು ಹುಸಿಗೊಳಿಸುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಹಿಂದಿನ ವಿಶೇಷ ಅಧಿವೇಶನದಲ್ಲಿ ಕಸ್ತೂರಿ ರಂಗನ್ ವರದಿ ಕುರಿತು 18 ಗಂಟೆಗಳ ಕಾಲ ಚರ್ಚೆ ನಡೆಸಲಾಗಿತ್ತು. ಬರಗಾಲ ಮತ್ತು ರೈತರ ಸಮಸ್ಯೆಗಳ ಕುರಿತು ವಿಧಾನ ಪರಿಷತ್ತಿನಲ್ಲಿ 38 ಗಂಟೆಗಳ ಕಾಲ ಚರ್ಚೆಗೆ ಅವಕಾಶ ನೀಡಲಾಗಿತ್ತು. ಈ ಬಾರಿಯೂ ರೈತರ ಸಮಸ್ಯೆ ಹಾಗೂ ಬರಗಾಲದ ವಿಚಾರಗಳಿಗೆ ಹೆಚ್ಚಿನ ಸಮಯ ಮೀಸಲಿಡಲಾಗುವುದು ಎಂದರು.ಆಶಾ ಕಾರ್ಯಕರ್ತೆಯರ ಹೋರಾಟದ ಕುರಿತು ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರು ಈಗಾಗಲೇ ಮಾತನಾಡಿದ್ದಾರೆ ಎಂದು ಹೇಳಿದರು.